Thursday, 12th December 2024

ಪಶುಸಂಗೋಪನಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು:

ಭಾರತ ಸರ್ಕಾರವು ಪಶು ಪಾಲಕರು ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ವಿಸ್ತರಿಸಲು ಅನುಮತಿ ನೀಡಿದ್ದು, ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಪಶುಪಾಲನಾ ಚಟುವಟಿಕೆಗೆ ಒಂದರಿಂದ ಮೂರು ಲಕ್ಷ ರೂ. ಗಳ ವರೆಗೆ ಬಡ್ಡಿ ರಹಿತ ಮುಂಗಡ ಪಡೆಯಬಹುದಾಗಿದೆ. ಆದ್ದರಿಂದ ರೈತರು ಇದರ ಸದುಪಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯದ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಂಗನಕಾಯಿಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಉತ್ಪಾದನೆ ಹೆಚ್ಚಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಕೋವಿಡ್ ಹಿನ್ನೆಲೆಯ ಲಾಕ್ ಡೌನ್ ಸಂದರ್ಭದಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಕೊಳೆಗೇರಿಗಳಲ್ಲಿ ಪ್ರತಿ ದಿನ 7.75 ಲಕ್ಷ ಲೀಟರ್ ಹಾಲನ್ನು ಉಚಿತವಾಗಿ ವಿತರಿಸಲಾಗಿದೆ.

ಅಲ್ಲದೆ ಮಾಂಸ ಮಾರಾಟ, ಸಾಗಾಣಿಕೆ ಸರಪಣಿ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಕುರಿತು ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಲಾಕ್ ಡೌನ್ ಸಂದರ್ಭದಲ್ಲಿ ಮೈಸೂರು ಮತ್ತು ದಾವಣೆಗೆರೆ ಜಿಲ್ಲೆಗಳಲ್ಲಿ ಕಾಣಿಸಿಕೊಂಡ ಕೋಳಿ ಜ್ವರ ಹಾಗೂ ಬೀದರ್ ನಲ್ಲಿ ಕಾಣಿಸಿಕೊಂಡ ಹಂದಿ ಜ್ವರ ಸೋಂಕನ್ನು ಯಶಸ್ವಿಯಾಗಿ ನಿಯಂತ್ರಿಸಲಾಗಿದೆ.

ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಪಿ. ಮಣಿವಣ್ಣನ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

******