ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯಲ್ಲಿ ವಿಜಯೋತ್ಸವವನ್ನು ಕಣ್ತುಂಬಿಸಿಕೊಳ್ಳಲು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದರು. ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತಕ್ಕೆ ಸಿಲುಕಿದ 11 ಮಂದಿ ಮೃತಪಟ್ಟಿದ್ದು, 47 ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರ್ಘಟನೆಗೆ ಸಂಬಂಧಿಸಿದಂತೆ ಆರ್‌ಸಿಬಿ ತಮ್ಮ ಅಧಿಕೃತ ಹೇಳಿಕೆಯಲ್ಲಿ ಪ್ರತಿಕ್ರಿಯೆಯನ್ನು ನೀಡಿದೆ ಹಾಗೂ ಸಾವಿಗೀಡಾದ ಕುಟುಂಬಗಳ ಬಗ್ಗೆ ಸಂತಾಪವನ್ನು ಸೂಚಿಸಿದ್ದಾರೆ.
"ಇಂದು (ಜೂನ್ 4) ಮಧ್ಯಾಹ್ನ ತಂಡದ ಆಗಮನದ ನಿರೀಕ್ಷೆಯಲ್ಲಿ ಬೆಂಗಳೂರಿನಾದ್ಯಂತ ಸಾರ್ವಜನಿಕ ಸಭೆಗಳ ಕುರಿತು ಮಾಧ್ಯಮ ವರದಿಗಳ ಮೂಲಕ ಬೆಳಕಿಗೆ ಬಂದಿರುವ ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ. ಜೀವಹಾನಿಗೆ ಆರ್‌ಸಿಬಿ ಶೋಕ ವ್ಯಕ್ತಪಡಿಸುತ್ತದೆ ಮತ್ತು ಪೀಡಿತ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತದೆ," ಎಂದು ಆರ್‌ಸಿಬಿ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
IPL 2025: ಆರ್‌ಸಿಬಿ ಎದುರು ಪಂಜಾಬ್ ಕಿಂಗ್ಸ್ ಸೋಲಿಗೆ ಕಾರಣ ತಿಳಿಸಿದ ರಿಕಿ ಪಾಂಟಿಂಗ್!
"ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ, ನಾವು ನಮ್ಮ ಕಾರ್ಯಕ್ರಮವನ್ನು ತ್ವರಿತವಾಗಿ ತಿದ್ದುಪಡಿ ಮಾಡಿದ್ದೇವೆ ಮತ್ತು ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಯನ್ನು ಅನುಸರಿಸಿದ್ದೇವೆ. ದಯವಿಟ್ಟು ಸುರಕ್ಷಿತವಾಗಿರಲು ನಮ್ಮ ಎಲ್ಲಾ ಬೆಂಬಲಿಗರನ್ನು ನಾವು ಒತ್ತಾಯಿಸುತ್ತೇವೆ," ಎಂದು ಬೆಂಗಳೂರು ಫ್ರಾಂಚೈಸಿ ಎಕ್ಸ್ ಖಾತೆಯಲ್ಲಿ ಹೇಳಿದೆ.
ಈ ಬಗ್ಗೆ ಆರ್‌ಸಿಬಿ-ಕೆಎಸ್‌ಸಿಎ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ದುರ್ಘಟನೆಗೆ ತೀವ್ರ ಸಂತಾಪ ಸೂಚಿಸಿವೆ. ಈ ದುಃಖದ ಸಂದರ್ಭದಲ್ಲಿ ನಾವು ಮೃತರ ಕುಟುಂಬಗಳೊಂದಿಗೆ ಇರುತ್ತೇವೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿವೆ. ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟ 11 ಮಂದಿಯ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 10 ಲಕ್ಷ ಪರಿಹಾರ ಘೋಷಿಸಿತ್ತು. ಇದೀಗ ಆರ್‌ಸಿಬಿ ಪ್ರಾಂಚೈಸಿ ಹಾಗೂ ಕೆಎಸ್‌ಸಿಎ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದೆ.