Friday, 22nd November 2024

ಇಂದಿನಿಂದ ಪದವಿ ಕಾಲೇಜುಗಳಿಗೆ ಪ್ರವೇಶಾತಿ ಆರಂಭ

ಬೆಂಗಳೂರು: ಇಂದಿನಿಂದ ರಾಜ್ಯದ ಪದವಿ ಕಾಲೇಜುಗಳಿಗೆ ಪ್ರವೇಶಾತಿ ಪ್ರಕ್ರಿಯೆಗಳು ನಡೆಯಲಿವೆ. ಮೊದಲ ಬಾರಿಗೆ ಆನ್‌ಲೈನ್‌ ಮೂಲಕವೇ ಪ್ರವೇಶಾತಿ ನಡೆಸುವುದಾಗಿ ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.

ಜೂ.18ರಂದು ದ್ವಿತೀಯ ಪಿಯುಸಿ ಫ‌ಲಿತಾಂಶ ಪ್ರಕಟವಾಗಿದ್ದು, ಫ‌ಲಿತಾಂಶದ ಮಾರನೆಯ ದಿನ ಜೂ.19ರಿಂದಲೇ ಪ್ರವೇಶ ಪ್ರಕ್ರಿಯೆಗಳು ನಡೆಯುತ್ತಿವೆ.

ಬಹುತೇಕ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಪೂರ್ಣಗೊಂಡಿವೆ. ಸರ್ಕಾರಿ ಕಾಲೇಜುಗಳಲ್ಲಿ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್‌) ತಂತ್ರಾಂಶದಲ್ಲಿ ಕೆಲವು ತಾಂತ್ರಿಕ ಸಮಸ್ಯೆಯಾಗಿದ್ದರಿಂದ ಸರ್ಕಾರವು ಜು.11ರಿಂದ ಅಧಿಕೃತವಾಗಿ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದೆ.

ಸೋಮವಾರದಿಂದ ಪ್ರವೇಶಾತಿ ಪ್ರಕ್ರಿಯೆಗಳು ಚುರುಕುಗೊಳ್ಳಲಿವೆ. ಎನ್‌ಇಪಿ ಜಾರಿ ಯಲ್ಲಿರುವುದರಿಂದ ಕಾಲೇಜಿನಲ್ಲಿರುವ ಕೋರ್ಸ್‌ಗಳ ಪೈಕಿ ವಿದ್ಯಾರ್ಥಿಗಳು ತಾವು ಇಚ್ಛಿಸಿದ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು.

ಈ ವರ್ಷದಿಂದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಏಕರೀತಿಯ ವೇಳಾಪಟ್ಟಿ ಪ್ರಕಟಿಸಲಿದೆ. ಹೀಗಾಗಿ, ಜು.11ರಿಂದ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಲಿದ್ದು, ಆ.17ರಿಂದ ತರಗತಿಗಳು ಆರಂಭವಾಗಲಿದೆ.