Friday, 22nd November 2024

ನಾಳೆಯಿಂದ ಸಿಇಟಿ, ಕನ್ನಡ ಭಾಷಾ ಪರೀಕ್ಷೆ

ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸುಗಳಿಗೆ ಜೂ. 16 ಮತ್ತು 17ರಂದು ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮತ್ತು 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿ ಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

ಈ ಬಾರಿ ಒಟ್ಟು 2,16,525 ವಿದ್ಯಾರ್ಥಿಗಳು ಸಿಇಟಿ ಬರೆಯಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

16ರಂದು ಬೆಳಿಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50 ರವರೆಗೆ ಗಣಿತ ಪರೀಕ್ಷೆಗಳು ನಡೆಯಲಿವೆ. 17ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಪರೀಕ್ಷೆ ಜರುಗಲಿದೆ’ ಎಂದರು.

18ರಂದು ಬೆಳಿಗ್ಗೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಬೆಂಗಳೂರು, ಬೀದರ್, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರಿನಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದ್ದು,  1,708 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯು ತ್ತಿದ್ದಾರೆ.

ಒಟ್ಟು 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಪೈಕಿ 87 ಕೇಂದ್ರಗಳು ಬೆಂಗಳೂರಿನಲ್ಲಿವೆ. ಪರೀಕ್ಷಾ ಪ್ರಕ್ರಿಯೆಯನ್ನೂ ಸಮಗ್ರವಾಗಿ ವಿಡಿಯೋ ಚಿತ್ರೀಕರಣ ಮಾಡಲಾಗುವುದು. ಜತೆಗೆ ಪ್ರಶ್ನೆಪತ್ರಿಕೆ ಪೂರೈಕೆ ಇತ್ಯಾದಿಗಳನ್ನು ಹದ್ದಿನ ಕಣ್ಣಿನ ಪಹರೆ ಯಲ್ಲಿ ನಡೆಸಲಾಗುವುದು’ ಎಂದರು.

ಪ್ರತಿಯೊಂದು ಕೇಂದ್ರಕ್ಕೂ ಸಹಾಯಕ ಆಯುಕ್ತರ ದರ್ಜೆಯ ಅಧಿಕಾರಿಯೊಬ್ಬ ರನ್ನು ಪರೀಕ್ಷಾ ವೀಕ್ಷಕರಾಗಿ ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸ ಲಾಗಿದೆ. ಒಟ್ಟಾರೆ, 486 ವೀಕ್ಷಕರು, 972 ವಿಶೇಷ ತಪಾಸಣಾ ದಳದ ಸದಸ್ಯರು, 486 ಪ್ರಶ್ನೆಪತ್ರಿಕೆ ಪಾಲಕರು, 9,600 ಕೊಠಡಿ ಮೇಲ್ವಿಚಾರಕರು ಮತ್ತು 20 ಸಾವಿರಕ್ಕೂ ಹೆಚ್ಚು ಅಧಿಕಾರಿಗಳನ್ನು ಸಿಇಟಿ ಪರೀಕ್ಷಾ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಲು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ನಿರ್ಬಂಧಗಳು ಕೆಳಕಂಡಂತಿವೆ-

· ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕು

· ಓಎಂಆರ್ ಉತ್ತರ ಪತ್ರಿಕೆಯಲ್ಲಿ ತಮ್ಮ ಹೆಸರು, ಸಿಇಟಿ ಸಂಖ್ಯೆ, ಪ್ರಶ್ನೆ ಪತ್ರಿಕೆಯ ವರ್ಶನ್ ಕೋಡ್ ನಮೂದಿಸಬೇಕು.

· ಮೊದಲ ಗಂಟೆ ಬಾರಿಸಲಿರುವ ನಿಗದಿತ ಅವಧಿಗಿಂತಲೂ ಅರ್ಧ ಗಂಟೆ ಮುಂಚೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.

· ವಿದ್ಯಾರ್ಥಿಗಳು ತಮ್ಮ ಪ್ರವೇಶಪತ್ರ (ಅಡ್ಮಿಶನ್ ಟಿಕೆಟ್) ಮತ್ತು ಯಾವುದಾದರೂ ಒಂದು ಸೂಕ್ತ ಗುರುತಿನ ಪತ್ರವನ್ನು ತರಬೇಕು (ಕಾಲೇಜಿನ ಗುರುತುಪತ್ರ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಆಧಾರ್/ಪ್ಯಾನ್ ಕಾರ್ಡ್, ದ್ವಿತೀಯ ಪಿಯುಸಿ/12ನೇ ತರಗತಿಯ ಪ್ರವೇಶ ಪತ್ರ ಇತ್ಯಾದಿಗಳ ಪೈಕಿ ಒಂದು).

· ಯಾವುದೇ ತರಹದ ಕೈಗಡಿಯಾರಗಳನ್ನು ಕಟ್ಟಿಕೊಂಡು ಬರುವಂತಿಲ್ಲ.