ಬೆಂಗಳೂರು: ರಾಜ್ಯದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು (Caste census) ಅಕ್ಟೋಬರ್ 31ರವರೆಗೆ ವಿಸ್ತರಿಸಲು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ತಿಳಿಸಿದ್ದಾರೆ.
ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷಾ ಕಾರ್ಯದಲ್ಲಿ ಶಿಕ್ಷಕರನ್ನು ಬಳಸಿಕೊಳ್ಳಲ್ಲ. ವಿವಿಧ ಇಲಾಖೆಯ ಸಿಬ್ಬಂದಿಯನ್ನು ಬಳಸಿ ಸಮೀಕ್ಷೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಸಮೀಕ್ಷಾದಾರರಿಗೆ ಮೂರು ದಿನ ರಜೆ
ಮುಖ್ಯಮಂತ್ರಿಗಳ ನಿರ್ದೇಶನದಂತೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಕ್ಟೋಬರ್ 20, 21 ಹಾಗೂ 22 ರಂದು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಿಬ್ಬಂದಿಗೆ ರಜೆ ನೀಡಲಾಗಿದೆ. ಅ.23 ಮೂರರಿಂದ ಸಮೀಕ್ಷೆ ಪುನಃ ಪ್ರಾರಂಭವಾಗಲಿದೆ. ಆಯಾ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿನ ವಿವಿಧ ಇಲಾಖೆಯ ಸಿಬ್ಬಂದಿಯನ್ನು ಬಳಸಿ ಅಕ್ಟೋಬರ್ 23 ರಿಂದ 31 ರವರೆಗೆ ಸಮೀಕ್ಷೆ ಕಾರ್ಯವನ್ನ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿಸಿದರು.
ರಾಜ್ಯಾದ್ಯಂತ ಶೇ.95 ಸಮೀಕ್ಷೆ
ಗ್ರೇಟರ್ ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಶೇ. 95 ಸಮೀಕ್ಷೆ ಕಾರ್ಯ ಪೂರ್ಣಗೊಂಡಿದ್ದು, ರಾಮನಗರ ಶೇ.86, ಧಾರವಾಡ ಶೇ.88 ಹಾಗೂ ಬೀದರ್ ಜಿಲ್ಲೆಗಳಲ್ಲಿ ಶೇ 79.46 ಸಮೀಕ್ಷೆ ನಡೆದಿದೆ.
ಈ ಸುದ್ದಿಯನ್ನೂ ಓದಿ | Caste Census: ಜಿಬಿಎ ಅಧಿಕಾರಿಯಿಂದಲೇ ಜಾತಿ ಗಣತಿಗೆ ಅಸಹಕಾರ
ಬೆಂಗಳೂರಿನಲ್ಲಿ ಶೇ. 45ರಷ್ಟು ಸಮೀಕ್ಷೆ ಕಾರ್ಯ ನಡೆದಿದೆ. ಬೆಂಗಳೂರಿನಲ್ಲಿ ತಡವಾಗಿ ಸಮೀಕ್ಷೆ ಪ್ರಾರಂಭವಾದ ಕಾರಣ ಸಮೀಕ್ಷೆ ಕಡಿಮೆಯಾಗಿದೆ. ಕೆಲ ಜಿಲ್ಲೆಗಳಲ್ಲಿ ನೂರರಷ್ಟು ಸಮೀಕ್ಷೆ ಪೂರ್ಣಗೊಂಡಿದೆ. ಬಾಕಿ ಉಳಿದಿರುವ ಜಿಲ್ಲೆಗಳಲ್ಲಿ ಮಾತ್ರ ಸಮೀಕ್ಷೆ ಅಕ್ಟೋಬರ್ 31ರವರೆಗೆ ನಡೆಯಲಿದ್ದು, ಕೆಲ ಜಿಲ್ಲೆಗಳಲ್ಲಿ ಈ ಕಾರ್ಯ ಶೀಘ್ರವೇ ಪೂರ್ಣಗೊಳ್ಳಬಹುದು ಎಂದರು.
ಈ ಮೊದಲು ಸೆ.22 ರಿಂದ ಅ.7ರವರೆಗೆ ಜಾತಿ ಸಮೀಕ್ಷೆ ಕೈಗೊಳ್ಳಲು ಸರ್ಕಾರ ಉದ್ದೇಶಿಸಿತ್ತು. ಆದರೆ, ಸಮೀಕ್ಷೆ ಕಾರ್ಯ ಮುಗಿಯದ ಹಿನ್ನೆಲೆಯಲ್ಲಿ ದಸರಾ ರಜೆಯನ್ನು ಅ.18ರವರೆಗೆ ವಿಸ್ತರಿಸಲಾಗಿತ್ತು. ಆದರೆ, ಇನ್ನೂ ಸಮೀಕ್ಷೆ ಕಾರ್ಯ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಇದೀಗ ಅ.31ರವರೆಗೆ ಸಮೀಕ್ಷೆ ಅವಧಿಯನ್ನು ಸರ್ಕಾರ ವಿಸ್ತರಿಸಿದೆ.