ಚನ್ನಪಟ್ಟಣ: ಬಾರಿ ಕುತೂಹಲ ಕೆರಳಿಸಿದ್ದ ಚನ್ನಪಟ್ಟಣ ಉಪ ಚುನಾವಣೆಯಲ್ಲಿ (Channapatna Bypoll Result 2024) ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮಂಡ್ಯ ಲೋಕಸಭಾ ಮತ್ತು ರಾಮನಗರ ವಿಧಾನಸಭಾ ಚುನಾವಣೆ ಬಳಿಕ ಕ್ಷೇತ್ರದಲ್ಲಿ ಮೂರನೇ ಬಾರಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhil kumaraswamy) ಅವರಿಗೆ ಈ ಬಾರಿಯೂ ಮುಖಭಂಗವಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ 1,12,642 ಮತಗಳನ್ನು ಪಡೆದು, ನಿಖಿಲ್ ಕುಮಾರಸ್ವಾಮಿ (87,229 ಮತ) ವಿರುದ್ಧ 25, 413 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ. ನಿಖಿಲ್ ಕುಮಾರಸ್ವಾಮಿಗೆ 2019ರಲ್ಲಿ ಮಂಡ್ಯ ಲೋಕಸಭಾ ಚುನಾವಣೆ ಹಾಗೂ 2023ರ ರಾಮನಗರ ವಿಧಾನಸಭಾ ಚುನಾವಣೆ ಬಳಿಕ ಮತ್ತೊಮ್ಮೆ ಜೆಡಿಎಸ್ ಭದ್ರಕೋಟೆ ಚನ್ನಪಟ್ಟಣದಲ್ಲೂ ಸೋಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ಗೆಲುವು ಪಡೆದಿದ್ದರು. ಅವರ ರಾಜೀನಾಮೆಯಿಂದ ತೆರವಾಗಿದ್ದ ಚನ್ನಪಟ್ಟಣ ಕ್ಷೇತ್ರದಲ್ಲಿ ಇದೀಗ ಯೋಗೇಶ್ವರ್ ಗೆಲುವಿನ ನಗೆ ಬೀರಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು 96,592 ಮತಗಳಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಸಿ.ಪಿ.ಯೋಗೇಶ್ವರ್ (80,677 ಮತ) ಗೆಲುವು ಪಡೆದಿದ್ದರು.
ಈ ಸುದ್ದಿಯನ್ನೂ ಓದಿ | Sandur Bypoll Result 2024: ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಜಯಭೇರಿ
ಶಿಗ್ಗಾಂವಿಯಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್ನ ಯಾಸಿರ್ ಅಹ್ಮದ್
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಉಪ ಚುನಾವಣೆಯಲ್ಲಿ (Shiggaon bypoll results 2024) ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಪಠಾಣ್ (yasir ahmed khan pathan) ವಿಜಯ ಪತಾಕೆ ಹಾರಿಸಿದ್ದಾರೆ. ಇವರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ (Bharath bommai) ವಿರುದ್ಧ 13,448 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.
ಒಟ್ಟು 18 ಸುತ್ತುಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಪಠಾಣ್ 10,0756 ಮತ ಪಡೆದಿದ್ದು, ಬಿಜೆಪಿಯ ಭರತ್ ಬೊಮ್ಮಾಯಿ 87,308 ಪಡೆದಿದ್ಧಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಬಸವರಾಜ ಬೊಮ್ಮಾಯಿ ಅವರು 1,00,016 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ (64,038) ವಿರುದ್ಧ ಭರ್ಜರಿ ಗೆಲುವು ಕಂಡಿದ್ದರು. ಬಸವರಾಜ ಬೊಮ್ಮಾಯಿ ಅವರು ಲೋಕಸಭೆಗೆ ಆಯ್ಕೆಯಾಗಿದ್ದರಿಂದ ಅವರಿಂದ ತೆರವಾದ ಸ್ಥಾನಕ್ಕೆ ಪುತ್ರ ಭರತ್ ಬೊಮ್ಮಾಯಿ ಸ್ಪರ್ಧಿಸಿ ಸೋಲು ಅನುಭವಿಸಿದ್ದಾರೆ.
ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಜಯಭೇರಿ
ಬಳ್ಳಾರಿ: ಸಂಡೂರು ಕ್ಷೇತ್ರದ ವಿಧಾನಸಭಾ ಉಪ ಚುನಾವಣೆಯಲ್ಲಿ (Sandur Bypoll Result 2024) ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಇವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ 9,645 ಮತಗಳಿಂದ ವಿಜಯ ಪತಾಕೆ ಹಾರಿಸಿದ್ದಾರೆ.
ಒಟ್ಟು 19 ಸುತ್ತುಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು 93,606 ಮತ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು (83961) ವಿರುದ್ಧ 9,645 ಮತಗಳ ಅಂತರದಿಂದ ಗೆಲುವು ಪಡೆದಿದ್ಧಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ಅವರು 85,233 ಮತಗಳಿಂದ ಬಿಜೆಪಿ ಅಭ್ಯರ್ಥಿ ಶಿಲ್ಪಾ ರಾಘವೇಂದ್ರ (49,701) ವಿರುದ್ಧ ಗೆಲುವು ಪಡೆದಿದ್ದರು.
ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ಇ. ತುಕಾರಾಂ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಶ್ರೀರಾಮುಲು ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದರು. ಶ್ರೀರಾಮುಲು ವಿರುದ್ಧ 98,992 ಮತಗಳಿಂದ ತುಕಾರಾಂ ಜಯಭೇರಿ ಭಾರಿಸಿದ್ದರು. ಕಾಂಗ್ರೆಸ್ನ ಇ. ತುಕಾರಾಮ್ (E Tukaram) ಅವರು 7,30,845 ಮತಗಳು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲಗೆ 6,31,853 ಮತಗಳು ಬಂದಿದ್ದವು. ಹೀಗಾಗರಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಅವರ ಪತ್ನಿ ಅನ್ನಪೂರ್ಣ ಸ್ಪರ್ಧಿಸಿ ಗೆಲುವು ಪಡೆದಿದ್ದಾರೆ.
ಈ ಸುದ್ದಿಯನ್ನೂ ಓದಿ | Kota Srinivas Poojary: ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಬಿಗ್ ರಿಲೀಫ್; ನೀತಿ ಸಂಹಿತೆ ಉಲ್ಲಂಘನೆ ಕೇಸ್ ರದ್ದು