Thursday, 12th December 2024

CM Siddaramaiah: ನಬಾರ್ಡ್‌ ನೆರವು ಕಟ್‌; ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

CM Siddaramaiah

ನವದೆಹಲಿ: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ.58ರಷ್ಟು ಕೇಂದ್ರ ಸರ್ಕಾರ (Central Government) ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆಕ್ರೋಶ ವ್ಯಕ್ತಪಡಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ರೈತರಿಗೆ ನೀಡುತ್ತಿದ್ದ ಸಬ್ಸಿಡಿ ಸಾಲ ಕಡಿತಗೊಳಿಸಿದ್ದರಿಂದ ರಾಜ್ಯದಲ್ಲಿ ಮತ್ತು ದೇಶದಲ್ಲಿ ಆಹಾರ ಉತ್ಪಾದನೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು.

ರಾಜ್ಯದ ರೈತರಿಗೆ ಮಾತ್ರ ನಬಾರ್ಡ್ ಸಾಲದ ಪ್ರಮಾಣ ಕಡಿಮೆ ಮಾಡಿಲ್ಲ. ಇಡೀ ದೇಶದಲ್ಲಿ ಕಡಿತಗೊಳಿಸಲಾಗಿದೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಇದರಿಂದ ಇಡೀ ದೇಶದ ರೈತರನ್ನು ಸಂಕಷ್ಟಕ್ಕೆ ದೂಡಿದಂತಾಗಿದೆ. ಇಡೀ ದೇಶದ ಕೃಷಿ ಉತ್ಪಾದನೆ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | CM Siddaramaiah: ಉಪಚುನಾವಣೆಯಲ್ಲಿ ಗೆಲುವು; ಸಿಎಂಗೆ ರಾಹುಲ್‌, ಪ್ರಿಯಾಂಕ ಅಭಿನಂದನೆ

ನಬಾರ್ಡ್ 4.5% ಬಡ್ಡಿಗೆ ರೈತರ ಸಾಲದ ಹಣ ನೀಡುತ್ತಿತ್ತು. ನಾವು ರೈತರಿಗೆ ಬಡ್ಡಿ ರಹಿತವಾಗಿ ಸಾಲ ನೀಡಿ ಈ 4.5% ಬಡ್ಡಿಯನ್ನು ಸರ್ಕಾರವೇ ಭರಿಸುತ್ತಿತ್ತು. ಈಗ ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕ್‌ಗಳಿಂದ ಸಾಲ ಪಡೆಯುವಂತೆ ಕೇಂದ್ರ ಸರ್ಕಾರ ಹೇಳುತ್ತಿದೆ. ಶೇ.10 ಬಡ್ಡಿ ದರದಲ್ಲಿ ವಾಣಿಜ್ಯ ಬ್ಯಾಂಕ್‌ಗಳು ಸಾಲ ನೀಡುತ್ತವೆ. ಇದರಿಂದ ಬ್ಯಾಂಕ್‌ಗಳಿಗೆ ಲಾಭ ಆಗುತ್ತದೆಯೇ ಹೊರತು ರೈತರಿಗೆ ಅನುಕೂಲ ಇಲ್ಲ ಎಂದು ತಿಳಿಸಿದರು.‌

15ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ಅನ್ಯಾಯ ಆಯಿತು. ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೋಟಿ ಘೋಷಿಸಿ ಒಂದು ಪೈಸೆಯನ್ನೂ ಕೊಡಲಿಲ್ಲ. ಫೆರಿಫೆರಲ್ ರಿಂಗ್ ರಸ್ತೆಗೂ ಕೊಡಲಿಲ್ಲ. ಇವೆಲ್ಲದರಿಂದ 11000 ಕೋಟಿ ರೂ. ರಾಜ್ಯಕ್ಕೆ ನಷ್ಟವಾಗಿದ್ದನ್ನೂ ಪ್ರಧಾನಮಂತ್ರಿಯವರಿಗೆ ನೆನಪಿಸಿದ್ದೇವೆ. ಹೀಗಾಗಿ ಈ ಬಾರಿ ಮತ್ತೆ ನಬಾರ್ಡ್ ಮೂಲಕ ಆಗಿರುವ ಅನ್ಯಾಯವನ್ನು ಸರಿಪಡಿಸಲು ಮನವಿ ಮಾಡಿದ್ದೇವೆ ಎಂದು ಸಿಎಂ ಹೇಳಿದರು.

ರಾಜ್ಯಕ್ಕೆ ನಿರಂತರ ಅನ್ಯಾಯ

ರಾಜ್ಯಕ್ಕೆ ನಿರಂತರ ಅನ್ಯಾಯ ಆಗುತ್ತಿದೆ. ಮಹದಾಯಿ, ಮೇಕೆದಾಟುಗೆ ಅನುಮತಿ ನೀಡುತ್ತಿಲ್ಲ. ಇಷ್ಟಾದರೂ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ. ಮಣ್ಣಿನ ಮಗ ಅಂದುಕೊಂಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರೂ ರಾಜ್ಯಕ್ಕೆ ಆಗುತ್ತಲೇ ಇರುವ ಅನ್ಯಾಯಗಳ ವಿರುದ್ಧ ಬಾಯಿ ಬಿಡುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು.

ಈ ಸುದ್ದಿಯನ್ನೂ ಓದಿ | Bengaluru Habba 2024: ನಾಳೆಯಿಂದ ಬೆಂಗಳೂರು ಹಬ್ಬ, ಸಿಎಂ ಸಿದ್ದರಾಮಯ್ಯ ಚಾಲನೆ

ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.