ಕೋಲಾರ: ಜಿಲ್ಲೆಯ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ (MLA K Y Nanjegowda) ಅವರಿಗೆ ತುಸು ರಿಲೀಫ್ ಸಿಕ್ಕಿದೆ. ಶಾಸಕ ಸ್ಥಾನ ರದ್ದುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಇದೀಗ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು, ಮರುಮತ ಎಣಿಕೆ ಮಾಡಲು ಚುನಾವಣಾ ಆಯೋಗಕ್ಕೆ ಮಹತ್ವದ ಸೂಚನೆ ನೀಡಿದೆ. ಹೈಕೋರ್ಟ್ ಶಾಸಕ ಸ್ಥಾನ ರದ್ದು ಮಾಡಿದ್ದನ್ನು ಪ್ರಶ್ನಿಸಿ ಕೆ.ವೈ. ನಂಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ನ್ಯಾ. ಸೂರ್ಯಕಾಂತ್ ಹಾಗೂ ನ್ಯಾ. ಜೊಯಮಲ್ಯ ಬಾಗ್ಚಿ ಅವದಿದ್ದ ಪೀಠ ವಿಚಾರಣೆ ನಡೆಸಿದ್ದು. ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದ ಮತ ಎಣಿಕೆಯಲ್ಲಿ ಅಕ್ರಮ ಪ್ರಕರಣದಲ್ಲಿ ಸೆಪ್ಟೆಂಬರ್ 16 ರಂದು ಹೈಕೋರ್ಟ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆವೈ ನಂಜೇಗೌಡ ಆಯ್ಕೆಯನ್ನು ರದ್ದುಪಡಿಸಿತ್ತು. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಂಜೇಗೌಡರಿಗೆ ಒಂದು ತಿಂಗಳ ಅವಕಾಶ ನೀಡಿತ್ತು. ಹೀಗಾಗಿ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
4 ವಾರದಲ್ಲಿ ಮರು ಎಣಿಕೆಗೆ ಸೂಚನೆ
ಮರು ಮತ ಎಣಿಕೆಗೆ ಸೂಚನೆ ನೀಡಿರುವ ಸುಪ್ರೀಂ ಕೋರ್ಟ್ ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಪ್ರಕಟ ಮಾಡದೇ ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ಕೊಟ್ಟಿದೆ. ನ್ಯಾಯಾಲಯದ ಅನುಮತಿಯಿಲ್ಲದೆ ಫಲಿತಾಂಶ ಘೋಷಿಸುವಂತಿಲ್ಲ ಎಂದು ಸೂಚಿಸಿದೆ. ಹೀಗಾಗಿ ಮರು ಎಣಿಕೆ ನಡೆಸಿ ಅದರ ಫಲಿತಾಂಶ ಬರುವವರೆಗೂ ನಂಜೇಗೌಡ ಅವರು ಶಾಸಕ ಸ್ಥಾನ ಅಬಾಧಿತ ಎಂದು ಕೋರ್ಟ್ ಹೇಳಿದೆ. ಪ್ರಕರಣದ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಲಾಗಿದೆ.
ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿದ್ದ ಹೈಕೋರ್ಟ್
ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಮಂಜುನಾಥಗೌಡ ಅರ್ಜಿ ಸಲ್ಲಿಸಿದ್ದರು. ವಿಧಾನಸಭೆ ಚುನಾವಣೆ ಮತ ಎಣಿಕೆ ವೇಳೆ ಲೋಪವಾಗಿದೆ. ಹೀಗಾಗಿ ಶಾಸಕರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿದ್ದರು. ಇತ್ತೀಚೆಗೆ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ, 4 ವಾರಗಳಲ್ಲಿ ಹೈಕೋರ್ಟ್ ಮರು ಮತ ಎಣಿಕೆ ನಡೆಸಲು ಆದೇಶ ನೀಡಿತ್ತು. ಇದೇ ವೇಳೆ ಹೈಕೋರ್ಟ್ ತನ್ನದೇ ತೀರ್ಪಿಗೆ ತಡೆ 30 ದಿನ ತಡೆ ನೀಡಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು.
ಈ ಸುದ್ದಿಯನ್ನೂ ಓದಿ | Bihar Assembly Elections: ವಿಧಾನ ಸಭಾ ಚುನಾವಣೆ: ಬಿಹಾರದಲ್ಲಿ ಮತವಲ್ಲ ಮೈತ್ರಿಯೇ ನಿರ್ಣಾಯಕ
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಅವರ ವಿರುದ್ಧ ಕೇವಲ 248 ಮತಗಳ ಅಂತರದಿಂದ ಗೆದ್ದಿದ್ದರು. ಹೀಗಾಗಿ ಮತ ಎಣಿಕೆ ವೇಳೆ ಲೋಪವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಆರೋಪಿಸಿದ್ದರು.