Wednesday, 27th November 2024

CM Siddaramaiah: ಪ್ರತಿ ವರ್ಷ 13.5 ಲಕ್ಷ ಜನ ತಂಬಾಕು ಸೇವನೆಯಿಂದ ಸಾವು, ಆತಂಕಕಾರಿ ವಿಷಯ: ಸಿದ್ದರಾಮಯ್ಯ

CM Siddaramaiah

ಬೆಂಗಳೂರು: ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ರಾಜ್ಯ ಎನ್‌ಎಸ್‌ಎಸ್‌ (NSS) ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಂದು ವಿಧಾನಸೌಧದ ಬ್ಯಾಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ತಂಬಾಕು (Tobacco) ಮುಕ್ತ ಯುವ ಅಭಿಯಾನ 2.0 ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಬಳಿಕ ಮಾತನಾಡಿದರು.

ತಂಬಾಕು ಸೇವನೆ ಮಾಡದಂತೆ ಯುವಜನರಿಂದ ಪ್ರತಿಜ್ಞೆ

ಯುವಜನತೆಯಲ್ಲಿ ತಂಬಾಕು ಸೇವನೆಯಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ತಂಬಾಕು ಬಳಕೆಯನ್ನು ಮಾಡುವುದಿಲ್ಲ, ಮಾಡಲೂ ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಇಂದು ಪ್ರತಿಜ್ಞೆ ಕೈಗೊಂಡಿದ್ದಾರೆ. ಈ ಪ್ರತಿಜ್ಞೆಯನ್ನು ಅಕ್ಷರಶಃ ಪಾಲಿಸುವ ಕರ್ತವ್ಯವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Job News: KPTCLನಿಂದ 2,975 ಹುದ್ದೆಗಳಿಗೆ ಅರ್ಜಿ ಆಹ್ವಾನ, ನ.20 ಕೊನೆಯ ದಿನ

ತಂಬಾಕು ಸೇವಿಸುವ ಶೇ.50 ರಷ್ಟು ಜನರಿಗೆ ಕ್ಯಾನ್ಸರ್

ಡಬ್ಲ್ಯೂಎಚ್‌ಒ (WHO) ಸಂಸ್ಥೆಯವರ ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವಿಗೆ ಈಡಾಗುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ಯುವಜನತೆ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಬದಲು ಈ ದುಶ್ಚಟಗಳಿಗೆ ಬಲಿಯಾಗುತ್ತಿರುವುದರಿಂದ ಈ ಪ್ರಮಾಣದ ಸಾವು ಸಂಭವಿಸುತ್ತಿದೆ. ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50 ರಷ್ಟು ಜನ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಯುವಜನತೆ ತಂಬಾಕು ಸೇವನೆ ಹಾಗೂ ಮಾದಕವಸ್ತುಗಳ ವ್ಯಸನಕ್ಕೆ ಒಳಗಾಗಬಾರದು ಎಂದು ಸಿಎಂ ತಿಳಿಸಿದರು.

ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಿದ್ದು, ಇದನ್ನು ನಿಗ್ರಹಿಸಲು ಸರ್ಕಾರ ಅನೇಕ ಕಾನೂನುಗಳನ್ನು ರಚಿಸಿದೆ. ಯುವಕ-ಯುವತಿಯರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಲ್ಲಿ, ಕೂಡಲೇ ದುಶ್ಚಟಗಳನ್ನು ನಿಲ್ಲಿಸಬೇಕು ಎಂದು ಅವರು ಕರೆ ನೀಡಿದರು.

ಈ ಸುದ್ದಿಯನ್ನೂ ಓದಿ | Bengaluru Rain News: ಮುಂಜಾನೆಯಿಂದಲೇ ಹಿಡಿದ ಮಳೆ, ಮಲೆನಾಡಿನಂತಾದ ಬೆಂಗಳೂರು

ರಾಜ್ಯದ ಎಲ್ಲ ಯುವಸಮುದಾಯಗಳು ದುಶ್ಚಟಗಳಿಂದ ದೂರವಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.