ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Basanagouda Patil Yatnal: ಸತ್ಯವಂತರಿಗಿದು ಕಾಲವಲ್ಲ, ದುಷ್ಟರಿಗೆ ಸುಭಿಕ್ಷಕಾಲ: ಉಚ್ಚಾಟನೆ ಬಗ್ಗೆ ಯತ್ನಾಳ್‌ ಕಿಡಿ

Basanagouda Patil Yatnal: ವಂಶಪಾರಂಪರ್ಯ ರಾಜಕಾರಣ, ಭ್ರಷ್ಟಾಚಾರ ವಿರುದ್ಧ ಮಾತನಾಡಿದ, ಏಕವ್ಯಕ್ತಿ ಧೋರಣೆ ತೆಗೆದುಹಾಕಿ, ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಮನವಿ ಮಾಡಿದ್ದಕ್ಕಾಗಿ ಪಕ್ಷ ನನ್ನನ್ನು 6 ವರ್ಷಗಳ ಕಾಲ ಉಚ್ಚಾಟಿಸಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ.

ಸತ್ಯವಂತರಿಗಿದು ಕಾಲವಲ್ಲ, ದುಷ್ಟರಿಗೆ ಸುಭಿಕ್ಷಕಾಲ: ಯತ್ನಾಳ್‌

Profile Prabhakara R Mar 26, 2025 6:40 PM

ಬೆಂಗಳೂರು: ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ಬಗ್ಗೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ರೋಶ ಹೊರಹಾಕಿದ್ದಾರೆ. ಹೈ ಕಮಾಂಡ್‌ನಿಂದ ಉಚ್ಚಾಟನೆ ಆದೇಶ ಹೊರಬಿದ್ದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಅವರು, ಪುರಂದರ ದಾಸರ ಕೀರ್ತನೆ ಉಲ್ಲೇಖಿಸಿ, ಬಿಜೆಪಿ ನಾಯಕರನ್ನು ಕುಟುಕಿದ್ದಾರೆ. ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ. ಉಪಕಾರ ಮಾಡಿದರೆ ಅಪಕರಿಸುವ ಕಾಲ. ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ. ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ. ಸತ್ಯವಂತರಿಗಿದು ಕಾಲವಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ವಂಶಪಾರಂಪರ್ಯ ರಾಜಕಾರಣ, ಭ್ರಷ್ಟಾಚಾರ ವಿರುದ್ಧ ಮಾತನಾಡಿದ, ಏಕವ್ಯಕ್ತಿ ಧೋರಣೆ ತೆಗೆದುಹಾಕಿ, ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಮನವಿ ಮಾಡಿದ್ದಕ್ಕಾಗಿ ಪಕ್ಷ ನನ್ನನ್ನು 6 ವರ್ಷಗಳ ಕಾಲ ಉಚ್ಚಾಟಿಸಿದೆ. ನೇರ ನಿಷ್ಠುರವಾಗಿ ಮಾತನಾಡಿದ್ದಕ್ಕೆ ಪಕ್ಷವು ನನಗೆ ಈ ಬಹುಮಾನ ನೀಡಿದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ಕಾರ್ಯಸೂಚಿಯನ್ನು ಯಶಸ್ವಿಯಾಗಿ ಮುಂದುವರಿಸುವಲ್ಲಿ ತಮ್ಮ ಪಾತ್ರವನ್ನು ವಹಿಸಿವೆ.



