ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮಾಜಿ ಕಾರ್ಯದರ್ಶಿ ಹಾಗೂ ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಅಮಿತಾಭ್ ಚೌಧರಿ(58 ವರ್ಷ) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ನಿವೃತ್ತ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದ ಚೌಧರಿ ಅವರು ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗದ (ಜೆಪಿಎಸ್ಸಿ) ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
‘ಜೆಪಿಎಸ್ಸಿ ಮಾಜಿ ಅಧ್ಯಕ್ಷ ಅಮಿತಾಭ್ ಚೌಧರಿ ಅವರ ಹಠಾತ್ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಮಾಜಿ ಐಪಿಎಸ್ ಅಧಿಕಾರಿ ಅಮಿತಾಭ್ ಜೀ ಅವರು ರಾಜ್ಯದಲ್ಲಿ ಕ್ರಿಕೆಟ್ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಟ್ವೀಟ್ ಮಾಡಿದ್ದಾರೆ.
ರಾಂಚಿಯಲ್ಲಿ ಅತ್ಯುತ್ತಮವಾದ ಕ್ರಿಕೆಟ್ ಕ್ರೀಡಾಂಗಣಗಳನ್ನು ನಿರ್ಮಿಸುವಲ್ಲಿ, ಅಂತರಾಷ್ಟ್ರೀಯ ಕ್ರಿಕೆಟ್ ಮತ್ತು ಐಪಿಎಲ್ ಪಂದ್ಯಗಳನ್ನು ಆಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಬಿಸಿಸಿಐನ ಜಂಟಿ ಕಾರ್ಯದರ್ಶಿ, ಆಡಳಿತಾತ್ಮಕ ವ್ಯವಸ್ಥಾಪಕರಾಗಿ ಚೌಧರಿ ಸೇವೆ ಸಲ್ಲಿಸಿದ್ದಾರೆ.