Thursday, 21st November 2024

Bengaluru Rain: ಭಾರಿ ಮಳೆ ಹಿನ್ನೆಲೆ ನಾಳೆ ಬೆಂಗಳೂರು ನಗರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Bengaluru Rain

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ (Bengaluru Rain) ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅ. 23ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿಗಳು ಹಾಗೂ ಖಾಸಗಿ, ಅನುದಾನಿತ, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ. ಜಿ ಅವರು ಆದೇಶ ಹೊರಡಿಸಿದ್ದಾರೆ.

ಅಂಗನವಾಡಿ ಹಾಗೂ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದ್ದು, ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್ , ಐ.ಟಿ.ಐ ಕಾಲೇಜುಗಳಿಗೆ ರಜೆ ಇರುವುದಿಲ್ಲ, ಎಂದಿನಂತೆ ತರಗತಿಗಳು ನಡೆಯಲಿವೆ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶ ಹೊರಡಿಸಲಾಗುವುದು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸಬೇಕು. ದುರ್ಬಲ, ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸಬಾರದು. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸಬೇಕು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸಬೇಕು ಎಂದು ಸೂಚಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ರಜೆ ನೀಡಿರುವುದರಿಂದ ಉಂಟಾಗಿರುವ ಕಲಿಕಾ ಸಮಯದ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸಬೇಕು. ವಿದ್ಯಾರ್ಥಿಗಳ ಪೋಷಕರು, ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳಬೇಕು ಹಾಗೂ ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Bengaluru Rain: ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರ ಸಾವು; ಅವಶೇಷಗಳಡಿ 10ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