ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Anganwadi Workers Protest: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ; ಬೇಡಿಕೆ ಈಡೇರಿಸುವ ಭರವಸೆ ಕೊಟ್ಟ ಸಚಿವೆ ಹೆಬ್ಬಾಳ್ಕರ್‌

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಸ್ಥಳಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭೇಟಿ ನೀಡಿ, ಮನವಿ ಸ್ವೀಕರಿಸಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಮನವಿ ಪತ್ರ ಸಲ್ಲಿಕೆ.

ಬೆಂಗಳೂರು: ಮುಂದಿನ ಜೂನ್‌ ತಿಂಗಳಿಂದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು. ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್‌ (Laxmi Hebbalkar) ಹೇಳಿದರು. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನಾ (Anganwadi Workers Protest) ಸ್ಥಳಕ್ಕೆ ಸಚಿವೆ ಭೇಟಿ ನೀಡಿ, ಮನವಿ ಸ್ವೀಕರಿಸಿ ಮಾತನಾಡಿದರು.

ಸಂಘಟನೆಯವರ ಜತೆಗೆ ಮಾತುಕತೆ ನಡೆಸಿ ಮುಖ್ಯಮಂತ್ರಿ ಅವರ ಜತೆ ಚರ್ಚೆ ನಡೆಸಲಾಗುವುದು. ಮುಖ್ಯಮಂತ್ರಿಗಳ ಸಮಯ ನಿಗದಿ ಮಾಡಿ ಶಿಕ್ಷಣ ಇಲಾಖೆಯ ಜತೆಗೆ ಮಾತುಕತೆ ನಡೆಸಲಾಗುವುದು.

ಈಗಾಗಲೇ ಐದು ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗಿದೆ. ಎಂಎ, ಬಿಎಡ್‌, ಪದವಿ ಪಡೆದಿರುವವರು ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ತರಗತಿ ಉಳಿಸಿಕೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ನಾನು ಈ ಹಿಂದೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಬಿಎಲ್‌ಒ ಕೆಲಸಗಳಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡುವಂತೆ ಮಾಡಿದ್ದೆ. ಆದರೆ, ಬಿಎಲ್‌ಒ ಕೆಲಸಗಳಿಗೆ ಮತ್ತೊಮ್ಮೆ ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಇದರಿಂದ ಮುಕ್ತಿಕೊಡಿಸಲು ಪ್ರಯತ್ನಿಸಲಾಗುವುದು ಎಂದರು.

ಪ್ರತಿಭಟನೆ ಕೈಬಿಡಲು ಮನವಿ

ನಾನೊಬ್ಬ ಮಹಿಳೆಯಾಗಿ ನಿಮ್ಮ (ಅಂಗನವಾಡಿ ಕಾರ್ಯಕರ್ತರು) ಧ್ವನಿಯಾಗಿ ಕೆಲಸ ಮಾಡುತ್ತಿರುವೆ. ನಾನು ಸಚಿವೆಯಾದ ಬಳಿಕ ಹಲವು ಬೇಡಿಕೆಗಳನ್ನು ಈಡೇರಿಸಿರುವೆ. ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ನಿಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌ ನೀಡಿದ್ದೇವೆ ಎಂದ ಡಿ.ಕೆ. ಶಿವಕುಮಾರ್

ಈ ವೇಳೆ ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್‌, ನಿರ್ದೇಶಕರಾದ ಮಹೇಶ್‌ ಬಾಬು, ಸಂಘದ ಅಧ್ಯಕ್ಷರಾದ ವರಲಕ್ಷ್ಮೀ, ಕಾರ್ಯಾಧ್ಯಕ್ಷರಾದ ಶಾಂತಾ ಎಸ್.ಘಂಟಿ, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಸುನಂದಾ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.