ರಾಮನಗರ: ನಾಳೆ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ರಂಗೇರಿದೆ. ಅಡ್ಡ ಮತದಾನ (MLC Election) ಆತಂಕ ಎದುರಿಸುತ್ತಿರುವ ಕಾಂಗ್ರೆಸ್ ತನ್ನ ಮತಗಳ ರಕ್ಷಣೆಗಾಗಿ ಶಾಸಕರನ್ನು ಬಿಡದಿಯ ರೆಸಾರ್ಟ್‌ಗೆ ಶಿಫ್ಟ್ ಮಾಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಇಂದು ಬಿಡದಿ ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಶಾಸಕರಿಗಾಗಿ ಅಣಕು ಮತದಾನ ಆಯೋಜಿಸಲಾಗಿತ್ತು. ಈ ವೇಳೆ ಪಕ್ಷದ ಶಾಸಕರಿಗೆ ಮತದಾನದ ಕುರಿತು ತರಬೇತಿ ನೀಡಲಾಗಿದೆ.
ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ ನಾಲ್ವರು ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಆದರೆ ಏಳನೇ ಸ್ಥಾನಕ್ಕೆ ಜಟಾಪಟಿ ಶುರುವಾಗಿದೆ.
ಇನ್ನು ಯಾವುದೇ ಕಾರಣಕ್ಕೂ ಅಡ್ಡ ಮತದಾನ ಆಗಬಾರದು ಹಾಗೂ ಮತ ಅಸಿಂಧುಗೊಳ್ಳದಂತೆ ಕಾಂಗ್ರೆಸ್ ಎಚ್ಚರಿಕೆ ವಹಿಸಿದ್ದು, ಈ ಸಂಬಂಧ ಡಿಕೆ ಶಿವಕುಮಾರ್ ಸಮ್ಮುಖದಲ್ಲೇ ಅಣಕು ಮತದಾನ ಪ್ರಕ್ರಿಯೆ ನಡೆಸಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕಾರ್ತಿಕ್ ಹಾಗೂ ಜೆಡಿಎಸ್ ಅಭ್ಯರ್ಥಿ ಗೋವಿಂದ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಇದರ ಮಧ್ಯೆ ಬಿಜೆಪಿಯ ಉಚ್ಚಾಟಿತ ಶಾಸಕರಾದ ಎಸ್ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ಪಾಳಯದಲ್ಲಿ ಗುರುತಿಸಿಕೊಂಡಿರುವುದು ತೀವ್ರ ಸಂಚಲನಕ್ಕೆ ಕಾರಣವಾಗಿದೆ.
ವಿಧಾನಸೌಧದದಲ್ಲಿ ನಾಳೆ 9 ಗಂಟೆಗೆ ಮತದಾನ ಆರಂಭ
ವಿಧಾನ ಪರಿಷತ್ತಿನ ತೆರವಾಗಿರುವ ಏಳು ಸ್ಥಾನಗಳಿಗೆ ನಾಳೆ ಚುನಾವಣೆ ನಡೆಯಲಿದ್ದು, ಮತದಾನಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಿದ್ಧತೆಗಳನ್ನು ಚುನಾವಣಾಧಿಕಾರಿಗಳು ಪೂರ್ಣಗೊಳಿಸಿದ್ದಾರೆ. ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಸಮಿತಿ ಸಭಾಂಗಣದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.
ಮತದಾನ ಪ್ರಕ್ರಿಯೆ ಸುಗಮವಾಗಿ ನಡೆಯುವ ನಿಟ್ಟಿನಲ್ಲಿ ಸಮಿತಿ ಸಭಾಂಗಣದ ಒಳಭಾಗ ಮತ್ತು ಹೊರಭಾಗದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಶಾಸಕರ ಗೌಪ್ಯ ಮತದಾನಕ್ಕಾಗಿ ಎರಡು ಪ್ರತ್ಯೇಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಕಾಂಗ್ರೆಸ್ ಪರವಾಗಿ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಬಿ.ಎಸ್. ಶಿವಣ್ಣ, ಪಿ.ವಿ. ಮೋಹನ್ ಹಾಗೂ ವಿನಯ್ ಕಾರ್ತಿಕ್ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯಿಂದ ಲಿಂಗರಾಜ್ ಪಾಟೀಲ್ ಮತ್ತು ರಘು ಕೌಟಿಲ್ಯ ಕಣದಲ್ಲಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಗೋವಿಂದರಾಜು ಸ್ಪರ್ಧಿಸುತ್ತಿದ್ದಾರೆ.