ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ: ಡಿ.ಕೆ. ಶಿವಕುಮಾರ್ ಹೀಗೆ ಹೇಳಿದ್ಯಾಕೆ?

DK Shivakumar: ಒಕ್ಕಲಿಗ ಸಮುದಾಯ ನಿಮ್ಮ ಪರವಾಗಿ ನಿಂತಿದೆಯಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ʼನಾನು ಸಮುದಾಯದ ದೃಷ್ಟಿಕೋನದ ಬಗ್ಗೆ ಚರ್ಚೆ ಮಾಡುವುದಿಲ್ಲ. ಪಕ್ಷ ನನಗೆ ಮುಖ್ಯ. ಕಾಂಗ್ರೆಸ್ ನನ್ನ ಸಮುದಾಯ. ನಾನು ಒಕ್ಕಲಿಗ ಸಮುದಾಯದಿಂದ ಬಂದಿದ್ದು, ಆ ಸಮುದಾಯದ ಜನ ನನ್ನನ್ನು ಪ್ರೀತಿಸಬಹುದು. ನನ್ನ ಬದ್ಧತೆ ಹಿಂದುಳಿದ, ಪರಿಶಿಷ್ಟ, ಅಲ್ಪಸಂಖ್ಯಾತ ಸೇರಿದಂತೆ ಸಮಾಜದ ಎಲ್ಲಾ ಸಮುದಾಯಗಳ ಪರವಾಗಿದೆ. ಒಕ್ಕಲಿಗರೂ ಕೂಡ ಹಿಂದುಳಿದ ವರ್ಗದ ಸಮುದಾಯದವರೇ ಎಂದು ಹೇಳಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ)

ಬೆಂಗಳೂರು, ನ.28: ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ಬೆಂಗಳೂರಿನ ಅರಮನೆ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ನಿಮ್ಮ ಪಕ್ಷದ ಬಹಳಷ್ಟು ಕಾರ್ಯಕರ್ತರು ನಿಮ್ಮನ್ನು ಸಿಎಂ ಸ್ಥಾನದಲ್ಲಿ ನೋಡಲು ಬಯಸುತ್ತಿದ್ದಾರಲ್ಲಾ ಎಂದು ಕೇಳಿದಾಗ ಅವರು ನನಗೆ ಯಾವುದೇ ಆತುರವಿಲ್ಲ ಎಂದು ಹೇಳಿದರು.

ಸಾಕಷ್ಟು ಕೆಲಸಗಳಿರುವ ಕಾರಣ ದೆಹಲಿಗೆ ಹೋಗಬಹುದು

ನೀವು ಹಾಗೂ ಸಿಎಂ ದೆಹಲಿಗೆ ಹೋಗುತ್ತೀರಾ ಎಂದು ಕೇಳಿದಾಗ, ʼನಾನು ದೆಹಲಿಗೆ ಹೋಗಬಹುದು. ನನಗೆ ದೆಹಲಿಯಲ್ಲಿ ಸಾಕಷ್ಟು ಕೆಲಸಗಳಿವೆ. ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ನಾನು ಸಂಸದರನ್ನು ಭೇಟಿ ಮಾಡಬೇಕಿದೆ. ದೇವರ ಕೃಪೆಯಿಂದ ಮೇಕೆದಾಟು ಯೋಜನೆ ಸಂಬಂಧ ನ್ಯಾಯಾಲಯದಲ್ಲಿ ನಮಗೆ ನ್ಯಾಯ ದೊರೆತಿದ್ದು, ಈ ಯೋಜನೆ ಪರಿಷ್ಕೃತ ಡಿಪಿಆರ್ ಸಿದ್ಧತೆಗೆ ಸೂಚಿಸಿದ್ದೇವೆ. ಮಹದಾಯಿ, ಕೃಷ್ಣಾ, ಎತ್ತಿನಹೊಳೆ ಸೇರಿದಂತೆ ನಮ್ಮ ಸಾಕಷ್ಟು ಯೋಜನೆಗಳ ಬಗ್ಗೆ ಸಂಸದರ ಜತೆ ಚರ್ಚೆ ಮಾಡುವುದಿದೆ. ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಸಿಎಂ ಜತೆ ಚರ್ಚೆ ಮಾಡುತ್ತೇನೆʼ ಎಂದರು.

ಮೆಕ್ಕೆಜೋಳ ವಿಚಾರವಾಗಿ ಮನವಿ ಸಲ್ಲಿಸುವುದಿದೆ

ʼಇದರ ಜತೆಗೆ ಮೆಕ್ಕೆಜೋಳ ಬೆಲೆ ವಿಚಾರದಲ್ಲಿ ಕೇಂದ್ರ ಸರ್ಕಾರ ಬೆಂಬಲ ನೀಡುತ್ತಿಲ್ಲ. ಮೆಕ್ಕೆಜೋಳಕ್ಕೆ 2400 ರೂ. ಬೆಲೆ ನಿಗದಿ ಮಾಡಿರುವುದು ಕೇಂದ್ರ ಸರ್ಕಾರ. ಮಾರುಕಟ್ಟೆಯಲ್ಲಿ ಸಿಗುತ್ತಿರುವುದು 1600 ರಿಂದ 1800 ರೂ. ಮಾತ್ರ. ಕೇಂದ್ರ ಸರ್ಕಾರ ರೈತರಿಗೆ ನೆರವು ನೀಡುತ್ತಿಲ್ಲ. ಹೀಗಾಗಿ ನಾವು ಹೋಗಿ ಮನವಿ ಸಲ್ಲಿಸಬೇಕಿದೆ. ನಾವು ಎಲ್ಲಾ ಕಾರ್ಖಾನೆ ಮಾಲೀಕರ ಸಭೆ ಕರೆಯಲು ತೀರ್ಮಾನಿಸಿದ್ದೇವೆ. ಕೇಂದ್ರ ಸರ್ಕಾರ ಮೆಕ್ಕೆಜೋಳ ಖರೀದಿ ಮಾಡಬೇಕು ಎಂದು ಮನವಿ ಸಲ್ಲಿಸುತ್ತೇವೆʼ ಎಂದರು.

ದೆಹಲಿಗೆ ಹೋದಾಗ ಪಕ್ಷದ ಕಚೇರಿಗೆ ಹೋಗುತ್ತೀರಾ ಎಂದು ಕೇಳಿದಾಗ, ʼಅದು ದೆಹಲಿಯಲ್ಲಿರುವ ನಮ್ಮ ಪಾಲಿನ ದೇವಾಲಯ. ದೆಹಲಿ ಕಚೇರಿ ನಮಗೆ ಮಾರ್ಗದರ್ಶನ ನೀಡಲಿದೆʼ ಎಂದು ತಿಳಿಸಿದರು.

ನನ್ನ ಸಮುದಾಯ ಕಾಂಗ್ರೆಸ್

ಒಕ್ಕಲಿಗ ಸಮುದಾಯ ನಿಮ್ಮ ಪರವಾಗಿ ನಿಂತಿದೆಯಲ್ಲ ಎಂದು ಕೇಳಿದಾಗ, ʼನಾನು ಸಮುದಾಯದ ದೃಷ್ಟಿಕೋನದ ಬಗ್ಗೆ ಚರ್ಚೆ ಮಾಡುವುದಿಲ್ಲ. ಪಕ್ಷ ನನಗೆ ಮುಖ್ಯ. ಕಾಂಗ್ರೆಸ್ ನನ್ನ ಸಮುದಾಯ. ನಾನು ಒಕ್ಕಲಿಗ ಸಮುದಾಯದಿಂದ ಬಂದಿದ್ದು, ಆ ಸಮುದಾಯದ ಜನ ನನ್ನನ್ನು ಪ್ರೀತಿಸಬಹುದು. ನನ್ನ ಬದ್ಧತೆ ಹಿಂದುಳಿದ, ಪರಿಶಿಷ್ಟ, ಅಲ್ಪಸಂಖ್ಯಾತ ಸೇರಿದಂತೆ ಸಮಾಜದ ಎಲ್ಲಾ ಸಮುದಾಯಗಳ ಪರವಾಗಿದೆ. ಒಕ್ಕಲಿಗರೂ ಕೂಡ ಹಿಂದುಳಿದ ವರ್ಗದ ಸಮುದಾಯದವರೇ ಎಂದರು.

ಗಾಳ ಹಾಕಿ ಮೀನು ಹಿಡಿಯುವುದು ಹೇಗೆಂದು ನನಗೆ ಗೊತ್ತು: ಡಿ.ಕೆ. ಶಿವಕುಮಾರ್

ನಿಮ್ಮ ಮುಂಬೈ ಭೇಟಿಯನ್ನು ಬಿಜೆಪಿ ಬೇರೆ ರೀತಿ ಅರ್ಥೈಸುತ್ತಿದೆಯಲ್ಲ ಎಂದು ಕೇಳಿದಾಗ, ʼನಾನು ಬಿಜೆಪಿಯ ಅರ್ಥಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ. ನನ್ನ ಆತ್ಮೀಯ ಸ್ನೇಹಿತ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ವಿಚಾರಿಸಿದೆ. ಒಂದು ಗಂಟೆ ಅಲ್ಲಿದ್ದು, ನಾನು ವಾಪಸ್ಸಾಗಿದ್ದೇನೆʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.