Saturday, 14th December 2024

Cabinet Meeting: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ; 11,770 ಕೋಟಿ ರೂ. ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ

Cabinet Meeting

ಕಲಬುರಗಿ: ಹೈದರಾಬಾದ್‌ ನಿಜಾಮರ ಆಳ್ವಿಕೆಯಿಂದ ವಿಮೋಚನೆ ದೊರೆತ ನೆನಪಿಗಾಗಿ ಆಚರಿಸುವ ‘ಕಲ್ಯಾಣ ಕರ್ನಾಟಕ ಉತ್ಸವ-2024’ದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ ಅವರು ನಗರದಲ್ಲಿ ಮಂಗಳವಾರ ʼವಿಶೇಷ ಸಚಿವ ಸಂಪುಟʼ (Cabinet Meeting) ನಡೆಸಿದರು. ತೊಗರಿಯ ಕಣಜ ಕಲಬುರಗಿಯಲ್ಲಿ ಸುಮಾರು 10 ವರ್ಷಗಳ ಬಳಿಕ ನಡೆದ ಸಚಿವ ಸಂಪುಟದಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ರಾಜ್ಯ ಸರ್ಕಾರ ಕೈಗೊಂಡಿದೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 46 ವಿಷಯಗಳಿಗೆ ಒಟ್ಟು 11770 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ಮಹಾನಗರ ಪಾಲಿಕೆಯಾಗಿ ಮಾಡುವ ಹಾಗೂ ಬೀದರ್ ಮತ್ತು ಕಲಬುರಗಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಯನ್ನು 7200 ಕೋಟಿ ರೂಗಳ ಯೋಜನೆಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಭಾಗಕ್ಕೆ 56 ವಿಷಯಗಳನ್ನು ಚರ್ಚಿಸಲಾಗಿದೆ. ಇವುಗಳಲ್ಲಿ 46 ವಿಷಯಗಳು ಕಲ್ಯಾಣ ಕರ್ನಾಟಕದ ಭಾಗಕ್ಕೆ ಸಂಬಂಧಪಟ್ಟ ವಿಷಯಗಳಾಗಿತ್ತು. ಸಭೆಯಲ್ಲಿ ಮಂಡಿಸಲಾಗಿದ್ದ 56 ವಿಷಯಗಳ 12,692 ಕೋಟಿ ರೂ.ಗಳ ಯೋಜನೆಗಳ ಪ್ರಸ್ತಾವನೆ ಮಾಡಲಾಯಿತು. ನಾರಾಯಣಪುರ ಡ್ಯಾಂನಿಂದ ನೀರು ತರುವ ಯೋಜನೆ ಕೇಂದ್ರ ಸರ್ಕಾರದ ಪಾಲುದಾರಿಕೆ ಯೋಜನೆಯಿದಾಗಿದ್ದು, 7200 ಕೋಟಿ ರೂ.ಗಳಲ್ಲಿ ಅರ್ಧ ಭಾಗದ ಅನುದಾನವನ್ನು ಕೇಂದ್ರ ಸರ್ಕಾರ ನೀಡಬೇಕಿದೆ ಎಂದರು.

ಕೇಂದ್ರದಿಂದ 5000 ಕೋಟಿ ರೂ. ಕೋರಲು ನಿರ್ಣಯ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಭಾಗಕ್ಕೆ ಒಂದು ರೂಪಾಯಿ ಕೂಡ ನೀಡಿಲ್ಲ. ಸಂವಿಧಾನ ತಿದ್ದುಪಡಿಗೊಂಡು 371ಜೆ ಬಂದ ನಂತರ ಈವರೆಗೆ ಅನುದಾನ ನೀಡಿಲ್ಲ. ಆದ್ದರಿಂದ ಕೇಂದ್ರ ಸರ್ಕಾರವೂ ಕೂಡ ಈ ಭಾಗದ ಅಭಿವೃದ್ಧಿಗೆ 5000 ಕೋಟಿ ರೂ. ನೀಡಲು ಕೇಂದ್ರಕ್ಕೆ ಮನವಿ ಮಾಡಲು ನಿರ್ಣಯ ಕೈಗೊಳ್ಳಲಾಯಿತು ಎಂದರು.

