Wednesday, 30th October 2024

ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​

ಬೆಂಗಳೂರು:
ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. ಇದರಿಂದಾಗಿ ಈ ಜಿಲ್ಲೆಗಳಲ್ಲಿ ಆ. 13ರವರೆಗೂ ಹವಾಮಾನ ಇಲಾಖೆ ರೆಡ್ ಅಲರ್ಟ್​ ಘೋಷಿಸಿದೆ.
ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆಯಿಂದ ಇದುವರೆಗೂ 13 ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಂಗಳೂರು, ಕಾರವಾರ ಸಮುದ್ರದಲ್ಲಿ ಎತ್ತರದ ಅಲೆಗಳು ಅಪ್ಪಳಿಸಲಿದ್ದು, ಅಕ್ಕಪಕ್ಕದ ಗ್ರಾಮಗಳ ಜನರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಆ.11ರಂದು ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗುವ ಲಕ್ಷಣವಿರುವುದರಿಂದ ಆರೆಂಜ್ ಅಲರ್ಟ್ ಹಾಗೂ ಆ.12 ಮತ್ತು 13ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯಿಂದ ಕೆ.ಆರ್​.ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಅಣೆಕಟ್ಟೆಯಿಂದಲೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಯಬಿಡಲಾಗಿದೆ. ಇದರಿಂದ ನದಿ ಪಾತ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಶ್ರೀರಂಗಪಟ್ಟಣದ ಬಲಮುರಿ, ಎಡಮುರಿ ಶ್ರೀರಂಗನಾಥ ದೇವಸ್ಥಾನದ ಸ್ನಾನಘಟ್ಟ, ಗೆಂಡೆಹೊಸಹಳ್ಳಿ ಪಕ್ಷಿಧಾಮ, ವೆಲ್ಲಿಸ್ಲಿ ಸೇತುವೆ. ಸಂಗಮ, ಗೋಸಾಯಿ ಘಾಟ್, ಮುತ್ತತ್ತಿ ಸೇರಿದಂತೆ ನದಿ ಹರಿಯುವ ಪ್ರಮುಖ ಹಾಟ್ ಸ್ಪಾಟ್​ಗಳಲ್ಲಿ ಮುಂಜಾಗ್ರತೆಯಾಗಿ ಬ್ಯಾರಿಕೇಡ್​ಗಳನ್ನು ಹಾಕಲಾಗಿದೆ.
ಈಗಾಗಲೇ 80 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 1,600 ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್​ ಮಾಡಲಾಗಿದೆ. 28 ಮನೆಗಳು ಸಂಪೂರ್ಣ ಹಾನಿಯಾಗಿವೆ. 2,140 ಮನೆಗಳು ಬಹುತೇಕ ಹಾನಿಗೊಳಗಾಗಿವೆ. ರಾಜ್ಯದ 31,541 ಹೆಕ್ಟೇರ್ ಬೆಳೆ ಮತ್ತು 35,000 ತೋಟಗಾರಿಕಾ ಬೆಳೆಗಳು ಮಳೆಯಿಂದ ನಾಶವಾಗಿದೆ.