*ಬೆಂಗಳೂರು*
ಕೊರೊನಾ ಪರಿಸ್ಥಿತಿ ಎದುರಿಸಲು ಹಾಗೂ ಅದರ ನಿರ್ವಹಣೆಗೆ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸ್ವಾಗತಿಸಿದ್ದಾರೆ.
ನಾನು ಬಹು ಹಿಂದೆಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರ್ವಪಕ್ಷ ಸಭೆ ಕರೆಯಬೇಕು. ದೇಶ ಎದುರಿಸುತ್ತಿರುವ ಈ ಸಂಕಷ್ಟ ಪರಿಸ್ಥಿತಿ ಎದುರಿಸಲು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹ ಮಾಡಿದ್ದೆ. ತಡವಾಗಿಯಾದರೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ಈ ನಿರ್ಧಾರಕ್ಕೆ ಬಂದಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಾರ್ಚ್ 26ರಂದು ತಮ್ಮ ನಿವಾಸದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಹಾಗೂ ಮಾರ್ಚ್ 27 ರಂದು ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ನಾನು ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ಆಗ್ರಹಿಸಲಾಗಿತ್ತು. ನಂತರ ವಿವಿಧ ಮಾಧ್ಯಮಗಳಿಗೆ ನೀಡಿದ ಸಂದರ್ಶನ ಹಾಗೂ ಹೇಳಿಕೆಗಳಲ್ಲೂ ಈ ಬಗ್ಗೆ ಒತ್ತಾಯಿಸಲಾಗಿತ್ತು. ಕೊನೆಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿರುವುದು ಶ್ಲಾಘನೀಯ ಎಂದು ಶಿವಕುಮಾರ್ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಒತ್ತಾಯದ ಮೇರೆಗೆ ರಾಜ್ಯ ಸರ್ಕಾರ ಮಾರ್ಚ್ 29 ರಂದು ಸರ್ವಪಕ್ಷಗಳ ಸಭೆ ಕರೆದಿದ್ದನ್ನು ಇಲ್ಲಿ ಸ್ಮರಿಸಬಹುದು.