ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಲೋಕಸಭೆಯಲ್ಲಿ ಉದ್ವಿಗ್ನತೆ: ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ವಿಪಕ್ಷದಿಂದ ಸಹಿ ಸಂಗ್ರಹ

ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ನೀಡಲಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ತರಲು ವಿಪಕ್ಷಗಳು ತೀರ್ಮಾನಿಸಿವೆ. ಈ ನಿರ್ಣಯಕ್ಕೆ ಅಗತ್ಯವಾದ ಸಂಸದರ ಸಹಿ ಸಂಗ್ರಹಿಸುವ ಪ್ರಕ್ರಿಯೆ ಆರಂಭವಾಗಿದ್ದು, ವಿವಿಧ ವಿರೋಧ ಪಕ್ಷಗಳು ಈ ವಿಚಾರದಲ್ಲಿ ಒಗ್ಗಟ್ಟಾಗಿವೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Lok Sabha Speaker Om Birla) ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿರೋಧ ಪಕ್ಷಗಳು (Opposition parties) ತೀರ್ಮಾನಿಸಿರುವುದಾಗಿ ಮೂಲಗಳು ತಿಳಿಸಿವೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಮಾತನಾಡಲು ಅವಕಾಶ ನೀಡಲಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

ಸಂವಿಧಾನದ ವಿಧಿ 94(ಸಿ) ಅಡಿಯಲ್ಲಿ ಸ್ಪೀಕರ್ ಅವರನ್ನು ಸ್ಥಾನದಿಂದ ವಜಾಗೊಳಿಸುವ ಉದ್ದೇಶದೊಂದಿಗೆ ಈ ನಿರ್ಣಯವನ್ನು ತರಲು ಸಿದ್ಧತೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ವಿರೋಧ ಪಕ್ಷಗಳು, ಸದನದಲ್ಲಿ ಪ್ರತಿಪಕ್ಷ ನಾಯಕರಿಗೆ ಮಾತನಾಡಲು ಅವಕಾಶ ನೀಡದಿರುವುದು, ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ಕ್ರಮ ಕೈಗೊಳ್ಳದಿರುವುದು ಹಾಗೂ ಕಾಂಗ್ರೆಸ್ ಮಹಿಳಾ ಸಂಸದರ ಕುರಿತು ಆಧಾರರಹಿತ ಆರೋಪಗಳು ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿವೆ.ಈ ನಿರ್ಣಯವನ್ನು ಲೋಕಸಭೆಯಲ್ಲಿ ಮಂಡಿಸಲು ಕನಿಷ್ಠ 100 ಸಂಸದರ ಸಹಿ ಅಗತ್ಯವಿದ್ದು, ವಿವಿಧ ವಿರೋಧ ಪಕ್ಷಗಳ ಸದಸ್ಯರಿಂದ ಸಹಿಗಳನ್ನು ಸಂಗ್ರಹಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ತಿಳಿದುಬಂದಿದೆ.

ಇಂದು ಬೆಳಿಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ಈ ವಿಷಯದ ಕುರಿತು ಚರ್ಚೆ ನಡೆದಿದ್ದು, ನಿರ್ಣಯ ಮಂಡಿಸುವ ಬಗ್ಗೆ ಒಮ್ಮತ ಮೂಡಿದೆ ಎನ್ನಲಾಗಿದೆ. ಈ ಸಭೆಯಲ್ಲಿ ಟಿಎಂಸಿ, ಡಿಎಂಕೆ, ಸಮಾಜವಾದಿ ಪಕ್ಷ, ಆರ್‌ಜೆಡಿ, ಶಿವಸೇನಾ (ಯುಬಿಟಿ), ಎನ್‌ಸಿಪಿ (ಎಸ್‌ಪಿ) ಸೇರಿದಂತೆ ಹಲವು ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಗುಂಪು ಘರ್ಷಣೆ; ಹಲವು ಮನೆಗೆಳಿಗೆ ಬೆಂಕಿ

ಈ ನಡುವೆ ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್ ಮಾತನಾಡಿ, ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರಿಗೆ ಸದನದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡಲಾಗುತ್ತಿಲ್ಲ ಎಂದು ಆರೋಪಿಸಿದರು. ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಧ್ವನಿಯನ್ನು ನಿರ್ಲಕ್ಷಿಸಲಾಗುತ್ತಿದೆ ಮತ್ತು ಸರ್ಕಾರದ ಪರ ಸದಸ್ಯರು ವಿರೋಧ ಪಕ್ಷದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವುದಾಗಿ ಅವರು ಹೇಳಿದರು.

ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ತರಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ವೇಣುಗೋಪಾಲ್, ಸಂಸತ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ ಮುಂದಿನ ಕ್ರಮಗಳ ಬಗ್ಗೆ ಶೀಘ್ರದಲ್ಲೇ ಸ್ಪಷ್ಟವಾಗುತ್ತದೆ ಎಂದು ಹೇಳಿದರು. ವಿರೋಧ ಪಕ್ಷಗಳ ಒಕ್ಕೂಟ ಈ ವಿಷಯದಲ್ಲಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದೆ ಎಂದೂ ತಿಳಿಸಿದ್ದಾರೆ.

ಇದೇ ವೇಳೆ, ವಿರೋಧ ಪಕ್ಷದ ಸದಸ್ಯರ ಘೋಷಣೆಗಳ ನಡುವೆ ಪ್ರಧಾನಿ ಅವರ ಭಾಷಣಕ್ಕೆ ಸಾಂಪ್ರದಾಯಿಕ ಉತ್ತರ ನೀಡದೇ ಲೋಕಸಭೆಯು ವಂದನಾ ನಿರ್ಣಯವನ್ನು ಅಂಗೀಕರಿಸಿರುವುದು ಗಮನಾರ್ಹವಾಗಿದೆ.

ಈ ಕುರಿತು ಸ್ಪೀಕರ್ ಓಂ ಬಿರ್ಲಾ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸದಸ್ಯರು ಪ್ರಧಾನಿಯವರ ಆಸನದ ಬಳಿ ತೆರಳಿ ಅನಿರೀಕ್ಷಿತ ಘಟನೆ ನಡೆಯಬಹುದೆಂಬ ಮಾಹಿತಿ ಲಭ್ಯವಾಗಿದ್ದರಿಂದ ಪ್ರಜಾಪ್ರಭುತ್ವದ ಸಂಪ್ರದಾಯಗಳಿಗೆ ಧಕ್ಕೆಯಾಗದಂತೆ ಪ್ರಧಾನಿಯವರು ಸದನಕ್ಕೆ ಬರದಂತೆ ತಾವು ವಿನಂತಿಸಿದ್ದಾಗಿ ತಿಳಿಸಿದ್ದಾರೆ. ಆದರೆ, ಈ ಹೇಳಿಕೆಯನ್ನು ವಿರೋಧಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಸ್ಪೀಕರ್ ನೀಡಿದ ಮಾಹಿತಿ ಸತ್ಯವಲ್ಲ ಎಂದು ಹೇಳಿ, ಪ್ರಧಾನಿ ಸ್ಪೀಕರ್ ಹಿಂದೆ ಅವಿತುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.