ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ), 2025 ರ ಜೂನ್ 4 ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದ(m chinnaswamy stadium) ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ(Bengaluru Stampede) ಪ್ರಾಣ ಕಳೆದುಕೊಂಡ 11 ಅಭಿಮಾನಿಗಳ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿಗಳ ಆರ್ಥಿಕ ನೆರವು ಘೋಷಿಸಿದೆ. ಹೊಸದಾಗಿ ಪ್ರಾರಂಭಿಸಲಾದ ಆರ್‌ಸಿಬಿ ಕೇರ್ಸ್ ನಿಧಿಯ ಅಡಿಯಲ್ಲಿ ಈ ನೆರವು ಘೋಷಿಸಲಾಗಿದೆ. ಎಕ್ಸ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಫ್ರಾಂಚೈಸಿಯ ಶನಿವಾರ ಅಧಿಕೃತ ಘೋಷಣೆ ಮಾಡಿದೆ.
ಬೆಂಗಳೂರಿನಲ್ಲಿ ಆರ್‌ಸಿಬಿ ತಂಡದ ಪ್ರಶಸ್ತಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಈ ದುರಂತವು ನಗರದ ಕ್ರೀಡಾ ಇತಿಹಾಸದಲ್ಲಿ ಅತ್ಯಂತ ಕರಾಳ ಕ್ಷಣಗಳಲ್ಲಿ ಒಂದಾಗಿದೆ. ಅಹಮದಾಬಾದ್‌ನಲ್ಲಿ ನಡೆದ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್‌ಸಿಬಿ ತಂಡವು ತನ್ನ ಚೊಚ್ಚಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದ 24 ಗಂಟೆಗಳಿಗೂ ಕಡಿಮೆ ಅವಧಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಾವಿರಾರು ಬೆಂಬಲಿಗರು ಜಮಾಯಿಸಿದ್ದರು. ಆದರೆ ಕ್ರೀಡಾಂಗಣದ ದ್ವಾರಗಳತ್ತ ಅಭಿಮಾನಿಗಳ ಅನಿಯಂತ್ರಿತ ಪ್ರವೇಶದಿಂದ 11 ಜನರು ಸಾವನ್ನಪ್ಪಿದರು ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
"ಜೂನ್ 4, 2025- ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನಷ್ಟೇ ಅಲ್ಲ...ನಮ್ಮ ಕುಟುಂಬ ಸದಸ್ಯರನ್ನು. ಅವರು ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ"
"ಅವರ(ಮೃತ ಅಭಿಮಾನಿಗಳು) ಜಾಗವನ್ನು ಯಾವ ಸಹಾಯವೂ ತುಂಬಲಾರದು. ಆದರೆ ಮೊದಲನೇ ಮತ್ತು ಗೌರವದ ಸಂಕೇತವಾಗಿ, ಆರ್‌ಸಿಬಿ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ನೆರವನ್ನು ನೀಡಿದೆ. ಇದು ಕೇಲವ ಆರ್ಥಿಕ ಸಹಾಯವಲ್ಲ; ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿ ಭರವಸೆ"
"ಇದು ಆರ್‌ಸಿಬಿ ಕೇರ್ಸ್‌ನ ಆರಂಭವೂ ಆಗಿದೆ. ಅವರ ನೆನಪನ್ನು ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ, ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ದೀರ್ಘಕಾಲದ ಬದ್ಧತೆ" ಎಂದು ಆರ್‌ಸಿಬಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದೆ.