ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

MLC Election 2026: ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಜಯಭೇರಿ, ಕಾಂಗ್ರೆಸ್‌ನ ಪುಟ್ಟಣ್ಣಗೆ ಮುಖಭಂಗ

Bangalore teachers' constituency Election 2026: ಅಕ್ಟೋಬರ್ 23 ರಂದು ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನದಲ್ಲಿ ಒಟ್ಟು 27,405 ಮತದಾರರ ಪೈಕಿ 22,468 ಮಂದಿ ಮತ ಚಲಾಯಿಸಿದ್ದು, ಶೇ.81.98ರಷ್ಟು ಮತದಾನವಾಗಿತ್ತು. ಮತ ಎಣಿಕೆಯ ವಿವಿಧ ಸುತ್ತುಗಳಲ್ಲಿ ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಅವರು ಮುನ್ನಡೆ ಕಾಯ್ದುಕೊಂಡಿದ್ದು, ಅಂತಿಮವಾಗಿ ಗೆಲುವಿನ ನಗೆ ಬೀರಿದ್ದಾರೆ.

ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ.

ಬೆಂಗಳೂರು, ಅ.27: ಕರ್ನಾಟಕ ವಿಧಾನಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಎ.ಪಿ. ರಂಗನಾಥ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದ ಆಡಳಿತರೂಢ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಅಂತಿಮವಾಗಿ ಸೋಲು ಅನುಭವಿಸಿದ್ದಾರೆ.

ಈ ಬಗ್ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಬೆಂಗಳೂರು ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಮಾಹಿತಿ ನೀಡಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಅಕ್ಟೋಬರ್ 23 ರಂದು ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನದಲ್ಲಿ ಒಟ್ಟು 27,405 ಮತದಾರರ ಪೈಕಿ 22,468 ಮಂದಿ ಮತ ಚಲಾಯಿಸಿದ್ದು, ಶೇ.81.98ರಷ್ಟು ಮತದಾನವಾಗಿತ್ತು. ಮತ ಚಲಾಯಿಸಿದವರಲ್ಲಿ 8,360 ಪುರುಷರು ಹಾಗೂ 14,108 ಮಹಿಳೆಯರು ಇದ್ದಾರೆ.

ಅ.27ರ ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೀದಿಯಲ್ಲಿರುವ ಸರ್ಕಾರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆದಿದ್ದು, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಎ.ಪಿ. ರಂಗನಾಥ್ ಅವರು ಗೆಲುವು ಸಾಧಿಸಿದ್ದಾರೆ. ಮತ ಎಣಿಕೆಯ ವಿವಿಧ ಸುತ್ತುಗಳಲ್ಲಿ ಎ.ಪಿ. ರಂಗನಾಥ್ ಅವರು ಮುನ್ನಡೆ ಕಾಯ್ದುಕೊಂಡಿದ್ದು, ಅಂತಿಮವಾಗಿ ಗೆಲುವಿನ ಗರಿ ಮುಡಿಗೇರಿಸಿಕೊಂಡಿದ್ದಾರೆ.

ಕೊನೆಯ ಸುತ್ತಿನ ಮತ ಎಣಿಕೆಯಲ್ಲಿ ಎ.ಪಿ. ರಂಗನಾಥ್ ಅವರು 10810 ಮತಗಳನ್ನು ಪಡೆದರೆ, ಕಾಂಗ್ರೆಸ್ ಪಕ್ಷದ ಪುಟ್ಟಣ್ಣ ಅವರು 9902 ಮತಗಳನ್ನು ಪಡೆದಿದ್ದರು. ಈ ಸುತ್ತಿನಲ್ಲಿ ರಂಗನಾಥ್ ಅವರು 908 ಮತಗಳ ಮುನ್ನಡೆ ಸಾಧಿಸಿದ್ದರು.

ಇತರೆ ಅಭ್ಯರ್ಥಿಗಳ ಪೈಕಿ ಕರ್ನಾಟಕ ರಾಷ್ಟ್ರ ಸಮಿತಿಯ ಅಭ್ಯರ್ಥಿಯಾದ ಡಾ. ಜಿ.ಆರ್. ಹೆಬ್ಬೂರು 94 ಮತಗಳು, ಪಕ್ಷೇತರ ಅಭ್ಯರ್ಥಿಯಾದ ಉಮೇಶ್ ಬಾಬು ಪಿಳ್ಳೆಗೌಡ 215 ಮತಗಳು, ಪಕ್ಷೇತರ ಅಭ್ಯರ್ಥಿಯಾದ ಬಿ .ಎಸ್. ನಾಗರಾಜು 11 ಹಾಗೂ ಪಕ್ಷೇತರ ಅಭ್ಯರ್ಥಿಯಾದ ಡಾ. ಎನ್. ಲಕ್ಷ್ಮಣ ಸ್ವಾಮಿ ಅವರು 24 ಮತಗಳನ್ನು ಪಡೆದಿದ್ದಾರೆ.

