ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗದ ಬೌಲರ್ ಎನ್ರಿಚ್ ನಾಕಿಯಾ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.
ಕ್ವಾರಂಟೈನ್ ವೇಳೆಯಲ್ಲಿ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ನಾಕಿಯಾ ಅವರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಕೋವಿಡ್ ನೆಗೆಟಿವ್ ರಿಪೋರ್ಟ್‌ನೊಂದಿಗೆ ಎನ್ರಿಚ್ ಮುಂಬೈಗೆ ಬಂದಿಳಿದಿದ್ದರು. ಆದರೆ ಕ್ವಾರಂಟೈನ್ ಅವಧಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿಸಿದೆ.
ಐಪಿಎಲ್‌ನಲ್ಲಿ ಭಾಗವಹಿಸುವ ಪ್ರತಿಯೊಬ್ಬ ಆಟಗಾರನೂ, ಸಹಾಯಕ ಸಿಬ್ಬಂದಿಗಳು ಕಡ್ಡಾಯವಾಗಿ ಏಳು ದಿನಗಳ ಕಾಲ ಪ್ರತ್ಯೇಕ ವಾಸದಲ್ಲಿರಬೇಕು. ಈ ಸಂದರ್ಭದಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತದೆ. ಫಲಿತಾಂಶ ನೆಗೆಟಿವ್ ಆದರೆ ಮಾತ್ರ ಬಯೋ ಬಬಲ್ ಒಳಗಡೆ ಪ್ರವೇಶಿಸಲು ಅವಕಾಶವಿರುತ್ತದೆ.
ವೇಗಿ ನಾಕಿಯಾ ಕೊನೆಯದಾಗಿ ಪಾಕಿಸ್ತಾನ ವಿರುದ್ಧ ಏಕದಿನ ಸರಣಿಯಲ್ಲಿ ಭಾಗವಹಿಸಿದ್ದರು. ಮೊದಲೆರಡು ಪಂದ್ಯಗಳ ಬಳಿಕ ಐಪಿಎಲ್‌ನಲ್ಲಿ ಆಡುವುದಕ್ಕಾಗಿ ಭಾರತಕ್ಕೆ ಪ್ರಯಾಣ ಬೆಳೆಸಿದ್ದರು. ಡೆಲ್ಲಿ, ಗುರುವಾರ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಸವಾಲನ್ನು ಎದುರಿಸಲಿದೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