ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪೊಲೀಸ್ ವಾಹನ ವ್ಯವಸ್ಥೆ ಆಧುನೀಕರಣಕ್ಕೆ ರಾಜ್ಯ ಸರ್ಕಾರ ಹೊಸ ಚಿಂತನೆ; ಬಾಡಿಗೆ ಮಾದರಿಯ ಸಾಧ್ಯತೆ ಪರಿಶೀಲನೆ

Priyank Kharge: ವೇಗವಾಗಿ ಬದಲಾಗುತ್ತಿರುವ ಸಾಮಾಜಿಕ ಹಾಗೂ ಕಾನೂನು-ಸುವ್ಯವಸ್ಥೆಯ ಸವಾಲುಗಳಿಗೆ ಪೊಲೀಸ್ ಇಲಾಖೆ ಇನ್ನಷ್ಟು ಸಜ್ಜಾಗಬೇಕಿದೆ. ಅದಕ್ಕಾಗಿ ವಾಹನ ವ್ಯವಸ್ಥೆ ಸೇರಿದಂತೆ ಇಲಾಖೆಯ ಪ್ರತಿಯೊಂದು ಕಾರ್ಯಾಚರಣಾ ಮೂಲಸೌಕರ್ಯವನ್ನು ಆಧುನೀಕರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮಬದ್ಧವಾಗಿ ಕೆಲಸ ಮಾಡುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಪೊಲೀಸ್ ವಾಹನ ವ್ಯವಸ್ಥೆ ಆಧುನೀಕರಣಕ್ಕೆ ಹೊಸ ಚಿಂತನೆ: ಪ್ರಿಯಾಂಕ್ ಖರ್ಗೆ

ಗೃಹ ಸಚಿವ ಪ್ರಿಯಾಂಕ್ ಖರ್ಗೆ (ಸಂಗ್ರಹ ಚಿತ್ರ) -

Profile
Siddalinga Swamy Sep 10, 2026 3:45 PM

ಬೆಂಗಳೂರು, ಸೆ.10: ಕರ್ನಾಟಕ ಪೊಲೀಸ್ ಇಲಾಖೆಯನ್ನು ಕಾಲಕ್ಕೆ ತಕ್ಕಂತೆ ಆಧುನೀಕರಿಸುವುದು, ಪೊಲೀಸ್ ಸಿಬ್ಬಂದಿಗೆ ಉತ್ತಮ ಕಾರ್ಯಾಚರಣಾ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಸಾರ್ವಜನಿಕರಿಗೆ ಇನ್ನಷ್ಟು ತ್ವರಿತ ಮತ್ತು ಪರಿಣಾಮಕಾರಿ ಸೇವೆ ನೀಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವಾಹನ ವ್ಯವಸ್ಥೆಯಲ್ಲಿ ಹೊಸ ಮಾದರಿಗಳನ್ನು ಅಳವಡಿಸಿಕೊಳ್ಳುವ ಸಾಧ್ಯತೆಯನ್ನು ರಾಜ್ಯ ಸರ್ಕಾರ ಪರಿಶೀಲಿಸುತ್ತಿದೆ ಎಂದು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ.

ಈ ಸಂಬಂಧ ಕರ್ನಾಟಕ ಪೊಲೀಸ್ ಇಲಾಖೆಯ ಸಂಪರ್ಕ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಅಧಿಕಾರಿಗಳು ಹಾಗೂ ವಿದ್ಯುತ್ ಚಾಲಿತ ಮತ್ತು ಸಾಂಪ್ರದಾಯಿಕ ವಾಹನ ತಯಾರಿಕಾ ಕಂಪನಿಗಳು ಸೇರಿದಂತೆ 20ಕ್ಕೂ ಹೆಚ್ಚು ಆಟೋಮೊಬೈಲ್ ಮತ್ತು ದ್ವಿಚಕ್ರ ವಾಹನ ತಯಾರಿಕಾ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಭೆ ನಡೆಸಿ, ಪೊಲೀಸ್ ಇಲಾಖೆಯ ವಾಹನಗಳಿಗೆ ಬಾಡಿಗೆ ಅಥವಾ ಲೀಸಿಂಗ್ ಮಾದರಿಯನ್ನು ಅಳವಡಿಸಿಕೊಳ್ಳುವ ಸಾಧ್ಯತೆ ಕುರಿತು ವಿಸ್ತೃತ ಚರ್ಚೆ ನಡೆಸಿದರು.

