Tuesday, 3rd December 2024

CM Siddaramaiah: ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲು ಪ್ರಸ್ತಾವ ಇಲ್ಲ: ಸಿಎಂ ಸಿದ್ದರಾಮಯ್ಯ

cm siddaramaiah

ಬೆಂಗಳೂರು: ಅಲ್ಪಸಂಖ್ಯಾತ ಗುತ್ತಿಗೆದಾರರಿಗೆ (Muslim Contractors) ಮೀಸಲಾತಿ (reservation) ನೀಡುವ ವಿಚಾರದಲ್ಲಿ ಹುಟ್ಟಿಕೊಂಡಿರುವ ವಿವಾದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸ್ಪಷ್ಟನೆ ನೀಡಿದ್ದಾರೆ. ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರ ಪ್ರವರ್ಗ 2 ಬಿ ಗೆ ಶೇ.4 ರಷ್ಟು ಮೀಸಲಾತಿಯನ್ನು ನೀಡಲು ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ ಎಂಬ ಸುದ್ದಿ ಹರಡಿತ್ತು. ಮೀಸಲಾತಿ ನೀಡುವಂತೆ ಮುಸ್ಲಿಂ ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಈ ಕುರಿತು ಪ್ರತಿಪಕ್ಷ ಬಿಜೆಪಿ ಹುಯಿಲೆಬ್ಬಿಸಿತ್ತು.

“ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ” ಎಂದು ಸಿಎಂ ಕಚೇರಿ ಸ್ಪಷ್ಟನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (2ನೇ ತಿದ್ದುಪಡಿ) ಕಾಯ್ದೆಗೆ ತಿದ್ದುಪಡಿ ತರಲು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಗೆ ಸಿಎಂ ಕಚೇರಿ ಸೂಚನೆ ನೀಡಿದೆ ಎಂದು ಪ್ರತಿಪಕ್ಷಗಳು ಹೇಳಿದ್ದವು. ಈ ಕುರಿತಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮನವಿ ಮಾಡಿದ್ದು ಹೌದು, ಆದರೆ ಇದಕ್ಕೆ ಒಪ್ಪಿಗೆ ನೀಡಲಾಗಿದೆ ಎಂಬುದು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಗುತ್ತಿಗೆ ಕಾಮಗಾರಿಗಳಲ್ಲಿ ಎಸ್‌ಸಿ ಮತ್ತು ಎಸ್‌ಟಿ ಜನಾಂಗಕ್ಕೆ ಮೀಸಲಾತಿ ನೀಡಿದ ಮಾದರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಬೇಕು ಎಂಬುದು ಬೇಡಿಕೆಯಾಗಿತ್ತು. ಶೇ.4ಷ್ಟು ಮೀಸಲಾತಿ ನೀಡುವ ಕುರಿತಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್‌, ಸಚಿವ ಬಿ.ಝಡ್ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ತಸ್ವೀ‌ರ್ ಸೇ‌ಠ್, ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ಅಬ್ದುಲ್ ಜಬ್ಬಾರ್, ಎನ್.ಎ ಹ್ಯಾರೀಸ್, ರಿಜ್ವಾನ್ ಅರ್ಷದ್, ಆಸೀಫ್ ಸೇರ್, ಖನೀಜಾ ಫಾತಿಮಾ, ಹಾಗೂ ಇಕ್ಬಾಲ್ ಹುಸೇನ್ ಮತ್ತು ಬಿಲ್ಕೀಸ್ ಬಾನು ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

ಇದೇ ವಿಚಾರವಾಗಿ ವಿಧಾನಸೌಧದಲ್ಲಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಮಾತನಾಡಿ, ಸಂವಿಧಾನದ ರಚನಾ ಸಭೆ ಸಂದರ್ಭದಲ್ಲಿ ಮೀಸಲಾತಿ ಯಾರಿಗೆ ಕೊಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ಜಾತಿ ಆಧಾರಿತವಾಗಿ ಮೀಸಲಾತಿ ಕೊಡಬೇಕು ಎಂದಿದೆ. ಆದರೆ ಧರ್ಮದ ಆಧಾರಿತವಾಗಿ ಮೀಸಲಾತಿ ಕೊಡಬೇಕು ಎಂದಿಲ್ಲ. ಕಾಂಗ್ರೆಸ್‌ಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಶರಿಯಾ ಹೇರಿಕೆ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Channapatna By Election: ಕಾಂಗ್ರೆಸ್‌ ಸರ್ಕಾರ ಯಾವ ಗ್ಯಾರಂಟಿಗಳನ್ನೂ ನಿಲ್ಲಿಸುವುದಿಲ್ಲ; ಸಿದ್ದರಾಮಯ್ಯ ಸ್ಪಷ್ಟೋಕ್ತಿ