ನವದೆಹಲಿ: ಭಾರತ ಟೆಸ್ಟ್ ತಂಡದ (Indain test Team) ನಾಯಕತ್ವದಿಂದ ಬಿಸಿಸಿಐ (BCCI) ತೆಗೆದು ಹಾಕಿದ ಬೆನ್ನಲ್ಲೆ ಹಿರಿಯ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ (Rohit sharma) ಬುಧವಾರ ತಮ್ಮ ಟೆಸ್ಟ್ ವೃತ್ತಿ ಜೀವನಕ್ಕೆ ಹಠಾತ್ ವಿದಾಯ ಹೇಳಿದ್ದಾರೆ. ಆ ಮೂಲಕ ಹಿಟ್‌ಮ್ಯಾನ್ ತಮ್ಮ ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ, ಕಳೆದ ವರ್ಷ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ದ ಟೆಸ್ಟ್ ಸರಣಿಯನ್ನು ಹೀನಾಯವಾಗಿ ಸೋತಿತ್ತು. ಇದಾದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿಯೂ ಟೀಮ್ ಇಂಡಿಯಾ ಸೋಲು ಅನುಭವಿಸಿ ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ಗೆ ಅರ್ಹತೆ ಪಡೆಯಲು ವಿಫಲವಾಗಿತ್ತು.
ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ರೋಹಿತ್ ಶರ್ಮಾ ಈ ವಿಷಯವನ್ನು ಪ್ರಕಟಿಸಿದ್ದಾರೆ. 38ರ ವಯಸ್ಸಿನ ರೋಹಿತ್ ಶರ್ಮಾ ತಮ್ಮ ಟೆಸ್ಟ್ ವೃತ್ತಿ ಜೀವನದ ಎರಡನೇ ಅವಧಿಯಲ್ಲಿ ಅದ್ಭುತ ಬ್ಯಾಟ್ಸ್‌ಮನ್ ಆಗಿ ಹೊರಹೊಮ್ಮಿದ್ದರು. ಅವರು ತಮ್ಮ ಟೆಸ್ಟ್ ವೃತ್ತಿ ಜೀವನದಲ್ಲಿ ಆಡಿದ 67 ಪಂದ್ಯಗಳಿಂದ 4301 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿಅವರು 12 ಶತಕಗಳು ಹಾಗೂ 18 ಅರ್ಧಶತಕಗಳನ್ನು ಬಾರಿಸಿದ್ದಾರೆ.
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾರ ಟೆಸ್ಟ್ ಭವಿಷ್ಯದ ಬಗ್ಗೆ ಗೌತಮ್ ಗಂಭೀರ್ ದೊಡ್ಡ ಹೇಳಿಕೆ!
ರೋಹಿತ್ ಶರ್ಮಾ ಹೇಳಿದ್ದೇನು?
ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಭಾವನಾತ್ಮಕ ಸ್ಟೋರಿ ಹಂಚಿಕೊಳ್ಳುವ ಮೂಲಕ ರೋಹಿತ್ ಶರ್ಮಾ, ಟೆಸ್ಟ್ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ್ದಾರೆ. "ಎಲ್ಲರಿಗೂ ನಮಸ್ಕಾರ, ನಾನು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳುತ್ತಿದ್ದೇನೆಂದು ನಿಮ್ಮ ಬಳಿ ಹೇಳಲು ಬಯಸುತ್ತಿದ್ದೇನೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿರುವುದು ದೊಡ್ಡ ಗೌರವವಾಗಿದೆ. ಕಳೆದ ವರ್ಷಗಳಲ್ಲಿ ನನಗೆ ಪ್ರೀತಿ ಹಾಗೂ ಬೆಂಬಲ ನೀಡಿದ್ದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ. ಏಕದಿನ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಮೂಲಕ ಮುಂದುವರಿಯುತ್ತೇನೆ,"ಎಂದು ಹೇಳುವ ಮೂಲಕ ರೋಹಿತ್ ಶರ್ಮಾ ಟೆಸ್ಟ್ ಕ್ಯಾಪ್ ಅನ್ನು ಹಂಚಿಕೊಂಡಿದ್ದಾರೆ.