ಖಾಲಿ ಹುದ್ದೆಗಳ ಭರ್ತಿಗೆ ಕ್ರಮ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿಯಿರುವ 17,439 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿಯವರು ತಿಳಿಸಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 371ಜೆ ಜಾರಿ

ಇಂದು ಕಲ್ಯಾಣ ಕರ್ನಾಟಕದ ವಿಮೋಚನಾ ದಿನವಾದ್ದರಿಂದ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು. 2013 ರಿಂದ 2018 ವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ 2014 ರಲ್ಲಿ ಕಲಬುರಗಿಯಲ್ಲಿ ಸಚಿವ ಸಂಪುಟ ನಡೆಸಲಾಗಿತ್ತು. ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಇಂದು ನಡೆಸಲಾಗಿದೆ. 2012 ರಲ್ಲಿ ಮನಮೋಹನ್ ಸಿಂಗ್ ಪ್ರಧಾನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಂವಿಧಾನ ತಿದ್ದುಪಡಿ ಮಾಡಲಾಯಿತು. ರಾಜ್ಯದ ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ ಅವರ ಹೋರಾಟದಿಂದ 371 ಜೆ ಜಾರಿಗೆ ತರಲಾಯಿತು. ವಿಶೇಷ ಸವಲತ್ತುಗಳನ್ನು ಕಲ್ಯಾಣ ಕರ್ನಾಟಕದ ಭಾಗಕ್ಕೆ ನೀಡುವ ಉದ್ದೇಶದಿಂದ 2013 ರಲ್ಲಿ ಸಂವಿಧಾನ ತಿದ್ದುಪಡಿಯಾದ ನಂತರ ನಮ್ಮ ಸರ್ಕಾರದ ಅವಧಿಯಲ್ಲಿ ಈ ಕಾನೂನಿನ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಯಿತು ಎಂದರು.

ಹಿಂದುಳಿದ ತಾಲೂಕುಗಳ ಸ್ಥಿತಿಗತಿ ಪರಿಶೀಲನೆಗೆ ಸಮಿತಿ

2002ರಲ್ಲಿ ನಂಜುಂಡಪ್ಪ ವರದಿಯಂತೆ ಪ್ರಾದೇಶಿಕ ಅಸಮತೋಲನವನ್ನು ಪರಿಹರಿಸಲು ಸಮಿತಿ ರಚಿಸಲಾಗಿತ್ತು. ಪ್ರಸ್ತುತ ಈ ಭಾಗದ ತಾಲ್ಲೂಕುಗಳ ಸ್ಥಿತಿಗತಿಯ ಪರಿಶೀಲನೆ ನಡೆಸಲು ಡಾ.ಗೋವಿಂದ ರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಈ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿ ವರದಿ ಬಂದ ನಂತರ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | CM Siddaramaiah: ಸಂಜಯ್ ಕುರ್ಡೀಕರ್ ಕೊಲೆ ಪ್ರಕರಣ; ಖುದ್ದು ಪರಿಶೀಲಿಸಲು ರಾಯಚೂರು ಎಸ್‌ಪಿಗೆ ಸಿಎಂ ಸೂಚನೆ

45 ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ತೀರ್ಮಾನ

ಕಲ್ಯಾಣ ಕರ್ನಾಟಕ ಭಾಗದಲ್ಲಿ 45 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹಾಗೂ 31 ಸಮುದಾಯ ಆರೋಗ್ಯ ಕೇಂದ್ರಗಳನ್ನು ಪ್ರಾರಂಭಿಸಲು , 9 ತಾಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಹಾಗೂ 2 ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಇದಕ್ಕೆ 890 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು ಎಂದರು.