Saturday, 21st September 2024

Actor Darshan: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸೆ.23ಕ್ಕೆ ಮುಂದೂಡಿಕೆ

Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. ಪ್ರಕರಣದಲ್ಲಿ ಇದೇ ಮೊದಲ ಬಾರಿ ದರ್ಶನ್‌ (Actor Darshan) ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಧೀಶ ಜೈ ಶಂಕರ್ ಅವರು, ವಿಚಾರಣೆಯನ್ನು ಸೆ.23ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ದರ್ಶನ್ ಬಂಧನವಾಗಿ 102 ದಿನಗಳು ಕಳೆದಿವೆ. ಹೀಗಾಗಿ ಜಾಮೀನು ಅರ್ಜಿ ತುರ್ತು ವಿಚಾರಣೆಗಾಗಿ ಇಂದೇ ಮನವಿ ಮಾಡಲಾಗಿತ್ತು. ಆದರೆ, ಎಸ್‌ಪಿಪಿಗೆ ನೋಟಿಸ್ ಜಾರಿ ಮಾಡಿ ಸೋಮವಾರಕ್ಕೆ ಅರ್ಜಿ ವಿಚಾರಣೆಯನ್ನು ಕೋರ್ಟ್‌ ಮುಂದೂಡಿದೆ.

ಇದಕ್ಕೂ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್​​​​​​ಗೆ, ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ ಸದ್ದು ಮಾಡಿದ ಹಿನ್ನೆಲೆಯಲ್ಲಿ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲದೆ ದರ್ಶನ್ ಜೊತೆಗಿದ್ದ ರೌಡಿಶೀಟರ್‌ಗಳಾದ ವಿಲ್ಸನ್ ಗಾರ್ಡನ್ ನಾಗ ಸೇರಿ ಎಲ್ಲರನ್ನೂ ಬೇರೆ ಜೈಲುಗಳಿಗೆ ಸ್ಥಳಾಂತರಗೊಳಿಸಲಾಗಿತ್ತು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲನೇ ಆರೋಪಿಯಾದ ಪವಿತ್ರಾ ಗೌಡ ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಜಾಮೀನು ನೀಡಲು ನಿರಾಕರಿಸಿತ್ತು. ಅದೇ ರೀತಿ ಇನ್ನುಳಿದ ಕೆಲವು ಆರೋಪಿಗಳು ಕೂಡ ಜಾಮೀನು ಕೋರಿ ನ್ಯಾಯಾಲಯಕ್ಕೆ ಹೋಗಿದ್ದರು. ಆದರೆ, ದರ್ಶನ್ ಮಾತ್ರ ಜಾಮೀನಿಗಾಗಿ ಅರ್ಜಿ ಸಲ್ಲಿಸಿರಲಿಲ್ಲ. ಆದರೆ, ಇದೀಗ ಮೊದಲ ಬಾರಿ ನಟ ದರ್ಶನ್‌ ಜಾಮೀನಿಗಾಗಿ ಕೋರ್ಟ್‌ ಮೊರೆ ಹೋಗಿದ್ದಾರೆ.

ಇದನ್ನೂ ಓದಿ | Chalavadi Narayanaswamy: ಭಾರತಕ್ಕೆ ಅಪಮಾನ ಮಾಡಿದ ಆರೋಪ; ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ ಬಿಜೆಪಿ

ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

MLA Munirathna

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ (MLA Munirathna) ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆಯಾಗಿದ್ದು, ಈ ವಿಶೇಷ ತನಿಖಾ ತಂಡದ ಸದಸ್ಯರಾಗಿ ಐಜಿ ಲಾಭೂರಾಮ್‌, ರೈಲ್ವೆ ಎಸ್‌ಪಿ ಸೌಮ್ಯಲತಾ, ಪೊಲೀಸ್‌ ಅಧೀಕ್ಷಕ ಸಿ.ಎ.ಸೈಮನ್‌ ನೇಮಕವಾಗಿದ್ದಾರೆ.

ಸಚಿವ ಕೃಷ್ಣ ಬೈರೇಗೌಡ ಹಾಗೂ ಡಾ.ಎಂ.ಸಿ.ಸುಧಾಕರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಒಕ್ಕಲಿಗ ಸಮುದಾಯದ ನಾಯಕರು, ಸಿಎಂ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿಯಾಗಿ, ಮಾಜಿ ಸಚಿವ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸುವಂತೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರವು ಎಸ್‌ಐಟಿ ರಚನೆ ಮಾಡಿದೆ.

ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ

ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಶಾಸಕ ಮುನಿರತ್ನ ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರನ್ನು ಸುತ್ತಿಕೊಂಡಿತ್ತು. ಹೀಗಾಗಿ ಪೊಲೀಸರು ಶನಿವಾರ ಕೋರ್ಟ್​ಗೆ ಶಾಸಕನನ್ನು ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್‌, ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್​ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.

ಘಟನೆ ಸಂಬಂಧ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ FIR ದಾಖಲಾಗಿತ್ತು. ಆರ್​.ಆರ್​.ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್​ ಕುಮಾರ್​, ಕಿರಣ್​​, ಲೋಹಿತ್​​, ಮಂಜುನಾಥ್​, ಲೋಕಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಖಾಸಗಿ ರೆಸಾರ್ಟ್​ನಲ್ಲಿ ಅತ್ಯಾಚಾರ ಮಾಡಿರುವುದಾಗಿ DySP ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದರು.

ಇದಕ್ಕೂ ಮುನ್ನಾ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ಕಮಿಷನ್ ನೀಡುವಂತೆ ಗುತ್ತಿಗೆದಾರ ಚಲುವರಾಜ್​ ಅವರಿಗೆ ಜೀವ ಬೆದರಿಕೆ ಹಾಕಿ ನಿಂದಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ವೈಯಾಲಿಕಾವಲ್‌ ಠಾಣೆಯಲ್ಲಿ ಮುನಿರತ್ನ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ ದಾಖಲಾಗಿದ್ದವು. ಈ ಕುರಿತು ಮುನಿರತ್ನ ಬೆದರಿಕೆ ಹಾಕಿದ ಆಡಿಯೋ ಕೂಡ ವೈರಲ್‌ ಆಗಿತ್ತು.

ಈ ಸುದ್ದಿಯನ್ನೂ ಓದಿ | Puneeth Kerehalli: ಗಣೇಶ ವಿಸರ್ಜನೆಗೆಂದು ತುಮಕೂರಿಗೆ ತೆರಳಿದ್ದ ಪುನೀತ್‌ ಕೆರೆಹಳ್ಳಿ ಬಂಧನ

ಈ ಕೃತ್ಯ ಬೆಳಕಿಗೆ ಬಂದ ನಂತರ ನಗರ ತೊರೆದು ಆಂಧ್ರ ಪ್ರದೇಶದತ್ತ ಹೊರಟಿದ್ದ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳಬಾಗಿಲು ಸಮೀಪ ಶನಿವಾರ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗಲೇ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ದಾಖಲಾಗಿತ್ತು. ಈ ಸಂಬಂಧ ಬಂಧನವಾಗಿರುವ ಶಾಸಕ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.