Thursday, 2nd January 2025

BY Vijayendra: ಪ್ರಿಯಾಂಕ ಖರ್ಗೆ ರಾಜೀನಾಮೆ ಪಡೆದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ; ಬಿ.ವೈ. ವಿಜಯೇಂದ್ರ ಆಗ್ರಹ

BY Vijayendra

ಬೆಂಗಳೂರು: ಸಚಿನ್ ಸಾವಿನ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದು, ದುರ್ಘಟನೆಯ ಸಿಬಿಐ ತನಿಖೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಕ್ಕಾಗಿ ಸಿಬಿಐ ತನಿಖೆಗೆ ಸಚಿನ್ ಕುಟುಂಬವೂ ಒತ್ತಾಯಿಸಿದೆ. ಹಿಂದೆ, ಇದೇ ಸರ್ಕಾರದ ಸಚಿವ ನಾಗೇಂದ್ರ ಅವರೂ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿ ರಾಜೀನಾಮೆ ಕೊಟ್ಟಿದ್ದಾರೆ. ಒಂದು ಕ್ಷಣವೂ ತಡ ಮಾಡದೆ, ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ ಅವರು, ಯಾರನ್ನೋ ಉಳಿಸುವ, ರಕ್ಷಿಸುವ ದುಸ್ಸಾಹಸ ಬೇಡ ಎಂದು ಎಚ್ಚರಿಸಿದರು.

ಮೇಧಾವಿ ಪ್ರಿಯಾಂಕ್ ಖರ್ಗೆಯವರಿಗೆ ಮರೆವು ಜಾಸ್ತಿ. ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಈಶ್ವರಪ್ಪ ಅವರ ಮೇಲೆ ಆರೋಪ ಬಂದಾಗ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದನ್ನು ಪ್ರಿಯಾಂಕ್ ಮರೆಯಬಾರದು. ಮಡಿಕೇರಿಯಲ್ಲಿ ಪೊಲೀಸ್ ಅಧಿಕಾರಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೇ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಆ ಪ್ರಕರಣದಲ್ಲಿ ಅಂದಿನ ಗೃಹ ಸಚಿವ ಜಾರ್ಜ್ ಅವರು ಕೂಡ ರಾಜೀನಾಮೆ ಕೊಟ್ಟು, ಸಿಬಿಐ ತನಿಖೆ ಆಗಿ ಕ್ಲೀನ್ ಚಿಟ್ ಬಂದಿತ್ತು ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Russia-Built Warship: ಫೆಬ್ರವರಿಯೊಳಗೆ ಭಾರತಕ್ಕೆ ಬರಲಿದೆ ರಷ್ಯಾ ನಿರ್ಮಿತ ಹೊಸ ಯುದ್ಧನೌಕೆ

ಸಚಿನ್ ಕುಟುಂಬಕ್ಕೆ ಭದ್ರತೆ ನೀಡಿ

ಸಚಿನ್ ಅವರ ಕುಟುಂಬಕ್ಕೆ ತಕ್ಷಣದಿಂದ ಭದ್ರತೆ ಕೊಡಬೇಕು. ಕುಟುಂಬಕ್ಕೆ 1 ಕೋಟಿ ರೂಪಾಯಿಗಳ ಪರಿಹಾರ ನೀಡಬೇಕು. ಹಲವರು ವಿದ್ಯಾವಂತರಿದ್ದು, ಕುಟುಂಬದ ಒಬ್ಬರು ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಒತ್ತಾಯಿಸಿದರು. ಹಿಂದೂ ಸಮಾಜದ ಸಿದ್ಧಲಿಂಗ ಸ್ವಾಮೀಜಿ, ಶಾಸಕ ಬಸವರಾಜ ಮತ್ತಿಮೂಡ, ಕಲಬುರ್ಗಿಯ ಬಿಜೆಪಿ ನಾಯಕರಾದ ಚಂದುಪಾಟೀಲ, ಮಣಿಕಂಠ ರಾಠೋಡ್ ಅವರ ಕೊಲೆಗೆ ಸಂಚು ರೂಪಿಸಿದ್ದಾಗಿ ಡೆತ್ ನೋಟ್ ತಿಳಿಸಿದೆ. ಸಿದ್ಧಲಿಂಗ ಸ್ವಾಮೀಜಿ ಅವರ ಧ್ವನಿ ಅಡಗಿಸಲು ಮಹಾರಾಷ್ಟ್ರದ ಸುಪಾರಿ ಕಿಲ್ಲರ್‌ಗಳನ್ನು ಬಳಸುವ ವಿಚಾರವೂ ಡೆತ್ ನೋಟಿನಲ್ಲಿದೆ ಎಂದು ದೂರಿದ ಅವರು. ಹಾಗಾಗಿ ಇದೊಂದು ಗಂಭೀರ ವಿಚಾರ. ಆದ್ದರಿಂದ ಇದರ ಸಿಬಿಐ ತನಿಖೆ ಅತ್ಯಗತ್ಯ ಎಂದ ಅವರು, ರಾಜ್ಯದ ಪೊಲೀಸ್ ಇಲಾಖೆಯಿಂದ ಅಂಥ ಶಕ್ತಿಶಾಲಿ ಖರ್ಗೆ ಕುಟುಂಬದ ವಿರುದ್ಧ ತನಿಖೆ ಮಾಡಲು ಸಾಧ್ಯವಿಲ್ಲ ಎಂದು ಈ ವೇಳೆ ತಿಳಿಸಿದರು.