ನನ್ನನ್ನು ಅಮಾನತುಗೊಳಿಸುವ ನಿರ್ಧಾರದಿಂದ ಭ್ರಷ್ಟಾಚಾರ, ಕುಟುಂಬ ರಾಜಕಾರಣ ವಿರುದ್ಧ ಮತ್ತು ಉತ್ತರ ಕರ್ನಾಟಕದ ಅಭಿವೃದ್ಧಿ, ಹಿಂದುತ್ವದ ಪರ ನನ್ನ ಹೋರಾಟಕ್ಕೆ ಅಡ್ಡಿಯಾಗುವುದಿಲ್ಲ. ನಾನು ಅದೇ ಹುರುಪು ಮತ್ತು ದೃಢತೆಯಿಂದ ನನ್ನ ಜನರ ಸೇವೆ ಮುಂದುವರಿಸುತ್ತೇನೆ. ಎಲ್ಲಾ ಕಾರ್ಯಕರ್ತರು, ಹಿತೈಷಿಗಳು, ಸ್ನೇಹಿತರು, ಪರಿಚಿತರು, ಸ್ವಾಮೀಜಿಗಳು, ಮಾಧ್ಯಮಗಳು, ನನ್ನ ಕುಟುಂಬಕ್ಕೆ ಮತ್ತು ಭಗವಂತನಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾನು ಇದನ್ನು ಬರೆಯುತ್ತಿರುವಾಗ, ಪುರಂದರ ದಾಸರು ಹೇಳಿದ್ದನ್ನು ನಾನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ ಎಂದು "ಸತ್ಯವಂತರಿಗಿದು ಕಾಲವಲ್ಲ" ಕೀರ್ತನೆಯನ್ನು ಸ್ಮರಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Basanagouda Patil Yatnal: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ; ಅಧಿಕಾರ ಉಳಿಯುತ್ತ?

ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ

ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘನೆ ಹಾಗೂ ರಾಜ್ಯ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಶಾಸಕರಾದ ಎಸ್‌.ಟಿ.ಸೋಮಶೇಖರ್‌, ಶಿವರಾಮ್‌ ಹೆಬ್ಬಾರ್‌ ಸೇರಿ ಐವರು ನಾಯಕರಿಗೆ ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ನೋಟಿಸ್‌ ನೀಡಿದ್ದ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basanagouda Patil Yatnal) ಅವರಿಗೆ ಹೈಕಮಾಂಡ್‌ ಶಾಕ್‌ ನೀಡಿದೆ. ಈ ಹಿಂದೆ ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.

ರಾಜ್ಯ ನಾಯಕರ ವಿರುದ್ಧ ಪದೇಪದೇ ಬಹಿರಂಗ ಹೇಳಿಕೆಗಳನ್ನು ನೀಡಿರುವುದು ಯತ್ನಾಳ್‌ ಉಚ್ಚಾಟನೆಗೆ ಪ್ರಮುಖ ಕಾರಣವಾಗಿದೆ. ಈ ಹಿಂದೆ ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ನೋಟಿಸ್‌ ನೀಡಿತ್ತು. ನೋಟಿಸ್‌ ನೀಡಿದ್ದರೂ ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆ.10 ರಂದು ಶೋಕಾಸ್‌ ನೋಟಿಸ್‌ಗೆ ಯತ್ನಾಳ್‌ ಉತ್ತರ ನೀಡಿದ್ದರು. ಯತ್ನಾಳ್ ಉತ್ತರ, ಸ್ಪಷ್ಟನೆ ಒಪ್ಪದ ಕೇಂದ್ರ ಶಿಸ್ತು ಸಮಿತಿ ಈ ನಿರ್ಧಾರ ಇಂದು ಕೈಗೊಂಡಿದೆ.

ಉಚ್ಚಾಟನೆ ಆದೇಶ ಪ್ರತಿಯಲ್ಲಿ ಏನಿದೆ?

'ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರುವರಿ 10 ರಂದು ನೀಡಲಾದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದ್ದೇವೆ. ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಉತ್ತರಿಸುವಾಗ ಉತ್ತಮ ನಡವಳಿಕೆಯ ಭರವಸೆ ನೀಡಿದ್ದರೂ ಕೂಡ, ನೀವು ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಹೀಗಾಗಿ ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣ ಜಾರಿಗೆ ಬರುವಂತೆ ನಿಮ್ಮನ್ನು 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ನೀವು ಇಲ್ಲಿಯವರೆಗೆ ಹೊಂದಿದ್ದ ಪಕ್ಷದ ಯಾವುದೇ ಹುದ್ದೆಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.