ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Anganwadis: ರಾಜ್ಯದಲ್ಲಿ ಅಂಗನವಾಡಿ ಆರಂಭವಾಗಿ 50 ವರ್ಷ; ನ.28ಕ್ಕೆ ಮೂರು ಪ್ರಮುಖ ಯೋಜನೆಗಳಿಗೆ ಚಾಲನೆ

Laxmi Hebbalkar: ಕಳೆದ ಬಾರಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು 1000 ರೂಪಾಯಿ ಹೆಚ್ಚಿಸಲಾಗಿದೆ. ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮತ್ತೊಂದು ಸಾವಿರ ಹೆಚ್ಚಿಸುವಂತೆ ಮನವಿ ಮಾಡಲಾಗುವುದು. ಇದೇ ನಮ್ಮ ಸರ್ಕಾರದ ಮತ್ತೊಂದು ಗ್ಯಾರಂಟಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.

ರಾಮನಗರದಲ್ಲಿ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಿದರು.

ರಾಮನಗರ, ನ.19: ಕರ್ನಾಟಕದಲ್ಲಿ ಅಂಗನವಾಡಿ (Karnataka Anganwadis) ಆರಂಭಗೊಂಡು‌ 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಹೇಳಿದರು. ರಾಮನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಬೆಂಗಳೂರು ದಕ್ಷಿಣ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ‌

ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್‌ಗೆ ಚಾಲನೆ ಕಾರ್ಯಕ್ರಮಗಳು ಅತ್ಯಂತ ಅರ್ಥಪೂರ್ಣವಾಗಿ ಅಂದು ನಡೆಯಲಿದ್ದು, ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕು ಎಂದು ಕರೆ ನೀಡಿದರು.

Laxmi Hebbalkar 1

ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್, ‌ದೇಶ‌ಕಟ್ಟಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಅಂದರೆ ಗ್ಯಾರಂಟಿ ಸರ್ಕಾರ ಅಂತ ಅರ್ಥ. ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳೆಯರ ಪರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ‌ ಎಂದು ಹೇಳಿದರು.‌

ಇಂದಿರಾ ಗಾಂಧಿ ಅವರಿಂದ ಕ್ರಾಂತಿಕಾರಕ ಬದಲಾವಣೆ

ಇಡೀ ದೇಶವೇ ಬಡತನದಿಂದ ಬಳಲುತ್ತಿದ್ದ ವೇಳೆ ಬಡ ಮಕ್ಕಳಿಗೂ ಪೌಷ್ಟಿಕ ಆಹಾರ ಸಿಗಬೇಕು.‌ ಪೌಷ್ಟಿಕ ಆಹಾರದ ಜತೆಗೆ ಶಿಕ್ಷಣ ಕೂಡ ಸಿಗಬೇಕು ಎನ್ನುವ ದೃಷ್ಟಿಯಿಂದ 1975ರಲ್ಲಿ ಮೈಸೂರು ಜಿಲ್ಲೆಯಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಅಂಗನವಾಡಿ ಆರಂಭಿಸಿದರು. ಇದೀಗ ಅಂಗನವಾಡಿ ಆರಂಭವಾಗಿ 50 ವರ್ಷ ಪೂರೈಸಿದೆ. ಹಾಗಾಗಿ ಅಂದಿನ ಕಾರ್ಯಕ್ರಮದಲ್ಲಿ ಅಕ್ಕಪಡೆ, ಎಲ್‌ಕೆಜಿ,‌ ಯುಕೆಜಿಗೆ ಚಾಲನೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಮುಂದುವರಿದ ಭಾಗವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುವುದು. ಅರ್ಥಪೂರ್ಣ ಕಾರ್ಯಕ್ರಮವನ್ನು ಎಲ್ಲರೂ ಸೇರಿ ಆಚರಿಸೋಣ ಎಂದರು.

2028ಕ್ಕೆ ನಮ್ಮದೇ ಸರ್ಕಾರ

ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಾರಥ್ಯದ ನಮ್ಮ ಸರ್ಕಾರ ಗ್ಯಾರಂಟಿ ಸರ್ಕಾರ ಆಗಿದ್ದು, 2028ಕ್ಕೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಪಕ್ಷದ ಯೋಜನೆಗಳನ್ನು ಬಿಜೆಪಿ ಬೇರೆ ರಾಜ್ಯಗಳಲ್ಲಿ ನಕಲು ಮಾಡುತ್ತಿದೆ. ಮಹಾರಾಷ್ಟ್ರದಲ್ಲಿ ನಮ್ಮ ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಲಾಡ್ಲಿಬೆಹನ್ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಚುನಾವಣೆ ವೇಳೆ ತಿಂಗಳಿಗೆ 2,500 ರೂಪಾಯಿಯಂತೆ ಮೂರು ತಿಂಗಳ ಹಣ ಹಾಕಲಾಗಿತ್ತು. ಆದರೆ, ಚುನಾವಣೆಯಲ್ಲಿ ಗೆದ್ದ ಬಳಿಕ ಯೋಜನೆಯನ್ನೇ ಪರಿಷ್ಕರಿಸಲಾಗಿದೆ. 2,500 ರೂಪಾಯಿಯಿಂದ 1500 ರೂಪಾಯಿಗೆ ಇಳಿಸಲಾಗಿದೆ. 3.50 ಕೋಟಿ ಫಲಾನುಭವಿಗಳ ಸಂಖ್ಯೆಯನ್ನು 1.50 ಕೋಟಿಗೆ ಇಳಿಸಲಾಗಿದೆ ಎಂದು ಆರೋಪಿಸಿದರು.

