Thursday, 28th November 2024

BS Yediyurappa: ಪೋಕ್ಸೋ ಪ್ರಕರಣದಲ್ಲಿ ಬಿಎಸ್‌ವೈ ಖುದ್ದು ಹಾಜರಾತಿಗೆ ವಿನಾಯಿತಿ ವಿಸ್ತರಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ (POCSO case) ವಿಚಾರಣೆಯ ಸಂದರ್ಭದಲ್ಲಿ ಅವರಿಗೆ ನೀಡಲಾಗಿರುವ ಖುದ್ದು ಹಾಜರಾತಿಯ ವಿನಾಯಿತಿಯನ್ನು ವಿಸ್ತರಿಸಿ ಕೋರ್ಟ್‌ ಆದೇಶ ನೀಡಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಅವರು ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ನಡೆದಿದ್ದು, ವಿಚಾರಣೆ ವೇಳೆ ಖುದ್ದು ಹಾಜರಾತಿಯನ್ನು ವಿಸ್ತರಿಸಿ, ವಿಚಾರಣೆಯನ್ನು ಡಿಸೆಂಬರ್ 2ರಂದು ನಿಗದಿಪಡಿಸಿ ಕೋರ್ಟ್ ಆದೇಶ ಹೊರಡಿಸಿತು. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ಇರುವುದರಿಂದ ವಿಚಾರಣೆ ಸ್ಥಗಿತವಾಗಿದೆ.

ಪೋಕ್ಸೋ ಕೇಸ್ ಆಗಿರುವುದರಿಂದ ತುರ್ತು ವಿಚಾರಣೆ ಮಾಡಿ ಎಂದು ಮನವಿ ಮಾಡಿಕೊಳ್ಳಲಾಗಿತ್ತು. ಸರ್ಕಾರದ ಎಸ್‌ಪಿಪಿ ರವಿವರ್ಮ ಕುಮಾರ್ ಮನವಿ ಮಾಡಿಕೊಂಡಿದ್ದರು. ಈ ವೇಳೆ ಡಿಸೆಂಬರ್ 2ರ ಮಧ್ಯಾಹ್ನ 2:30 ಕ್ಕೆ ವಿಚಾರಣೆ ನಿಗದಿ ಪಡಿಸಿ ಹೈಕೋರ್ಟ್ ಅದೇಶಿಸಿದೆ. ಅಲ್ಲದೇ ಬಿಎಸ್ ಯಡಿಯೂರಪ್ಪ ಖುದ್ದು ಹಾಜರಾತಿಗೆ ವಿನಾಯಿತಿ ನೀಡಿದ್ದ ಆದೇಶ ಕೂಡ ವಿಸ್ತರಣೆಯಾಗಿದೆ.

ಪ್ರಕರಣದ ಹಿನ್ನೆಲೆ

ಸಹಾಯ ಕೋರಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ತಾಯಿ ಮಗಳು ಭೇಟಿ ನೀಡಿದ್ದ ಸಂದರ್ಭದಲ್ಲಿ ಅಪ್ರಾಪ್ತ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಾಲಕಿಯ ತಾಯಿ ಮಾರ್ಚ್ 14, 2024ರಂದು ದೂರು ನೀಡಿದ್ದರು. ಈ ದೂರು ಆಧರಿಸಿ ಬಿಎಸ್ ವೈ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು.

ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಸಿಐಡಿ ಈ ಕುರಿತು ಚಾರ್ಜ್‌ಶೀಟ್‌ ಸಲ್ಲಿಸಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 8 (ಲೈಂಗಿಕ ದೌರ್ಜನ್ಯ), ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354A (ಲೈಂಗಿಕ ಕಿರುಕುಳ) ಮತ್ತು 214 ಅಡಿಯಲ್ಲಿ ಆರೋಪ ಪಟ್ಟಿ ಸಲ್ಲಿಸಿದೆ.

ಪ್ರಕರಣದಲ್ಲಿ ಸಂತ್ರಸ್ತೆ 17 ವರ್ಷದ ಬಾಲಕಿ. ಫೆಬ್ರವರಿ 2, 2024ರಂದು ತನ್ನ ತಾಯಿಯೊಂದಿಗೆ ಮಾಜಿ ಮುಖ್ಯಮಂತ್ರಿಯನ್ನು ಅವರ ನಿವಾಸದಲ್ಲಿ ಭೇಟಿಯಾಗಲು ಹೋಗಿದ್ದಳು. ಸಂತ್ರಸ್ತೆ 7 ವರ್ಷದವಳಿದ್ದಾಗ ಆಕೆಯ ಸಂಬಂಧಿಕರೊಬ್ಬರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದು, ಈ ಹಿಂದಿನ ಅತ್ಯಾಚಾರ ಪ್ರಕರಣದ ತನಿಖೆಯನ್ನು ವೇಗಗೊಳಿಸಲು ಅವರ ಸಹಾಯವನ್ನು ತಾಯಿ ಕೋರಿದ್ದರು. ಆ ಸಂದರ್ಭದಲ್ಲಿ ಬಿಎಸ್‌ವೈ ತಮ್ಮ ಮನೆಯ ಕೊಠಡಿಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಮಾರ್ಚ್ 14 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ವಿಚಾರಣಾ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿತ್ತು. ನಂತರ ಕರ್ನಾಟಕ ಹೈಕೋರ್ಟ್ ಜೂನ್ 14ರಂದು ಬಂಧನಕ್ಕೆ ತಡೆಯಾಜ್ಞೆ ನೀಡಿತ್ತು.

ಇದನ್ನೂ ಓದಿ: ಬಿ.ಎಸ್​. ಯಡಿಯೂರಪ್ಪ ವಿಚಾರಣೆಗೆ ಹಾಜರು