Bike Taxi Service: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಜಾ
ಮೋಟಾರ್ ಸೈಕಲ್ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಮತ್ತು ಅವುಗಳನ್ನು ಬೈಕ್ ಟ್ಯಾಕ್ಸಿಗಳಾಗಿ ಓಡಿಸಲು ಪರವಾನಗಿ ನೀಡುವ ಅರ್ಜಿಗಳನ್ನು ಪರಿಗಣಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠವು ಕರ್ನಾಟಕದ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಇದರ ಬೆನ್ನಲ್ಲೇ, ಪ್ರಯಾಣಿಕರ ಸುರಕ್ಷತೆ, ವಿಮಾ ಸೌಲಭ್ಯ ಬಗ್ಗೆ ಕಳವಳ ವ್ಯಕ್ತಪಡಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
-
ನವದೆಹಲಿ: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ (Bike Taxi Service) ಅನುಮತಿ ನೀಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮಾ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರನ್ನೊಳಗೊಂಡ ಪೀಠವು ಈ ತೀರ್ಪು ನೀಡಿದೆ.
ಸುಪ್ರೀಂ ಕೋರ್ಟ್ ಆದೇಶದಿಂದ ಓಲಾ, ಉಬರ್ ಮತ್ತು ರ್ಯಾಪಿಡೋದಂತಹ ಬೈಕ್ ಟ್ಯಾಕ್ಸಿ ಅಗ್ರಿಗೇಟರ್ಗಳಿಗೆ ನಿರಾಳತೆ ಸಿಕ್ಕಂತಾಗಿದ್ದು, ರಾಜ್ಯ ಸರ್ಕಾರ ಮತ್ತು ಆಟೋ-ಕ್ಯಾಬ್ ಸಂಘಟನೆಗಳಿಗೆ ತೀವ್ರ ಹಿನ್ನಡೆಯಾಗಿದೆ.
ಕರ್ನಾಟಕ ಹೈಕೋರ್ಟ್ ಜನವರಿ 23ರಂದು ನೀಡಿದ್ದ ತೀರ್ಪಿನಿಂದ ವಿವಾದ ಹುಟ್ಟಿಕೊಂಡಿತ್ತು. ಹೈಕೋರ್ಟ್ನ ವಿಭಾಗೀಯ ಪೀಠವು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಮೇಲಿದ್ದ ನ್ಯಾಯಾಲಯದ ನಿಷೇಧವನ್ನು ತೆರವುಗೊಳಿಸಿತ್ತು. ಕರ್ನಾಟಕ ಸರ್ಕಾರ ನಿಯಂತ್ರಣ ನೀತಿಯನ್ನು ರೂಪಿಸುವವರೆಗೆ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿ ನೀಡಿದ್ದ ಈ ಹಿಂದಿನ ಆದೇಶವನ್ನು ಪ್ರಶ್ನಿಸಿ ಓಲಾ, ಉಬರ್ ಮತ್ತು ರಾಪಿಡೊ ಸೇರಿದಂತೆ ಅಗ್ರಿಗೇಟರ್ಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ಪೀಠವು ಪುರಸ್ಕರಿಸಿತ್ತು.
ರಾಜ್ಯ ಸರ್ಕಾರವು ಬೈಕ್ ಟ್ಯಾಕ್ಸಿ ಸೇವೆಗಳಿಗೆ ಅನುಮತಿ ನೀಡುವ ನೀತಿಯನ್ನು ಜಾರಿಗೆ ತರುವವರೆಗೆ ಅವುಗಳ ಕಾರ್ಯಾಚರಣೆ ನಿಲ್ಲಿಸುವಂತೆ ಹೈಕೋರ್ಟ್ನ ಏಕಸದಸ್ಯ ಪೀಠ ಈ ಹಿಂದೆ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಓಲಾ, ಉಬರ್, ರಾಪಿಡೊ, ದ್ವಿಚಕ್ರ ವಾಹನ ಮಾಲೀಕರು ಮತ್ತು ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘವು ಮೇಲ್ಮನವಿ ಸಲ್ಲಿಸಿದ್ದವು.
