ಬೆಂಗಳೂರು: ನಿನ್ನೆಯಷ್ಟೇ ಕೋರ್ಟ್‌ನಿಂದ ಜಾಮೀನು (Bail) ಪಡೆದು ನ್ಯಾಯಾಂಗ ಬಂಧನದಿಂದ (Judicial custody) ಹೊರಬಂದಿದ್ದ ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ (BJP MLA Munirathna Arrest) ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಮಹಿಳೆಯೊಬ್ಬರು ನೀಡಿದ ಅತ್ಯಾಚಾರ (Physical Abuse) ಆರೋಪದಡಿ ಬಂಧಿಸಲಾಗಿದೆ.
ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. 2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.
ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಈ ಪ್ರಕರಣ ಸಂಬಂಧ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ.
ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ಕಮಿಷನ್ ನೀಡುವಂತೆ ಗುತ್ತಿಗೆದಾರ ಚಲುವರಾಜ್ ಅವರಿಗೆ ಜೀವ ಬೆದರಿಕೆ ಹಾಕಿ ನಿಂದಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ವೈಯಾಲಿಕಾವಲ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಪ್ರತ್ಯೇಕ ಎಫ್‌ಐಆರ್ ದಾಖಲಾಗಿದ್ದವು. ಈ ಕುರಿತು ಮುನಿರತ್ನ ಬೆದರಿಕೆ ಹಾಕಿದ ಆಡಿಯೋ ಕೂಡ ವೈರಲ್ ಆಗಿತ್ತು.
ಈ ಕೃತ್ಯ ಬೆಳಕಿಗೆ ಬಂದ ನಂತರ ನಗರ ತೊರೆದು ಆಂಧ್ರ ಪ್ರದೇಶದತ್ತ ಹೊರಟಿದ್ದ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳಬಾಗಿಲು ಸಮೀಪ ಶನಿವಾರ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗಲೇ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ದಾಖಲಾಗಿತ್ತು.
ಇದನ್ನೂ ಓದಿ: DK Suresh: ಮುನಿರತ್ನ ಮೋದಿಯವರ ತಾಯಿಯನ್ನು ಅವಹೇಳನ ಮಾಡಿದ್ದನ್ನು ಬಿಜೆಪಿ ಸಹಿಸಬಹುದು, ನಾವು ಸಹಿಸಲ್ಲ: ಡಿ.ಕೆ. ಸುರೇಶ್!