Wednesday, 30th October 2024

ರಾಜ್ಯಸಭೆ ಸ್ಥಾನಕ್ಕೆ ಡಿಸೆಂಬರ್ 1ರಂದು ಉಪ ಚುನಾವಣೆ

ಬೆಂಗಳೂರು: ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿಸೆಂಬರ್ 1ರಂದು ಉಪ ಚುನಾವಣೆ ನಡೆಯಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ವಿಧಾನಸಭೆಯ ಕಾರ್ಯದರ್ಶಿ (ಪ್ರ) ಹಾಗೂ ಉಪಚುನಾವಣೆ ಅಧಿಕಾರಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾಳೆಯಿಂದ ನವೆಂಬರ್ 18ರವರೆಗೂ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ನ.19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ನ.23ರವರೆಗೆ ಕಾಲಾವಕಾಶವಿದೆ.

ಅವಶ್ಯವಿದ್ದಲ್ಲಿ ಡಿಸೆಂಬರ್ 1ರಂದು ವಿಧಾನಸೌಧದ ಮೊದಲ ಮಹಡಿಯ ಕೊಠಡಿ ಸಂಖ್ಯೆ 106ರಲ್ಲಿ ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ನಡೆಯಲಿದೆ. ವಿಧಾನಸಭೆಗೆ ಚುನಾಯಿತಗೊಂಡಿರುವ 222 ಸದಸ್ಯರು ಮತದಾರರಾಗಿದ್ದಾರೆ. ಕೋವಿಡ್ 19ರ ಹಿನ್ನೆಲೆ ಯಲ್ಲಿ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ನಾಮಪತ್ರ ಸಲ್ಲಿಕೆ ಸಂದರ್ಭ ಗರಿಷ್ಠ ಇಬ್ಬರಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ. ಚುನಾವಣೆ ಅಧಿಕಾರಿಯ ಕಚೇರಿ ಸಂಪರ್ಕಿಸು ವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್‍ನಿಂದ ಕೈಗಳನ್ನು ಸ್ವಚ್ಚಗೊಳಿಸುವ ವ್ಯವಸ್ಥೆ ಮಾಡಲಾಗುವುದು, ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು.

ರಾಜ್ಯಸಭೆಗೆ ಚುನಾಯಿತರಾಗಿದ್ದ ಅಶೋಕ್ ಗತ್ತಿ ಅವರು ಸೆ.17ರಂದು ನಿಧನರಾದ ಹಿನ್ನೆಲೆಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ ಎಂದರು.