ಪೊಲೀಸ್ ಇಲಾಖೆಗೆ ಅಗತ್ಯವಿರುವ ವಾಹನಗಳನ್ನು ನೇರವಾಗಿ ಖರೀದಿಸುವುದರಿಂದ ಸರ್ಕಾರದ ಮೇಲೆ ಒಂದೇ ಬಾರಿಗೆ ಗಣನೀಯ ಪ್ರಮಾಣದ ಬಂಡವಾಳ ವೆಚ್ಚದ ಹೊರೆ ಉಂಟಾಗುತ್ತದೆ. ಆದರೆ, ಬದಲಾಗುತ್ತಿರುವ ಅಗತ್ಯಗಳು ಮತ್ತು ಪೊಲೀಸ್ ಇಲಾಖೆಯ ಹೆಚ್ಚುತ್ತಿರುವ ಕಾರ್ಯಾಚರಣಾ ಹೊಣೆಗಾರಿಕೆಗಳನ್ನು ಗಮನದಲ್ಲಿಟ್ಟುಕೊಂಡು, ನೇರ ಖರೀದಿಗೆ ಪರ್ಯಾಯವಾಗಿ ಬಾಡಿಗೆ ಮಾದರಿಯನ್ನು ಅಳವಡಿಸಿಕೊಳ್ಳುವುದರಿಂದ ಲಭ್ಯವಿರುವ ಸಂಪನ್ಮೂಲಗಳನ್ನು ಹೆಚ್ಚು ಸಮರ್ಥವಾಗಿ ಬಳಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

“ಸರ್ಕಾರದ ಉದ್ದೇಶ ಕೇವಲ ವಾಹನಗಳನ್ನು ಖರೀದಿಸುವುದಲ್ಲ; ಸಾರ್ವಜನಿಕರ ಹಣವನ್ನು ವಿವೇಚನೆಯಿಂದ ಬಳಸಿಕೊಂಡು, ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ನಮ್ಮ ಆದ್ಯತೆಯಾಗಿದೆ. ಒಂದೇ ಬಾರಿಗೆ ದೊಡ್ಡ ಮೊತ್ತದ ಬಂಡವಾಳ ವೆಚ್ಚ ಮಾಡುವ ಬದಲಿಗೆ, ಇಲಾಖೆಯ ಅಗತ್ಯಕ್ಕೆ ಅನುಗುಣವಾಗಿ ವಾಹನಗಳನ್ನು ತ್ವರಿತವಾಗಿ ಸೇರ್ಪಡೆ ಮಾಡಿಕೊಳ್ಳುವ, ಅವುಗಳ ಬಳಕೆ ಮತ್ತು ನಿರ್ವಹಣೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ನಿರ್ವಹಿಸುವ ಎಲ್ಲ ಸಾಧ್ಯತೆಗಳನ್ನು ಪರಿಶೀಲಿಸಲಾಗುವುದು,” ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಬಾಡಿಗೆ ಅಥವಾ ಲೀಸಿಂಗ್ ಮಾದರಿಯಿಂದ ಪೊಲೀಸ್ ಇಲಾಖೆಯ ವಾಹನಗಳ ಸಂಖ್ಯೆಯನ್ನು ಅಗತ್ಯಕ್ಕೆ ಅನುಗುಣವಾಗಿ ತ್ವರಿತವಾಗಿ ಹೆಚ್ಚಿಸುವ ಅವಕಾಶ ದೊರೆಯಲಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಗಸ್ತು ಕಾರ್ಯಾಚರಣೆ, ತುರ್ತು ಸಂದರ್ಭಗಳಲ್ಲಿ ಪ್ರತಿಕ್ರಿಯೆ, ತನಿಖೆ ಸೇರಿದಂತೆ ವಿವಿಧ ಪೊಲೀಸ್ ಕರ್ತವ್ಯಗಳಿಗೆ ಅಗತ್ಯವಿರುವ ವಾಹನಗಳನ್ನು ಕಾರ್ಯಾಚರಣೆಯ ಅವಶ್ಯಕತೆಗೆ ಅನುಗುಣವಾಗಿ ಬಳಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ವಿದ್ಯುತ್ ಚಾಲಿತ ವಾಹನಗಳು ಸೇರಿದಂತೆ ವಿವಿಧ ಮಾದರಿಯ ವಾಹನಗಳನ್ನು ಪೊಲೀಸ್ ಇಲಾಖೆಯ ಅಗತ್ಯಗಳಿಗೆ ಬಳಸಿಕೊಳ್ಳುವ ಬಗ್ಗೆಯೂ ಚರ್ಚಿಸಲಾಯಿತು. ವಾಹನಗಳ ಬಳಕೆಯ ಸ್ವರೂಪ, ಕಾರ್ಯಾಚರಣಾ ಅವಧಿ, ನಿರ್ವಹಣೆ, ದುರಸ್ತಿ, ಬದಲಿ ವಾಹನಗಳ ಲಭ್ಯತೆ, ಸೇವಾ ವೆಚ್ಚ ಹಾಗೂ ಒಪ್ಪಂದದ ಅವಧಿ ಸೇರಿದಂತೆ ಹಣಕಾಸು ಮತ್ತು ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲ ಆಯಾಮಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

