ರಾಹುಲ್ ಗಾಂಧಿ ಜತೆಗೆ ರಾಜಕಾರಣ ಚರ್ಚೆ ಮಾಡಿಲ್ಲ; ಅಧಿಕಾರ ಹಂಚಿಕೆ ಗೊಂದಲವೂ ಇಲ್ಲ ಎಂದ ಸಿಎಂ
Rahul Gandhi Mysore Visit: ತಮಿಳುನಾಡಿನ ಗೂಡ್ಲೂರು ಕಾರ್ಯಕ್ರಮದಲ್ಲಿ ಭಾಗಿಯಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಮಂಗಳವಾರ ಆಗಮಿಸಿದ್ದರು. ಈ ವೇಳೆ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ವಾಗತಿಸಿದರು.
ಮೈಸೂರು ಏರ್‌ಪೋರ್ಟ್‌ನಲ್ಲಿ ರಾಹುಲ್ ಗಾಂಧಿಯನ್ನು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ. -
ಮೈಸೂರು, ಜ.13: ರಾಹುಲ್ ಗಾಂಧಿ (Rahul Gandhi) ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು, ಮಾರ್ಗ ಮಧ್ಯೆ ಭೇಟಿ ಮಾಡಲಾಗಿದೆ. ಸಂಜೆ ದೆಹಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು ಎಂದು ಹೇಳಿದರು.
ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಗೊಂದಲವಿಲ್ಲ
ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದರು. ಪಕ್ಷದ ಶಾಸಕರೇ ಈ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರಿಗೆ ಈ ಕುರಿತು ತಿಳಿದಿರುವುದಿಲ್ಲ. ನಾನು ಅಥವಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಬೇಕು ಎಂದರು.
ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ
ಅಧಿಕಾರ ಹಂಚಿಕೆ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು. ಶಾಸಕರಿಗಿಂತ ಹೆಚ್ಚಾಗಿ ಮಾಧ್ಯಮಗಳೇ ಈ ಕುರಿತು ಹೆಚ್ಚು ಮಾತನಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸರ್ಕಾರ ಸಿದ್ಧ
ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ. ಬಿಜೆಪಿ, ಜೆಡಿಎಸ್‌ನಿಂದ ಪಾಲಿಕೆ ಚುನಾವಣೆಗಳಲ್ಲಿ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮಾರ್ಚ್ ಮೊದಲ ವಾರದಲ್ಲಿ ಬಜೆಟ್
ಬಹುತೇಕ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.
ಹಾವೇರಿಯಲ್ಲಿ ಸಾಧನಾ ಸಮಾವೇಶ ನಡೆಸುವ ಬಗ್ಗೆ ಚಿಂತನೆ
ಮುಖ್ಯಮಂತ್ರಿಯಾಗಿ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
10 ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ: ಸಿಎಂ ಸಿದ್ದರಾಮಯ್ಯ
ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಗ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು , ಕ್ರಿಯಾಶೀಲರಾಗಿದ್ದಾರೆ. ಅವರ ವರ್ತನೆ, ಹಾವಭಾವ ಇವುಗಳನ್ನು ಮಾಧ್ಯಮಗಳೇ ಗಮನಿಸಬೇಕು, ನಾವು ಗಮನಿಸುವುದಿಲ್ಲ ಎಂದರು.