ಬೆಂಗಳೂರು: ವಿಧಾನ ಪರಿಷತ್ ಚುನಾವಣೆ (MLC Election) ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಂದು NDA ನಾಯಕರ ಸಭೆ (NDA leaders meeting) ನಡೆದಿದ್ದು, ಚುನಾವಣೆ ಕಾರ್ಯತಂತ್ರ ಕುರಿತು ಸಮಾಲೋಚನೆ ನಡೆಸಿದರು. ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆಯನ್ನು ಎನ್‌ಡಿಎ ಮೈತ್ರಿಕೂಟ ಗಂಭೀರವಾಗಿ ಪರಿಗಣಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಗೆಲುವಿಗೆ ಈಗಿನಿಂದಲೇ ಅಗತ್ಯ ಸಿದ್ಧತೆ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು.
ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮುಂತಾದ ನಾಯಕರು ಚುನಾವಣೆ ಕುರಿತ ಈ ಪೂರ್ವಭಾವಿ ಸಭೆಯಲ್ಲಿ ಮಹತ್ತರ ಚರ್ಚೆ ನಡೆಸಿದರು.
ಮುಂದಿನ ದಿನಗಳಲ್ಲಿ ನಡೆಯುವ ವಿಧಾನ ಪರಿಷತ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಸಮರ್ಥವಾಗಿ ಎದುರಿಸಿ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಕುರಿತು ಉಭಯ ಪಕ್ಷಗಳ ಮುಖಂಡರೂ ಪ್ರಮುಖ ವಿಷಯಗಳ ಮೇಲೆ ಸಮಾಲೋಚನೆ ನಡೆಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳನ್ನು ತೆರೆದಿಡಬೇಕು. ರಾಜ್ಯದಲ್ಲಿ ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ತುಷ್ಟೀಕರಣದ ರಾಜಕಾರಣ ಎಲ್ಲೇ ಮೀರಿದ್ದು, ಇದರ ವಿರುದ್ಧ ಹೋರಾಡುತ್ತಲೇ ಚುನಾವಣೆ ಗೆಲುವಿಗೆ ಎನ್ ಡಿ ಎ ನಾಯಕರು, ಕಾರ್ಯಕರ್ತರು ಒಟ್ಟಾಗಿ ಶ್ರಮಿಸಬೇಕು ಎಂದು ಸಚಿವ ಪ್ರಲ್ಹಾದ ಜೋಶಿ ಇದೇ ವೇಳೆ ಹೇಳಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಇನ್ನೂ ತಡವರಿಸುತ್ತಿದೆ. ಕಾಂಗ್ರೆಸ್ ಸರ್ಕಾರದ ಧನ ದಾಹಕ್ಕೆ ಅಧಿಕಾರಿಗಳು, ಗುತ್ತಿಗೆದಾರರು, ರೈತರು ನೇಣಿಗೆ ಕೊರಳೊಡ್ಡುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಅಭಿವೃದ್ಧಿಗೆ ಆರ್ಥಿಕ ಇಲಾಖೆ ವಿತ್ತ ಕೊರತೆ ಎಂದು ಹೇಳಿ ಕೈ ಚೆಲ್ಲಿ ಕುಳಿತಿದೆ. ಇದೆಲ್ಲದರ ಬಗ್ಗೆಯೂ ಜನಜಾಗೃತಿ ಮೂಡಿಸಬೇಕು ಎಂದು ಅಗತ್ಯ ಸಲಹೆ ನೀಡಿದರು.
ಕಾಂಗ್ರೆಸ್‌ನಲ್ಲಿ ವಿರೋಧಾಭಾಸ: ಕಾಂಗ್ರೆಸ್ ಪಕ್ಷದಲ್ಲಿ ವಿರೋಧಾಭಾಸವಿದೆ. ಬರದ ನೆಪವೊಡ್ಡಿ ಆ ಪಕ್ಷದ ಶಾಸಕರೇ ರಾಜೀನಾಮೆ ಬೆದರಿಕೆ ಹಾಕುತ್ತಿದ್ದಾರೆ. ಇನ್ನೊಂದೆಡೆ ಖಜಾನೆ ಖಾಲಿಯಾಗಿದೆ. ಆಡಳಿತ ವೈಫಲ್ಯವನ್ನು ಜನರಿಗೆ ಮನವರಿಕೆ ಮಾಡಿಕೊಡಿ ಎಂದು ಹೇಳಿದರು.
ಕೆಪಿಎಸ್‌ಸಿ ಅಕ್ರಮಗಳ ಬಗ್ಗೆ ಕಾಕ್ರೋಚ್ ಜನತಾ ಪಾರ್ಟಿ ಮೌನ ಏಕೆ?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ
ಬಿಜೆಪಿ ಹಾಗೂ ಜೆಡಿಎಸ್ ಹಿರಿಯರು, ಮುಖಂಡರು ಹಾಗೂ ಸದಸ್ಯರು ಪ್ರಮುಖ ವಿಷಯಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು. ಸಭೆಯಲ್ಲಿ ಕೇಂದ್ರದ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು, ಬೋಜೇಗೌಡ, ಮುಖಂಡರಾದ ನಿಖಿಲ್ ಕುಮಾರಸ್ವಾಮಿ, ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ ಸೇರಿದಂತೆ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ಎರಡೂ ಪಕ್ಷಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.