RCB vs DC: ಟಾಸ್ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಬ್ಯಾಟಿಂಗ್!
RCB vs DC: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ (ಏಪ್ರಿಲ್ 10) ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಆರ್‌ಸಿಬಿ vs ಡಿಸಿ ಪಂದ್ಯ

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯ 24ನೇ ಪಂದ್ಯದಲ್ಲಿ (RCB vs DC) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಆರ್‌ಸಿಬಿಗೆ (Royal Challengers Bengaluru) ಮೊದಲ ಬ್ಯಾಟಿಂಗ್‌ಗೆ ಆಹ್ವಾನ ನೀಡಿದ್ದಾರೆ. ಆ ಮೂಲಕ ಆತಿಥೇಯರನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕುವ ಯೋಜನೆಯನ್ನು ಡಿಸಿ ಹಾಕಿಕೊಂಡಿದೆ.
ಋತುರಾಜ್ ಗಾಯಕ್ವಾಡ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಯಿಂಗ್ XIನಲ್ಲಿ ಯಾವುದೇ ಬದಲಾವಣೆ ಇಲ್ಲ. ಮುಂಬೈ ಇಂಡಿಯನ್ಸ್ ವಿರುದ್ಧ ಆಡಿದ್ದ ಅದೇ ಆಡುವ ಬಳಗವನ್ನು ಈ ಪಂದ್ಯಕ್ಕೆ ಉಳಿಸಿಕೊಳ್ಳಲಾಗಿದೆ. ಆದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಒಂದು ಬದಲಾವಣೆಯನ್ನು ತರಲಾಗಿದೆ. ಕಳೆದ ಪಂದ್ಯದಿಂದ ಹೊರಗುಳಿದಿದ್ದ ಆರಂಭಿಕ ಬ್ಯಾಟ್ಸ್‌ಮನ್ ಫಾಫ್ ಡು ಪ್ಲೆಸಿಸ್ ಸಂಪೂರ್ಣ ಫಿಟ್ ಆಗಿದ್ದು ಪ್ಲೇಯಿಂಗ್ XIಗೆ ಮರಳಿದ್ದಾರೆ. ಈ ಹಿನ್ನೆಲೆಯಲ್ಲಿ ಸಮೀರ್ ರಿಝ್ವಿ ಹೊರಗುಳಿದಿದ್ದಾರೆ.
RCB vs DC: ʻಅವರು ಕೇವಲ ಮೂವರನ್ನು ಅವಲಂಬಿಸಿದ್ದಾರೆʼ: ಡೆಲ್ಲಿ ಕ್ಯಾಪಿಟಲ್ಸ್‌ಗೆ ಜಿತೇಶ್ ಶರ್ಮಾ ವಾರ್ನಿಂಗ್!
ಇತ್ತಂಡಗಳ ಪ್ಲೇಯಿಂಗ್ XI
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿ.ಕೀ), ಟಿಮ್ ಡೇವಿಡ್, ಕೃಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜಾಶ್ ಹೇಝಲ್‌ವುಡ್, ಯಶ್ ದಯಾಳ್
ಡೆಲ್ಲಿ ಕ್ಯಾಪಿಟಲ್ಸ್: ಫಾಫ್ ಡು ಪ್ಲೆಸಿಸ್, ಜೇಕ್ ಮೆಗರ್ಕ್, ಕೆಎಲ್ ರಾಹುಲ್(ವಿ.ಕೀ), ಟ್ರಿಸ್ಟನ್ ಸ್ಟಬ್ಸ್, ಅಕ್ಷರ್ ಪಟೇಲ್ (ನಾಯಕ), ಆಶುತೋಷ್ ಶರ್ಮಾ, ವಿಪ್ರಾಜ್ ನಿಗಮ್, ಮಿಚೆಲ್ ಸ್ಟಾರ್ಕ್, ಮೋಹಿತ್ ಶರ್ಮಾ, ಕುಲ್ದೀಪ್ ಯಾದವ್, ಮುಕೇಶ್ ಕುಮಾರ್
DC has won the toss and put us to bat! 🪙
— Royal Challengers Bengaluru (@RCBTweets) April 10, 2025
📋 Team News! ➡️ An unchanged Starting XI! 🫡
And Chinnaswamy, do your thing! 😉❤️🔥#PlayBold #ನಮ್ಮRCB #IPL2025 #RCBvDC @qatarairways pic.twitter.com/GfU34uiIHr
ಹ್ಯಾಟ್ರಿಕ್ ಗೆಲುವು ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್
ಅಕ್ಷರ್ ಪಟೇಲ್ ನಾಯಕತ್ವದಲ್ಲಿ ಆಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಇಲ್ಲಿಯತನಕ ಆಡಿದ ಮೂರೂ ಪಂದ್ಯಗಳನ್ನು ಗೆಲ್ಲುವ ಮೂಲಕ ಡಿಸಿ, ಟೂರ್ನಿಯ ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನವನ್ನು ಅಲಂಕರಿಸಿದೆ. ಲಖನೌ ಸೂಪರ್ ಜಯಂಟ್ಸ್, ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಕ್ರಮವಾಗಿ ಗೆದ್ದಿತ್ತು.
Faf returns to our XI for the blockbuster clash 🎬 pic.twitter.com/R2WJouGea6
— Delhi Capitals (@DelhiCapitals) April 10, 2025
ಮೂರನೇ ಸ್ಥಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು
ರಜತ್ ಪಾಟಿದಾರ್ ನಾಯಕತ್ವದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ ಉತ್ತಮ ಪ್ರದರ್ಶನ ತೋರುತ್ತಿದೆ. ಇಲ್ಲಿಯತನಕ ಆಡಿದ ನಾಲ್ಕು ಪಂದ್ಯಗಳಲ್ಲಿ ಆರ್‌ಸಿಬಿ ಒಂದರಲ್ಲಿ ಸೋತು, ಇನ್ನುಳಿದ ಮೂರೂ ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ. ಆ ಮೂಲಕ 6 ಅಂಕಗಳನ್ನು ಕಲೆ ಹಾಕಿರುವ ಬೆಂಗಳೂರು ತಂಡ, ಟೂರ್ನಿಯ ಪಾಯಿಂಟ್ಸ್ ಟೇಬಲ್‌ನಲ್ಲಿ ಮೂರನೇ ಸ್ಥಾನದಲ್ಲಿದೆ. ಕೊಲ್ಕತಾ ನೈಟ್ ರೈಡರ್ಸ್ ವಿರುದ್ದ ತನ್ನ ಮೊದಲನೇ ಪಂದ್ಯವನ್ನು ಗೆದ್ದಿದ್ದ ಆರ್‌ಸಿಬಿ, ನಂತರ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧವೂ ಗೆಲುವು ಪಡೆದಿತ್ತು. ನಂತರ, ತವರು ಅಂಗಣ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸೋತಿದ್ದ ಆರ್‌ಸಿಬಿ, ನಂತರ ತನ್ನ ನಾಲ್ಕನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿತ್ತು.