Tuesday, 26th November 2024

ಪಿಎಸ್‌ಐ ಆತ್ಮಹತ್ಯೆ ಪ್ರಕರಣ: ಸರಕಾರದ   ವಿರುದ್ಧ ಎಚ್‌ಡಿಕೆ ಆಕ್ರೋಶ

ವಿಶ್ವವಾಣಿ‌ ಸುದ್ದಮನೆ
ಬೆಂಗಳೂರು: 
ಚನ್ನರಾಯಪಟ್ಟಣ ಸಬ್ ಇನ್‌ಸ್ಪೆಕ್ಟರ್‌ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
 ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪಿ.ಎಸ್‌.ಐ ಕಿರಣ್‌ಕುಮಾರ್ ಆತ್ಮಹತ್ಯೆ  ಪ್ರಕರಣವನ್ನು ರಾಜ್ಯ ಬಿಜೆಪಿ ಸರಕಾರ ಉನ್ನತಮಟ್ಟದ ತನಿಖೆಗೆ ತಕ್ಷಣ ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.
ಪೊಲೀಸರು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆಗೆ ಕಾರಣ ಎಂಬುದಾಗಿ ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಸೂಕ್ತ ತನಿಖೆಗೆ ಆದೇಶಿಸುವ ಮೂಲಕ ಕಿರಿಯ ಹಂತದ  ಪೊಲೀಸ್ ಅಧಿಕಾರಿಗಳಲ್ಲಿ ನೈತಿಕ, ಸ್ಥೈರ್ಯ ತುಂಬುವ ಕೆಲಸವನ್ನು ಸರಕಾರ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಹಿಂದೆ ಗಣಪತಿ ಭಟ್, ಮಲ್ಲಿಕಾರ್ಜುನ ಬಂಡೆ, ಕಲ್ಲಪ್ಪ ಹಂಡಿಬಾಗ್ ಅವರ ಅಕಾಲಿಕ ಸಾವು ಮತ್ತು ಅನುಪಮಾ ಶೆಣೈ  ಅವರ ರಾಜೀನಾಮೆ ವೇಳೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯದಾದ್ಯಂತ ಜಾಗಟೆ ಬಾರಿಸಿದ್ದ ಬಿಜೆಪಿ ಈಗ ಮೌನಕ್ಕೆ ಶರಣಾಗಿದೆ’ ಎಂದು ಹೇಳುವ ಮೂಲಕ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
‘ಆತ್ಮಹತ್ಯೆ ಮಾಡಿಕೊಂಡ ಕಿರಣ್ ಕುಮಾರ್ ಅವರ ಮೊಬೈಲ್ ಫೋನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಜಪ್ತಿ ಮಾಡಿದ್ದು ಹಲವು ಶಂಕೆಗಳಿಗೆ ಎಡೆಮಾಡಿಕೊಟ್ಟಿದೆ. ಇವರ ಸಾವಿಗೆ ಆಯಕಟ್ಟಿನ ಜಾಗದಲ್ಲಿ ಕುಳಿತ ಹಿರಿಯ ಪೊಲೀಸ್ ಅಧಿಕಾರಿಗಳ ದೌರ್ಜನ್ಯ ಹಾಗೂ ಬೆದರಿಕೆ ತಂತ್ರ ಕಾರಣ ಎಂಬ ಮಾಹಿತಿ ನನಗಿದೆ’ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
‘ಬೇರೆ ಪಕ್ಷಗಳ ಆಡಳಿತಾವಧಿಯಲ್ಲಿ ಅಧಿಕಾರಿಗಳ ನಿಗೂಢ ಸಾವಿಗೆ ಸರ್ಕಾರವೇ ಕಾರಣ ಎಂದು ಬೊಬ್ಬೆ ಹಾಕಿದ್ದ ಬಿಜೆಪಿ ವರ್ಷದಿಂದ ಆಡಳಿತ ಚುಕ್ಕಾಣಿ ಹಿಡಿದಿದೆ. ಈಗ ಪಿ.ಎಸ್.ಐ, ಇದಕ್ಕೂ ಮುನ್ನ ಐಎಎಸ್ ಅಧಿಕಾರಿ, ಕಳೆದ ವರ್ಷ ಐ.ಎಫ್.ಎಸ್. ಅಧಿಕಾರಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸರಕಾರ ದಿವ್ಯ ಮೌನಕ್ಕೆ ಶರಣಾಗಿರುವುದು ಸರಿಯಲ್ಲ’ ಎಂದು ಎಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಈ ಹಿಂದೆ ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆಗೆ ಶರಣಾದಾಗ ನ್ಯಾಯಸಮ್ಮತ ತನಿಖೆಗೆ ಒತ್ತಡ ಹೇರುತ್ತಿದ್ದ ಬಿಜೆಪಿ ಈ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ತಕ್ಷಣ ಆದೇಶ ನೀಡಬೇಕು. ಯಾವುದೇ ಇಲಾಖೆಯಲ್ಲಿಯೂ ಪ್ರಾಮಾಣಿಕ ಅಧಿಕಾರಿಗಳು ಕಿರುಕುಳಕ್ಕೆ ಒಳಗಾಗದಂತೆ ಎಚ್ಚರವಹಿಸಬೇಕು’ ಎಂದಿದ್ದಾರೆ.
ಚನ್ನರಾಯಪಟ್ಟಣ ಠಾಣೆಯ ಸಬ್ ಇನ್‌ಸ್ಪೆಕ್ಟರ್‌ ಎಲ್‌.ಎನ್‌.ಕಿರಣ್‌ ಕುಮಾರ್ (37) ಕುವೆಂಪು ನಗರದಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಮೇಲಧಿಕಾರಿಗಳ ಒತ್ತಡ ಕಾರಣ: ದೇವೇಗೌಡ
‘ಪಿಎಸ್ಐ ಆತ್ಮಹತ್ಯೆಗೆ ಮೇಲಧಿಕಾರಿಗಳ ಒತ್ತಡ ಇರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಮಾಡಬೇಕು. ಗೃಹ ಸಚಿವರು ಯಾವುದೇ ಒತ್ತಡಗಳಿಗೆ ಮಣಿಯಬಾರದು’ ಎಂದು ಆಗ್ರಹಿಸಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ನ್ಯಾಯ ದೊರಕದಿದ್ದರೆ ಹೋರಾಟಕ್ಕೆ ಸಿದ್ಧ ಎಂದು ಎಚ್ಚರಿಸಿದ್ದಾರೆ.