Thursday, 12th December 2024

CM Siddaramaiah: ʼಒಂದು ರಾಷ್ಟ್ರ, ಒಂದು ಚುನಾವಣೆʼ ಮೋದಿ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿ ಎಂದ ಸಿದ್ದರಾಮಯ್ಯ

CM Siddaramaiah

ಬೆಂಗಳೂರು: ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ʼಒಂದು ರಾಷ್ಟ್ರ, ಒಂದು ಚುನಾವಣೆʼ ಮಸೂದೆ (One Nation One Election Bill) ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಇದರ ಹಿಂದೆ ರಾಜ್ಯಗಳ ಹಕ್ಕುಗಳನ್ನು ಮೊಟಕುಗೊಳಿಸುವ ದುರಾಲೋಚನೆ ಕೂಡಾ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಇಂದು ಪೋಸ್ಟ್‌ ಮಾಡಿರುವ ಅವರು, ಹಲವಾರು ದೋಷಗಳಿಂದ ಕೂಡಿರುವ ಈಗಿನ ಚುನಾವಣಾ ವ್ಯವಸ್ಥೆಯನ್ನು ಸುಧಾರಣೆಗೊಳಪಡಿಸುವ ತುರ್ತು ಅಗತ್ಯ ಇರುವ ಈ ಸಂದರ್ಭದಲ್ಲಿ ಇಂತಹ ಮಸೂದೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ದುರ್ಬಲಗೊಳಿಸಲಿದೆ. ಇಂತಹದ್ದೊಂದು ಮುಖ್ಯವಾದ ಮಸೂದೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಪಡೆಯುವ ಮೊದಲು ವಿರೋಧಪಕ್ಷಗಳು ಮತ್ತು ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಬೇಕಾಗಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಸರ್ವಾಧಿಕಾರಿ ಧೋರಣೆಯಿಂದ ಈ ಮಸೂದೆಯನ್ನು ದೇಶದ ಮೇಲೆ ಹೇರಲು ಹೊರಟಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ | CM Siddaramaiah: ಪಿಡಿಒ ಹುದ್ದೆಗಳ ನೇಮಕ; ತ್ರಿಸದಸ್ಯ ಸಮಿತಿ ವರದಿ ಆಧರಿಸಿ ಕ್ರಮ; ಸಿದ್ದರಾಮಯ್ಯ

ಕೇರಳ ಸರ್ಕಾರ ಈಗಾಗಲೇ ‘’ಒಂದು ರಾಷ್ಟ್ರ, ಒಂದು ಚುನಾವಣೆ’’ ಪ್ರಸ್ತಾವವನ್ನು ವಿರೋಧಿಸಿ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಟ್ಟಿದೆ. ಅಗತ್ಯ ಬಿದ್ದರೆ ನಮ್ಮ ಸರ್ಕಾರ ಕೂಡಾ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಜತೆ ಸಮಾಲೋಚನೆ ನಡೆಸಿ ‘’ಒಂದು ರಾಷ್ಟ್ರ, ಒಂದು ಚುನಾವಣೆ’’ ಮಸೂದೆ ವಿರುದ್ದ ಬಹುಮತದ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.

ಲೋಕಸಭೆ ಇಲ್ಲವೇ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತ ಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಈ ಪ್ರಸ್ತಾವದಲ್ಲಿ ಪರಿಹಾರವೇ ಇಲ್ಲ ಎಂದರು ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರ. ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತ ಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ ಎಂದಿದ್ದಾರೆ.

ಈ ಸುದ್ದಿಯನ್ನೂ ಓದಿ | CM Siddaramaiah: ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಾಗಿಲ್ಲ; ಸಿದ್ದರಾಮಯ್ಯ ಸ್ಪಷ್ಟನೆ

ನರೇಂದ್ರ ಮೋದಿ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ‍್ಳಲು ಗಿಮಿಕ್‌

ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ. ಇದರ ಜತೆಗೆ ಸಂವಿಧಾನದ ಕನಿಷ್ಠ ಐದು ವಿಧಿಗಳಿಗೆ ತಿದ್ದುಪಡಿ ತರಬೇಕಾಗಿದೆ. ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣಾ ಆಯೋಗಕ್ಕೆ ಇಲ್ಲ. ನರೇಂದ್ರ ಮೋದಿ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ‍್ಳಲು ಆಗಾಗ ಇಂತಹ ಗಿಮಿಕ್‌ಗಳನ್ನು ಪ್ರದರ್ಶಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.