ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Cabinet Meeting: ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್‌ ನ್ಯೂಸ್‌; ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಚಿವ ಸಂಪುಟ ಒಪ್ಪಿಗೆ

ಸಚಿವ ಸಂಪುಟ ಸಭೆಯಲ್ಲಿ ಸುಮಾರು 27 ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಪ್ರಮುಖವಾಗಿ ರಾಜ್ಯದ ಎಲ್ಲಾ ಬಿ-ಖಾತಾಗಳಿಗೂ ಎ-ಖಾತಾ ನೀಡುವುದು ಹಾಗೂ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಲ್ಲುಕೋಟೆ ಮತ್ತು ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಕಾಂಗ್ರೆಸ್‌ ಭವನಕ್ಕೆ ಭೂಮಿ ನಿರ್ಮಾಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಗುಡ್‌ ನ್ಯೂಸ್‌; ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸಚಿವ ಸಂಪುಟ ಒಪ್ಪಿಗೆ

ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) -

Prabhakara R
Prabhakara R Jan 8, 2026 4:54 PM

ಬೆಂಗಳೂರು: ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಇದೇ ವೇಳೆ ತುಮಕೂರು ಮತ್ತು ರಾಯಚೂರಿನಲ್ಲಿ ಕಾಂಗ್ರೆಸ್​​ ಭವನ ಟ್ರಸ್ಟ್​​ಗೆ ಜಾಗ ನೀಡಲು ಸಂಪುಟ ಒಪ್ಪಿಗೆ ನೀಡಿದೆ.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್.ಕೆ ಪಾಟೀಲ್ ಅವರು, ಸಚಿವ ಸಂಪುಟ ಸುಮಾರು 27 ನಿರ್ಣಯಗಳನ್ನು ಕೈಗೊಂಡಿದೆ. ಪ್ರಮುಖವಾಗಿ ಬೆಂಗಳೂರಿನ ಜಿಬಿಎ ವ್ಯಾಪ್ತಿಯಲ್ಲಿ ಮಾಡಿರುವಂತೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ರಚಿಸಿರುವ ಬಡಾವಣೆಗಳಲ್ಲಿನ ಬಿ ಖಾತಾ ನಿವೇಶನ, ಕಟ್ಟಡ, ಅಪಾರ್ಟ್‌ಮೆಂಟ್‌, ಫ್ಲ್ಯಾಟ್‌ಗಳಿಗೆ ಎ ಖಾತಾ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದರು.

ರಾಜ್ಯದ ಬಿ-ಖಾತಾ ನಿವೇಶನ, ಕಟ್ಟಡ, ಫ್ಲ್ಯಾಟ್‌ಗಳಿಗೆ ಎ-ಖಾತಾ ನೀಡಲು ನಿರ್ಧರಿಸಲಾಗಿದೆ. ರಾಜ್ಯಾದ್ಯಂತ 10 ಲಕ್ಷ ಕಟ್ಟಡಗಳಿಗೆ ಇದರಿಂದ ಲಾಭವಾಗಲಿದೆ. ಬೆಂಗಳೂರು ಬಳಿಕ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೂ ಇದನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಮಂಜೂರು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಲ್ಲುಕೋಟೆ ಗ್ರಾಮದ ಸ.ನಂ.49 ರಲ್ಲಿ 7.5 ಗುಂಟೆ ಜಮೀನು ಮತ್ತು ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಸಿರವಾರ ಸೀಮಾದಲ್ಲಿ 10 ಗುಂಟೆ ಜಮೀನನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಬೆಂಗಳೂರಿನ ಕಾಂಗ್ರೆಸ್ ಭವನ ಟ್ರಸ್ಟ್ ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ವಿಲೀನಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಯುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ

33 ಕೈದಿಗಳಿಗೆ ಬಿಡುಗಡೆ ಭಾಗ್ಯ

ಸನ್ನಡತೆ ಆಧಾರದ ಮೇಲೆ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ 33 ಜೀವಾವಧಿ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇದರಲ್ಲಿ ಇಬ್ಬರು ಶಿಕ್ಷಾ ಬಂಧಿಗಳ ಬಿಡುಗಡೆಗೆ ಕೇಂದ್ರ ಗೃಹ ಇಲಾಖೆ ಅನುಮತಿ ಪಡೆಯಲು ನಿರ್ಧರಿಸಲಾಗಿದೆ.

ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

  • ಕೆಎಸ್‌ಡಿಎಲ್‌ ಬೆಂಗಳೂರು ಸಂಕೀರ್ಣಕ್ಕೆ 17.70 ಕೋಟಿ ಮೊತ್ತದ ಸಾಬೂನು ತಯಾರಿಸುವ ಯಂತ್ರ ಖರೀದಿಗೆ ಅನುಮೋದನೆ.
  • ಸಹಕಾರ ಇಲಾಖೆಯಿಂದ ಕೋಲಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ 24.96 ಕೋಟಿ ವೆಚ್ಚದಲ್ಲಿ ಪಿಪಿಪಿ ಮಾದರಿಯ 50 ಟಿಪಿಡಿ ಬಯೋ ಸಿಎನ್​ಜಿ ಘಟಕ ಸ್ಥಾಪನೆ ಮಾಡುವ ಪ್ರಸ್ತಾವನೆ ಕೈಬಿಡಲಾಗಿದೆ. ಇಲ್ಲಿನ ಎಪಿಎಂಸಿಯಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯವನ್ನು ಗೇಲ್‌ ಸಂಸ್ಥೆ ಸ್ಥಾಪಿಸುತ್ತಿರುವ 150 ಟಿಪಿಡಿ ಸಿಬಿಜಿ ಘಟಕಕ್ಕೆ ಪೂರೈಸಲು ಒಪ್ಪಿಗೆ.
  • ಕಲಬುರಗಿಯಲ್ಲಿ 50 ಕೋಟಿ ರೂ. ಕೆಕೆಆರ್‌ಡಿಬಿ ಅನುದಾನದಿಂದ ವೆಚ್ಚದಲ್ಲಿ ನೂತನ ಮೆಗಾ ಡೇರಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.
  • ಕಲಬುರಗಿಯಲ್ಲಿ ಕೆಕೆಆರ್‌ಡಿಬಿ ಅನುದಾನದಿಂದ 10 ಕೋಟಿ ವೆಚ್ಚದಲ್ಲಿ ಪ್ರಾದೇಶಿಕ ಸಹಕಾರ ಭವನ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.
  • 127.40 ಕೋಟಿ ಅಂದಾಜು ಮೊತ್ತದಲ್ಲಿ PM-ABHIM ಯೋಜನೆಯಡಿ 2024-26ನೇ ಸಾಲಿನಲ್ಲಿ ರಾಜ್ಯಾದ್ಯಂತ 196 SC-AAM (Rural Health and Wellness Centre) ಸ್ಥಾಪನೆ ಆದೇಶಕ್ಕೆ ಘಟನೋತ್ತರ ಅನುಮೋದನೆ.
  • ಬೆಂಗಳೂರಿನ ಜಯನಗರದಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ 2ನೇ ಹಂತದ ಕಟ್ಟಡ ಕಾಮಗಾರಿಯನ್ನು 24 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
  • ಚಿಕ್ಕಬಳ್ಳಾಪುರದ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನೂತನ ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ಅವಶ್ಯವಿರುವ ಯಂತ್ರೋಪಕರಣ ಮತ್ತು ಪೀಠೋಪಕರಣಗಳನ್ನು 40 ಕೋಟಿ ರೂ. ಅಂದಾಜು ಮೊತ್ತದಲ್ಲಿ ಖರೀದಿ
  • ಹೊಳೆನರಸೀಪುರ ಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯ 12.30 ಕೋಟಿ ರೂ. ಪರಿಷ್ಕೃತ ಮೊತ್ತಕ್ಕೆ ಅನುಮೋದನೆ.
  • ಚಾಮರಾಜನಗರ ತಾಲೂಕಿನ 166 ಗ್ರಾಮಗಳ ಬಹುಗ್ರಾಮ ಕುಡಿಯುವ ಸರಬರಾಜು ನೀರು ಯೋಜನೆಯ 3 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಕಾಮಗಾರಿ 33.04 ಕೋಟಿ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ.
  • ಹಳಿಯಾಳ ಪಟ್ಟಣಕ್ಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಯಡಿ ನಿರ್ಮಿಸಲಾಗಿರುವ ವಿವಿಧ ಘಟಕಗಳ 5 ವರ್ಷಗಳ ನಿರ್ವಹಣೆ ಮತ್ತು ದುರಸ್ತಿ ಕಾಮಗಾರಿಯನ್ನು 10.60 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
  • ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಮಹಾತ್ಮಾ ಗಾಂಧಿ, ఇంದಿರಾ ಗಾಂಧಿ, ಜವಾಹರಲಾಲ್ ನೆಹರು ಮತ್ತು ರಾಜೀವ್ ಗಾಂಧಿ ಪುತ್ಥಳಿಗಳನ್ನು ಸ್ಥಾಪಿಸಲು ಅನುಮೋದನೆ.
  • ಲೋಕೋಪಯೋಗಿ ಇಲಾಖೆಯ ಮೂಲಕ 70.70 ಕೋಟಿ ವೆಚ್ಚದಲ್ಲಿ ಮಂಡ್ಯದ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆಡಳಿತ ಭವನ ನಿರ್ಮಾಣ.
  • 11.03 ಕೋಟಿ ವೆಚ್ಚದಲ್ಲಿಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದುಬ್ಬನಶಶಿಯ ಮತ್ತು ಗಂಗೆಕೊಳ್ಳದ ಕಡಲ ತೀರದಲ್ಲಿ ಸಮುದ್ರ ಕೊರೆತ ಪ್ರತಿಬಂಧಕ ಕಾಮಗಾರಿಯ ಪರಿಷ್ಕೃತ ಅಂದಾಜಿಗೆ ಅನುಮೋದನೆ.
  • ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬಾಳೆಪುಣಿ ಗ್ರಾಮದ ಸ.ನಂ. 87/4ರಲ್ಲಿ 5 ಎಕರೆ ಜಮೀನನ್ನು ಎಲೆಕ್ಟ್ರಿಕ್ ಬಸ್‌ಗಳನ್ನು ಕಾರ್ಯಾಚರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗಕ್ಕೆ ಮಂಜೂರಿಗೆ ಒಪ್ಪಿಗೆ.