“ಆಧುನಿಕ ಪೊಲೀಸ್ ವ್ಯವಸ್ಥೆಗೆ ಕೇವಲ ಮಾನವ ಸಂಪನ್ಮೂಲ ಸಾಕಾಗುವುದಿಲ್ಲ. ಅವರಿಗೆ ಅಗತ್ಯವಾದ ಚಲನಶೀಲತೆ, ತಂತ್ರಜ್ಞಾನ ಮತ್ತು ಮೂಲಸೌಕರ್ಯವೂ ಸಮಾನವಾಗಿ ಮುಖ್ಯವಾಗಿದೆ. ವೇಗವಾಗಿ ಬದಲಾಗುತ್ತಿರುವ ಸಾಮಾಜಿಕ ಹಾಗೂ ಕಾನೂನು-ಸುವ್ಯವಸ್ಥೆಯ ಸವಾಲುಗಳಿಗೆ ಪೊಲೀಸ್ ಇಲಾಖೆ ಇನ್ನಷ್ಟು ಸಜ್ಜಾಗಬೇಕಿದೆ. ಅದಕ್ಕಾಗಿ ವಾಹನ ವ್ಯವಸ್ಥೆ ಸೇರಿದಂತೆ ಇಲಾಖೆಯ ಪ್ರತಿಯೊಂದು ಕಾರ್ಯಾಚರಣಾ ಮೂಲಸೌಕರ್ಯವನ್ನು ಆಧುನೀಕರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮಬದ್ಧವಾಗಿ ಕೆಲಸ ಮಾಡುತ್ತಿದೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಪೊಲೀಸ್ ಇಲಾಖೆಯ ಅಗತ್ಯಗಳಿಗೆ ತಕ್ಕಂತೆ, ಸಾರ್ವಜನಿಕ ಹಣದ ಗರಿಷ್ಠ ಸದ್ಬಳಕೆ ಆಗುವ ಹಾಗೂ ದೀರ್ಘಾವಧಿಯಲ್ಲಿ ಸರ್ಕಾರಕ್ಕೆ ಆರ್ಥಿಕವಾಗಿ ಮತ್ತು ಆಡಳಿತಾತ್ಮಕವಾಗಿ ಪೂರಕವಾಗುವ ಮಾದರಿಯನ್ನು ರೂಪಿಸಲು ಸರ್ಕಾರ ಬದ್ಧವಾಗಿದೆ. ಬಾಡಿಗೆ ಮಾದರಿಯ ಹಣಕಾಸು ಮತ್ತು ಕಾರ್ಯಾಚರಣಾ ಸಾಧ್ಯತೆಗಳನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕವೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.‌

ಪೊಲೀಸ್ ಸಿಬ್ಬಂದಿ ಆರೋಗ್ಯ, ಕ್ಷೇಮಾಭಿವೃದ್ಧಿಗೆ ‘ಪ್ರಾಜೆಕ್ಟ್ ಖುಷಿʼ: ಪ್ರಿಯಾಂಕ್ ಖರ್ಗೆ ಮಾಹಿತಿ

ಪೊಲೀಸ್ ಇಲಾಖೆಯನ್ನು ಹೆಚ್ಚು ಚಲನಶೀಲ, ತಂತ್ರಜ್ಞಾನಾಧಾರಿತ, ಆಧುನಿಕ ಮತ್ತು ಜನಸ್ನೇಹಿ ವ್ಯವಸ್ಥೆಯನ್ನಾಗಿ ರೂಪಿಸುವುದು ಸರ್ಕಾರದ ಆದ್ಯತೆಯಾಗಿದೆ. ಸಾರ್ವಜನಿಕ ಸೇವೆಗಳ ಗುಣಮಟ್ಟ ಹೆಚ್ಚಿಸುವ ಜತೆಗೆ, ಪೊಲೀಸ್ ಸಿಬ್ಬಂದಿಯ ಕಾರ್ಯಾಚರಣಾ ಸಾಮರ್ಥ್ಯವನ್ನು ಬಲಪಡಿಸುವ ಪ್ರತಿಯೊಂದು ಅಗತ್ಯ ಕ್ರಮವನ್ನೂ ಸರ್ಕಾರ ಕೈಗೊಳ್ಳಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.