ಗೌರವ ಧನ ಹೆಚ್ಚಳವೇ ಮತ್ತೊಂದು ಗ್ಯಾರಂಟಿ

ಕಳೆದ ಬಾರಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು 1000 ರೂಪಾಯಿ ಹೆಚ್ಚಿಸಲಾಗಿದೆ. ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮತ್ತೊಂದು ಸಾವಿರ ಹೆಚ್ಚಿಸುವಂತೆ ಮನವಿ ಮಾಡಲಾಗುವುದು. ಇದೇ ನಮ್ಮ ಸರ್ಕಾರದ ಮತ್ತೊಂದು ಗ್ಯಾರಂಟಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದರು.

ಜಿಲ್ಲೆಯಿಂದ 2.50 ಲಕ್ಷಕ್ಕೂ ಹೆಚ್ಚು ಷೇರುದಾರರ ಗುರಿ

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 2.80 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿದ್ದಾರೆ. ಈ ಪೈಕಿ ಕನಿಷ್ಠ 2.50 ಲಕ್ಷ ಫಲಾನುಭವಿಗಳನ್ನು ಗೃಹಲಕ್ಷ್ಮಿ‌ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಷೇರುದಾರರನ್ನಾಗಿ ಮಾಡಬೇಕು‌. ಗೃಹಲಕ್ಷ್ಮಿ ಯೋಜನೆಯ ಯಶಸ್ಸಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರೆ ಕಾರಣ. ಅದೇ ರೀತಿ ಗೃಹಲಕ್ಷ್ಮಿ ಬ್ಯಾಂಕ್ ಕೂಡ ಮನೆ ಮನೆ ತಲುಪುವಂತಾಗಬೇಕು ಎಂದು ಹೇಳಿದರು.

ಬೆಂಗಳೂರು ದಕ್ಷಿಣದ ಜನರು ರಾಜಕೀಯವಾಗಿ ಪ್ರಬುದ್ಧರು

ಓರ್ವ ಪ್ರಧಾನಮಂತ್ರಿ ಹಾಗೂ ಮೂವರು ಮುಖ್ಯಮಂತ್ರಿಗಳನ್ನು ಕೊಟ್ಟ ಕೀರ್ತಿ ಬೆಂಗಳೂರು ದಕ್ಷಿಣ ಜಿಲ್ಲೆಗೆ ಸಲ್ಲುತ್ತದೆ. ಜಿಲ್ಲೆಯ ಜನ ರಾಜಕೀಯವಾಗಿ ಸಾಕಷ್ಟು ಪ್ರಬುದ್ಧರು. ಮನೆ- ಮನೆಗಳಲ್ಲಿ ನಾಯಕರಿದ್ದಾರೆ. ಅಂತ ನಾಯಕರು ಬೆಳೆಯಲು ತಾಯಂದಿರ ಶ್ರಮವೇ ಪ್ರಮುಖ ಕಾರಣ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಈ ಸುದ್ದಿಯನ್ನೂ ಓದಿ | Vijayapura Airport: ವಿಜಯಪುರ ಏರ್‌ಪೋರ್ಟ್‌ಗಿದ್ದ ಅಡ್ಡಿ ನಿವಾರಣೆ: ಸುಪ್ರೀಂಕೋರ್ಟ್ ನಿಲುವಿಗೆ ಎಂ.ಬಿ. ಪಾಟೀಲ್‌ ಸ್ವಾಗತ

ಈ ವೇಳೆ ರಾಮನಗರ ಶಾಸಕ ಇಕ್ಬಾಲ್ ಹುಸೇನ್, ವಿಧಾನ ಪರಿಷತ್ ಸದಸ್ಯ ಎಸ್. ರವಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ. ರಾಜು, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಗಂಗಾಧರ್, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಎನ್. ನಟರಾಜು ಗಾಣಕಲ್, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚೇತನ್ ಕುಮಾರ್, ತಾಲೂಕುಗಳ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ದಿನೇಶ್ ಜೆ.ಆರ್. ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.