ಒಟ್ಟು 20616 ಮತಗಳು ಮಾನ್ಯವಾಗಿದ್ದು, 1857 ಮತಗಳು ತಿರಸ್ಕೃತಗೊಂಡಿದೆ ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಂಗಳೂರು ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಕ್ಷಕರ ವಿಶ್ವಾಸಕ್ಕೆ ಸಂದ ಜಯ, ಎನ್‌ಡಿಎ ಮೈತ್ರಿಕೂಟದ ಒಗ್ಗಟ್ಟಿನ ವಿಜಯ: ಆರ್. ಅಶೋಕ್‌

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಪಡೆದಿರುವ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಎ.ಪಿ. ರಂಗನಾಥ್ ಅವರಿಗೆ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಗೆಲುವು ಕೇವಲ ಒಬ್ಬ ಅಭ್ಯರ್ಥಿಯ ವಿಜಯವಲ್ಲ; ಶಿಕ್ಷಕರ ಹಿತಾಸಕ್ತಿಗಳ ಪರವಾಗಿ ನಿಂತ ಎನ್‌ಡಿಎ ಮೈತ್ರಿಕೂಟದ ಒಗ್ಗಟ್ಟು, ಸಂಘಟಿತ ಹೋರಾಟ ಹಾಗೂ ಪ್ರಜ್ಞಾವಂತ ಮತದಾರರ ವಿವೇಚನಾಪೂರ್ಣ ನಿರ್ಧಾರಕ್ಕೆ ಸಂದ ಜಯವಾಗಿದೆ ಎಂದು ತಿಳಿಸಿದ್ದಾರೆ.

ಎ.ಪಿ. ರಂಗನಾಥ್ ಅವರ ಮೇಲೆ ವಿಶ್ವಾಸವಿಟ್ಟು ತಮ್ಮ ಅಮೂಲ್ಯ ಮತಗಳ ಮೂಲಕ ಬೆಂಬಲ ನೀಡಿದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಸಮಸ್ತ ಗೌರವಾನ್ವಿತ ಶಿಕ್ಷಕ ಹಾಗೂ ಅಧ್ಯಾಪಕ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ಈ ಐತಿಹಾಸಿಕ ಗೆಲುವಿಗಾಗಿ ಶ್ರಮಿಸಿದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಎಲ್ಲಾ ಹಿರಿಯ ನಾಯಕರು, ಮುಖಂಡರು, ಪದಾಧಿಕಾರಿಗಳು ಹಾಗೂ ಹಗಲಿರುಳು ಶ್ರಮಿಸಿದ ಪ್ರತಿಯೊಬ್ಬ ಕಾರ್ಯಕರ್ತ ಬಂಧುಗಳಿಗೂ ವಿಶೇಷ ಅಭಿನಂದನೆಗಳು ಮತ್ತು ಕೃತಜ್ಞತೆಗಳು.

ರಾಜ್ಯದಲ್ಲಿ ಆಡಳಿತ ವೈಫಲ್ಯ, ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಗಳಿಂದ ಜನರ ವಿಶ್ವಾಸ ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಈ ಫಲಿತಾಂಶ ಮತ್ತೊಂದು ಸ್ಪಷ್ಟ ಎಚ್ಚರಿಕೆಯಾಗಿದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಮತದಾರರು ನೀಡುತ್ತಿರುವ ಉತ್ತರದ ಪ್ರತಿಬಿಂಬವೇ ಈ ಗೆಲುವು. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಆಡಳಿತಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂಬುದಕ್ಕೆ ಇದು ಮುನ್ನುಡಿಯಾಗಿದೆ.

ಮುಂದಿನ ದಿನಗಳಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಸದನದಲ್ಲಿ ಸಮರ್ಥ ಧ್ವನಿಯಾಗಿ, ಅವರ ನ್ಯಾಯಯುತ ಬೇಡಿಕೆಗಳು ಮತ್ತು ಹಕ್ಕುಗಳ ರಕ್ಷಣೆಗೆ ಬದ್ಧವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ, ರಾಜ್ಯದ ಶಿಕ್ಷಣ ಕ್ಷೇತ್ರದ ಗುಣಮಟ್ಟ ಮತ್ತು ಸರ್ವತೋಮುಖ ಪ್ರಗತಿಗೆ ಶ್ರೀ ಎ.ಪಿ. ರಂಗನಾಥ್ ಅವರು ಮಹತ್ವದ ಕೊಡುಗೆ ನೀಡಲಿ ಎಂದು ಹಾರೈಸುತ್ತೇನೆ.

ಈ ಗೆಲುವು ಎನ್‌ಡಿಎ ಮೈತ್ರಿಕೂಟದ ಒಗ್ಗಟ್ಟು, ಕಾರ್ಯಕರ್ತರ ಪರಿಶ್ರಮ ಮತ್ತು ಶಿಕ್ಷಕ ಸಮುದಾಯದ ವಿಶ್ವಾಸಕ್ಕೆ ಸಂದ ಜಯ. ಈ ವಿಜಯಕ್ಕಾಗಿ ಶ್ರಮಿಸಿದ ಹಾಗೂ ಬೆಂಬಲಿಸಿದ ಪ್ರತಿಯೊಬ್ಬರಿಗೂ ಮತ್ತೊಮ್ಮೆ ಹೃತ್ಪೂರ್ವಕ ಧನ್ಯವಾದಗಳು ಎಂದು ಆಶೋಕ್‌ ತಿಳಿಸಿದ್ದಾರೆ.