ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮೇ 31 ರಿಂದ ಜೂನ್ 7 ರವರೆಗೆ ಕಠಿಣ ಲಾಕ್ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಪ್ರಮಾಣ ನಿರಂತರವಾಗಿ ಕಡಿಮೆಯಾಗುತ್ತಿದ್ದರೂ, ನಿರೀಕ್ಷಿತ ವೇಗದಲ್ಲಿ ಕಡಿಮೆಯಾಗುತ್ತಿಲ್ಲ. ಲಾಕ್ಡೌನ್ ಜಾರಿಯಲ್ಲಿದ್ದರೂ, ಜನರು ಅನಗತ್ಯವಾಗಿ ಓಡಾಡುತ್ತಿರುವ ಪ್ರಕರಣಗಳು ಕಂಡು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಸೋಮವಾರ 10 ಗಂಟೆಯಿಂದ ಒಂದು ವಾರ ಕಾಲ ಕಟ್ಟುನಿಟ್ಟಿನಿಂದ ಲಾಕ್ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದರು.
ಈ ಅವಧಿಯಲ್ಲಿ ಔಷಧಿ ಅಂಗಡಿಗಳು, ನೆರೆಹೊರೆಯಲ್ಲಿರುವ ತರಕಾರಿ, ಹಾಲು, ದಿನಸಿ ಅಂಗಡಿಗಳಂತಹ ಅಗತ್ಯ ಅಂಗಡಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ತರಕಾರಿ, ದಿನಸಿ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ 8 ರವರೆಗೆ ತೆರೆಯಲು ಅವಕಾಶವಿದೆ. ಸಗಟು ದಿನಸಿ ಮಳಿಗೆಗಳು, ಎಪಿಎಂಸಿ, ಅವಶ್ಯಕ ಸೇವೆಗಳಿಗೆ ಗುರುತಿಸಲಾಗಿರುವ ಸರ್ಕಾರಿ ಕಚೇರಿಗಳನ್ನು ಹೊರತುಪಡಿಸಿ ಬೇರೆಲ್ಲಾ ಕಚೇರಿಗಳು, ಬ್ಯಾಂಕ್ ಸೇವೆ ಸಹ ಸ್ಥಗಿತಗೊಳಿಸಲಾಗುವುದು ಎಂದು ಹೇಳಿದರು.
ಹೊಟೇಲ್ನಲ್ಲಿ ಪಾರ್ಸೆಲ್ ಸೇವೆಗೆ ಅವಕಾಶವಿದೆ. ಮಾರ್ಗಸೂಚಿ ಪ್ರಕಾರ ಮದುವೆಗೆ ಅವಕಾಶವಿದೆ. ಅಗತ್ಯ ವಸ್ತುಗಳ ಪೂರೈಕೆಗೆ ಯಾವುದೇ ನಿರ್ಬಂಧ ಇರುವುದಿಲ್ಲ . ಲಾಕ್ಡೌನ್ ಅವಧಿಯಲ್ಲಿ ಅನಗತ್ಯವಾಗಿ ರಸ್ತೆಗೆ ಬರುವ ವಾಹನಗಳನ್ನು ಜಪ್ತಿ ಮಾಡು ವುದು ಮಾತ್ರವಲ್ಲದೆ, ಸವಾರರ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿ, ಕಳೆದ 7 ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿವೆ. ನಿರೀಕ್ಷಿತ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳನ್ನು ತಗ್ಗಿಸುವ ಉದ್ದೇಶದಿಂದ ಒಂದು ವಾರ ಕಾಲ ಕಠಿಣ ಲಾಕ್ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದರು.
ನೀರನ್ನು ಸರಿಯಾಗಿ ಕುದಿಸಿ ಆರಿಸಿ ಕುಡಿಯುವುದು ಸೇರಿದಂತೆ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಜನರು ಅನುಸರಿಸ ಬೇಕು ಎಂದು ಸಚಿವರು ತಿಳಿಸಿದರು.