ಈ ಮೇಲ್ಮನವಿಗಳನ್ನು ಪುರಸ್ಕರಿಸಿದ್ದ ಹೈಕೋರ್ಟ್ ವಿಭಾಗೀಯ ಪೀಠವು, ಮೋಟಾರ್ ಸೈಕಲ್ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಬಹುದು ಮತ್ತು ಕಾಂಟ್ರಾಕ್ಟ್ ಕ್ಯಾರೇಜ್ಗಳಾಗಿ (ಗುತ್ತಿಗೆ ವಾಹನ) ಕಾರ್ಯನಿರ್ವಹಿಸಬಹುದು ಎಂದು ಅಭಿಪ್ರಾಯಪಟ್ಟಿತ್ತು. ರಾಜ್ಯ ಸರ್ಕಾರವು ನಿಯಂತ್ರಣ ಷರತ್ತುಗಳನ್ನು ವಿಧಿಸಬಹುದೇ ಹೊರತು, ಕೇವಲ ಮೋಟಾರ್ ಸೈಕಲ್ ಎಂಬ ಕಾರಣಕ್ಕೆ ಪರವಾನಗಿ ನಿರಾಕರಿಸುವಂತಿಲ್ಲ ಎಂದು ತೀರ್ಪು ನೀಡಿತ್ತು.
ಜನವರಿ 2026ರ ತೀರ್ಪಿನ ಮೂಲಕ, ಮೋಟಾರ್ ಸೈಕಲ್ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಮತ್ತು ಅವುಗಳನ್ನು ಬೈಕ್ ಟ್ಯಾಕ್ಸಿಗಳಾಗಿ ಓಡಿಸಲು ಪರವಾನಗಿ ನೀಡುವ ಅರ್ಜಿಗಳನ್ನು ಪರಿಗಣಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠವು ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಇದರ ಬೆನ್ನಲ್ಲೇ, ಪ್ರಯಾಣಿಕರ ಸುರಕ್ಷತೆ, ವಿಮಾ ಸೌಲಭ್ಯ ಮತ್ತು ಬೈಕ್ ಟ್ಯಾಕ್ಸಿ ಪ್ರಯಾಣಿಕರಿಗೆ ಸೂಕ್ತ ರಕ್ಷಣಾ ಕ್ರಮಗಳ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ವಿಚಾರಣೆ ವೇಳೆ, ಕಾರುಗಳಿಗೆ ಹೋಲಿಸಿದರೆ ಬೈಕ್ಗಳು ರಸ್ತೆಯಲ್ಲಿ ಕಡಿಮೆ ಜಾಗವನ್ನು ಆಕ್ರಮಿಸುತ್ತವೆ ಎಂದು ಅಭಿಪ್ರಾಯಪಟ್ಟಿದ್ದ ಸುಪ್ರೀಂಕೋರ್ಟ್, ಬೈಕ್ ಟ್ಯಾಕ್ಸಿಗಳ ಅಗ್ಗದ ದರವನ್ನು ಗಮನಕ್ಕೆ ತೆಗೆದುಕೊಂಡಿತ್ತು. ರಾಜ್ಯದಲ್ಲಿ ಸುಮಾರು 4.5 ಲಕ್ಷ ಪ್ರಯಾಣಿಕರು ಬೈಕ್ ಟ್ಯಾಕ್ಸಿ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಅಗ್ರಿಗೇಟರ್ಗಳ ಪರ ವಕೀಲರು ವಾದಿಸಿದ್ದರು. ಅಲ್ಲದೆ, 2004 ಮತ್ತು 2024ರ ಕೇಂದ್ರ ಸರ್ಕಾರದ ಅಧಿಸೂಚನೆಗಳ ಪ್ರಕಾರ ದ್ವಿಚಕ್ರ ವಾಹನಗಳನ್ನು ಟ್ಯಾಕ್ಸಿಗಳಾಗಿ ಬಳಸಲು ಅವಕಾಶವಿದೆ ಎಂದು ಕೇಂದ್ರ ಸರ್ಕಾರವೂ ನ್ಯಾಯಪೀಠಕ್ಕೆ ಸ್ಪಷ್ಟಪಡಿಸಿತ್ತು.
ಕಾವೇರಿ ವಿವಾದದಲ್ಲಿ ಕರ್ನಾಟಕಕ್ಕೆ ಬಿಗ್ ರಿಲೀಫ್; ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ
ವಾದ-ಪ್ರತಿವಾದಗಳನ್ನು ಆಲಿಸಿದ ಸುಪ್ರೀಂಕೋರ್ಟ್ ಇಂದು ಕರ್ನಾಟಕ ಸರ್ಕಾರ ಮತ್ತು ಆಟೋ ಸಂಘಟನೆಗಳ ಮೇಲ್ಮನವಿಯನ್ನು ವಜಾಗೊಳಿಸುವ ಮೂಲಕ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಸುಗಮ ಸಂಚಾರಕ್ಕೆ ಹಾದಿ ಸುಗಮಗೊಳಿಸಿದೆ.