ಪ್ರಿಯಾಂಕ್ ಖರ್ಗೆ ಸರ್ವ ಇಲಾಖೆಯ ಸಚಿವರು

ಪ್ರಿಯಾಂಕ್ ಖರ್ಗೆ ಅವರ ಇಲಾಖೆ ಗ್ರಾಮೀಣಾಭಿವೃದ್ಧಿ ಮತ್ತು ಐಟಿ, ಬಿಟಿ ಮಾತ್ರವಲ್ಲ, ಅವರು ಸರ್ವ ಇಲಾಖೆಯ ಸಚಿವರು. ಸದನದಲ್ಲಿ ಗೃಹ ಸಚಿವರಿದ್ದರೂ, ಸಿಎಂ ಕುರಿತು ಪ್ರಶ್ನೆ ಇದ್ದರೂ ಅವರ ಪರವಾಗಿ ಇವರು ಎದ್ದೇಳುತ್ತಾರೆ. ಗಲಾಟೆ ಮಾಡುತ್ತಾರೆ ಎಂದು ಬಿ.ವೈ. ವಿಜಯೇಂದ್ರ ಟೀಕಿಸಿದರು.

ಪ್ರಿಯಾಂಕ್ ಖರ್ಗೆ ಅವರು ಬಹಳ ಜ್ಞಾನಿ, ಮೇಧಾವಿ, ಬುದ್ಧಿವಂತರು, ಅಷ್ಟೇ ಪ್ರಭಾವಿ, ಶಕ್ತಿಶಾಲಿ ಮುಖಂಡ ಎಂದು ತಿಳಿಸಿದ ಅವರು, ಯಡಿಯೂರಪ್ಪ ಅವರ ಪೋಸ್ಕೊ ಕೇಸನ್ನು ಮುಚ್ಚಿಹಾಕಲು ಎಂಬ ಮಾತನ್ನು ಪ್ರಿಯಾಂಕ್ ಖರ್ಗೆಯವರು ಹೇಳಿದ್ದು, ಅವರು ಸುಪ್ರೀಂ ಕೋರ್ಟೇ, ಹೈಕೋರ್ಟೇ ಎಂದು ಪ್ರಶ್ನಿಸಿದರು.

ದೂರು ಸ್ವೀಕರಿಸಿಲ್ಲ

ದೂರು ಸ್ವೀಕರಿಸಿಲ್ಲ. ಸಚಿನ್ ಹುಡುಕುವ ಕೆಲಸವನ್ನೂ ಮಾಡಿಲ್ಲ. ಪೊಲೀಸ್ ಅಧಿಕಾರಿಗಳ ವರ್ತನೆಯು ಖಂಡನೀಯ. ಕಾಂಗ್ರೆಸ್ ಹಿರಿಯ ಮುಖಂಡ, ಖರ್ಗೆ ಕುಟುಂಬಕ್ಕೆ ಹತ್ತಿರ ಇರುವ ರಾಜು ಕಪನೂರ್ ಈ ಪ್ರಕರಣದ ಹಿಂದಿನ ಪ್ರಮುಖ ಆರೋಪಿ ಎಂಬುದು ಡೆತ್ ನೋಟಿನಲ್ಲಿದೆ ಎಂದು ತಿಳಿಸಿದ ಅವರು, ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿದ ಬಡ ಕುಟುಂಬಕ್ಕೆ ಅನ್ಯಾಯವಾಗಿದೆ. ಕುಟುಂಬದ ಆಧಾರಸ್ತಂಭ ಕುಸಿದಿದೆ. ಹಾಗಾಗಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲು ನಾವು ಒತ್ತಾಯಿಸುತ್ತಿದ್ದೇವೆ ಎಂದರು.

ಆತ್ಮಹತ್ಯೆ ಭಾಗ್ಯ ನೀಡಿದ ಕಾಂಗ್ರೆಸ್ ಸರ್ಕಾರ

ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಸರ್ಕಾರಿ ಪ್ರಾಯೋಜಿತ ಆತ್ಮಹತ್ಯೆಗಳು ಅಥವಾ ರಾಜ್ಯ ಸರ್ಕಾರದ ಕುಮ್ಮಕ್ಕಿನ ಆತ್ಮಹತ್ಯೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಸರ್ಕಾರ, ಸಚಿವರು, ಆಡಳಿತ ಪಕ್ಷದ ಶಾಸಕರ ಕುಮ್ಮಕ್ಕಿನಿಂದ ಹಿಂದೆಂದೂ ಇಂಥ ಸರಣಿ ಆತ್ಮಹತ್ಯೆ ಪ್ರಕರಣಗಳನ್ನು ಕೇಳಿರಲಿಲ್ಲ. ನೋಡಿರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ದೂರಿದರು.

ಈ ಸುದ್ದಿಯನ್ನೂ ಓದಿ | Jog Falls: ಹೊಸ ವರ್ಷಕ್ಕೆ ಜೋಗ ಜಲಪಾತ ಓಪನ್‌, ನಂದಿ ಬೆಟ್ಟ ಬಂದ್‌

ಈ ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಮುಖಂಡ ಜಗದೀಶ್ ಹಿರೇಮನಿ ಹಾಜರಿದ್ದರು.