Friday, 22nd November 2024

Channapatna by election: ಸಿ.ಪಿ.ಯೋಗೇಶ್ವರ್‌ ನಾಮಪತ್ರ ಸಲ್ಲಿಕೆ; ಚನ್ನಪಟ್ಟಣ ಕೈ ಅಭ್ಯರ್ಥಿ ಗೆಲ್ಲೋ ವಿಶ್ವಾಸವಿದೆ ಎಂದ ಸಿಎಂ

Channapatna by election

ಚನ್ನಪಟ್ಟಣ: ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಅವರು ಗುರುವಾರ ನಾಮಪತ್ರ ಸಲ್ಲಿಕೆ (Channapatna by election) ಮಾಡಿದರು. ಸಾವಿರಾರು ಕಾಂಗ್ರೆಸ್‌ ಕಾರ್ಯಕರ್ತರೊಂದಿಗೆ ಬೃಹತ್‌ ರೋಡ್‌ ಶೋ ಮೂಲಕ ಕಾಂಗ್ರೆಸ್‌ ಶಕ್ತಿ ಪ್ರದರ್ಶನ ಮಾಡಿದ ಅವರು, ತಹಸೀಲ್ದಾರ್ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಜನರು ಸಿ.ಪಿ.ಯೋಗೇಶ್ವರ್‌ರನ್ನು ಆಶೀರ್ವದಿಸಿ ಬೆಂಬಲಿಸುವ ನಂಬಿಕೆಯಿದೆ. ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ. ಚನ್ನಪಟ್ಟಣದ ಉಪಚುನಾವಣೆಯಲ್ಲಿ ಜೆಡಿಎಸ್‌ನವರು ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುತ್ತಾರೆ ಎನ್ನುವುದು ಮುಖ್ಯವಲ್ಲ. ಸಿ.ಪಿ. ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದು, ಎರಡು ಬಾರಿ ಶಾಸಕರಾಗಿದ್ದರು. ಬಿಜೆಪಿ ಹಾಗೂ ಎನ್‌ಡಿಎನಿಂದ ಅವರಿಗೆ ಅನ್ಯಾಯವಾದ ಕಾರಣ ಅವರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನೊಪ್ಪಿ ಮರಳಿ ಬಂದಿರುವ ಯೋಗೇಶ್ವರ್‌ರನ್ನು ಇಡೀ ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ. ಸಿ.ಪಿ.ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ. ಜೆಡಿಎಸ್ ಬಿಜೆಪಿಯವರು ಚನ್ನಪಟ್ಟಣ ಕ್ಷೇತ್ರಕ್ಕೆ ಯಾರನ್ನೇ ನಿಲ್ಲಿಸಿದರೂ ಕಾಂಗ್ರೆಸ್‌ನ ಅಭ್ಯರ್ಥಿಯೇ ಗೆಲುವು ಸಾಧಿಸುವ ವಿಶ್ವಾಸವಿದೆ. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಗ್ಯಾರಂಟಿ ಯೋಜನೆಗಳು ನುಡಿದಂತೆ ನಡೆಯುವ ನಮ್ಮ ಬದ್ಧತೆಯನ್ನು ತೋರಿಸುತ್ತದೆ ಎಂದರು.

ರಿಸಲ್ಟ್ ನೋಡ್ತೀನಿಲ ಯೋಗೇಶ್ವರ್ 50 ಸಾವಿರ ಮತಗಳಿಂದ ಗೆಲ್ಲಬೇಕು

ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಯೋಗೀಶ್ವರ್ ಪರ ರೋಡ್ ಶೋನಲ್ಲಿ‌ ಭಾಗವಹಿಸಿ ಮಾತನಾಡಿದ ಅವರು, ಕೆರೆಗಳಿಗೆ ಜೀವದಾನ ಮಾಡಿದ ಯೋಗೇಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದಾರೆ. ಕಾಂಗ್ರೆಸ್ಸಿಗೆ ಮರಳಿದ ಅವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೇಶ್ವರ್ ಗೆಲ್ಲುವ ಮೂಲಕ‌ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ ಎಂದು ಕರೆ ನೀಡಿದರು.

ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೇಶ್ವರ್ ಅವರೇ ಭರ್ಜರಿ ಜಯಗಳಿಸೋದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದರು.

ಜನಕಲ್ಯಾಣದ ಸರ್ಕಾರದಲ್ಲಿ ಯೋಗೇಶ್ವರ್ ಇರ್ತಾರೆ

ನಮ್ಮದು ಜನಕಲ್ಯಾಣದ ಸರ್ಕಾರ. ಈ ಸರ್ಕಾರದಲ್ಲಿ ಯೋಗೇಶ್ವರ್ ಅವರು ಇರಬೇಕು. ಎಚ್.ಡಿ.ಕುಮಾರಸ್ವಾಮಿಯವರು ಶಾಸಕರಾಗಿ, ಮುಖ್ಯಮಂತ್ರಿ ಆಗಿದ್ದಾಗಲೂ ಮಾಡದ ಚನ್ನಪಟ್ಟಣದ ಅಭಿವೃದ್ಧಿ ಕೆಲಸಗಳು ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೇಶ್ವರ್ ಅವರು ಮುಂದುವರಿಸುತ್ತಾರೆ. ನಾನು ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ ಎಂದರು.

ಈ ಸುದ್ದಿಯನ್ನೂ ಓದಿ | assembly bypolls: ಉತ್ತರ ಪ್ರದೇಶ, ರಾಜಸ್ಥಾನ ಉಪಚುನಾವಣೆ: ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಮಾಜಿ ಸಚಿವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಮಾಜಿ ಸಂಸದರಾದ ಡಿ.ಕೆ.ಸುರೇಶ್ ಸೇರಿ ಹತ್ತಕ್ಕೂ ಹೆಚ್ಚು ಮಂದಿ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.