2022ರಲ್ಲಿ ಟೆಸ್ಟ್ ನಾಯಕನಾಗಿದ್ದ ರೋಹಿತ್ ಶರ್ಮಾ
ವಿರಾಟ್ ಕೊಹ್ಲಿ 2022ರ ಆರಂಭದಲ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವಕ್ಕೆ ವಿದಾಯ ಹೇಳಿದ್ದರು. ಇದಾದ ಬಳಿಕ ರೋಹಿತ್ ಶರ್ಮಾ ಭಾರತ ಟೆಸ್ಟ್ ತಂಡಕ್ಕೆ ನಾಯಕನಾಗಿ ನೇಮಕಗೊಂಡಿದ್ದರು ಹಾಗೂ ಎರಡನೇ ಆ ವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವನ್ನು ಹಿಟ್‌ಮ್ಯಾನ್ ಮುನ್ನಡೆಸಿದ್ದರು. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಹಲವು ಟೆಸ್ಟ್ ಸರಣಿಗಳನ್ನು ಗೆದ್ದಿದೆ. ಆದರೆ. ಕಳೆದ ಎರಡು ಟೆಸ್ಟ್ ಸರಣಿಗಳಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು ಹಾಗೂ ನಾಯಕನಾಗಿಯೂ ಸಕ್ಸಸ್ ಆಗಿರಲಿಲ್ಲ.
ಮೂಲಗಳು ಹೇಳಿದ್ದೇನು?
"ಬಿಸಿಸಿಐ ಆಯ್ಕೆದಾರರ ಚಿಂತನೆಯು ಸ್ಪಷ್ಟವಾಗಿದೆ. ರೋಹಿತ್ ಶರ್ಮಾ ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಫಾರ್ಮ್‌ನಲ್ಲಿ ಇಲ್ಲ ಹಾಗೂ ಅವರು ನಾಯಕತ್ವಕ್ಕೆ ಫಿಟ್ ಆಗುವುದಿಲ್ಲ. ಈ ಹಿನ್ನೆಲೆಯಲ್ಲಿ ಇಂಗ್ಲೆಂಡ್ ಪ್ರವಾಸದ ಟೆಸ್ಟ್ ಸರಣಿಗೆ ಹೊಸ ನಾಯಕನನ್ನು ಆರಿಸಲು ಬಿಸಿಸಿಐ ಬಯಸುತ್ತಿದೆ. ನಾಲ್ಕನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಆವೃತ್ತಿಯಲ್ಲಿ ಹೊಸ ನಾಯಕನನ್ನು ಬೆಳೆಸಲು ಬಿಸಿಸಿಐ ಚಿಂತನೆ ನಡೆಸುತ್ತಿದೆ. ಟೆಸ್ಟ್ ನಾಯಕತ್ವದಿಂದ ಕೈ ಬಿಡುವ ಬಗ್ಗೆಯೂ ರೋಹಿತ್ ಶರ್ಮಾಗೆ ಬಿಸಿಸಿಐ ತಿಳಿಸಿದೆ," ಎಂದು ಮೂಲಗಳು ಹೇಳಿರುವುದನ್ನು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಅಜಿತ್ ಅಗರ್ಕರ್ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿಯು ಇಂಗ್ಲೆಂಡ್ ಪ್ರವಾಸದ ಟೆಸ್ಟ್ ಸರಣಿಯ ನಿಮಿತ್ತ ರೋಹಿತ್ ಶರ್ಮಾ ಅವರನ್ನು ಭಾರತ ಟಸ್ಟ್ ತಂಡದ ನಾಯಕತ್ವದಿಂದ ಕೈ ಬಿಡಲು ನಿರ್ಧರಿಸಿದೆ. ಆದರೆ, ಅವರು ಏಕದಿನ ತಂಡದ ನಾಯಕನಾಗಿ ಮುಂದುವರಿಯಲಿದ್ದಾರೆ. ಆದರೆ, ಅವರು ವಿಶೇಷ ಬ್ಯಾಟ್ಸ್‌ಮನ್ ಆಗಿ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಬಹುದು. ಇತ್ತೀಚಿಗೆ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದಾರೆ. ಈ ಕಾರಣದಿಂದಾಗಿ ರೋಹಿತ್ ಶರ್ಮಾ ಅವರನ್ನು ನಾಯಕತ್ವದಲ್ಲಿ ಉಳಿಯಲು ಬಿಸಿಸಿಐ ಬಯಸುತ್ತಿಲ್ಲ.