Wednesday, 11th December 2024

CM Siddaramaiah: ಎತ್ತಿನಹೊಳೆ ಮೊದಲ ಹಂತದ ಯೋಜನೆಗೆ ಸಿಎಂ ಚಾಲನೆ; 10 ವರ್ಷದ ನಂತರ ನೀರು ಬಂತು!

cm siddaramaiah yethinahole project

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ (Yettinahole Project Lunch) ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್‌ನಲ್ಲಿ ಚಾಲನೆ ನೀಡಿದರು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆಯ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

ಪಶ್ಚಿಮ ಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆ ಹೊಳೆ, ಹೊಂಗಡಹಳ್ಳ, ಕೇರಿಹೊಳೆ ಹಳ್ಳಗಳಿಗೆ ಅಡ್ಡಲಾಗಿ ಎಂಟು ವಿಯರ್‌ಗಳನ್ನು ಕಟ್ಟಿ ಮಳೆಗಾಲದಲ್ಲಿ ಪ್ರವಾಹದಿಂದ ಸಿಗುವ ನೀರಿನಲ್ಲಿ 24.11 ಟಿಎಂಸಿ ಅಡಿ ನೀರನ್ನು ಏಳು ಬರಪೀಡಿತ ಜಿಲ್ಲೆಗಳಿಗೆ ಹರಿಸುವ ಯೋಜನೆ ಇದಾಗಿದೆ. ಪ್ರತಿ ವರ್ಷ ಜೂನ್ 15ರಿಂದ ಅಕ್ಟೋಬರ್ 15ರವರೆಗೆ ನಾಲ್ಕು ತಿಂಗಳು ಪೂರ್ವಾಭಿಮುಖವಾಗಿ ನೀರು ಹರಿಸಿ ಏಳು ಜಿಲ್ಲೆಗಳ 29 ತಾಲ್ಲೂಕಿನ 38 ಪಟ್ಟಣ ಪ್ರದೇಶ ಹಾಗೂ 6,657 ಗ್ರಾಮಗಳ 75.59 ಲಕ್ಷ ಜನರಿಗೆ ಮತ್ತು ಜಾನುವಾರುಗಳಿಗೆ ನೀರು ಒದಗಿಸುವುದು ಯೋಜನೆಯ ಉದ್ದೇಶ.

2011ರಲ್ಲಿ ಯೋಜನೆ ರೂಪಿಸಲಾಗಿತ್ತು. ಅದಕ್ಕೆ ಕರಾವಳಿಯಲ್ಲಿ ಬಿಜೆಪಿ, ಕಾಂಗ್ರೆಸ್ ಸಹಿತ ವಿವಿಧ ಪಕ್ಷಗಳು, ಪರಿಸರ ಪ್ರೇಮಿಗಳು, ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಅದೇ ಸಮಯದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಸಹಿತ ನೀರು ಹರಿಯಲಿರುವ ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಬೆಂಬಲಿಸಿ ಹೋರಾಟಗಳು ನಡೆದಿದ್ದವು. ವಿರೋಧದ ನಡುವೆಯೇ 2014ರಲ್ಲಿ ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದ್ದರು. ದಶಕದ ಬಳಿಕ ಯೋಜನೆಯ ಮೊದಲ ಹಂತಕ್ಕೆ ಚಾಲನೆ ದೊರೆಯುತ್ತಿದೆ.

ಒಟ್ಟು ಸುಮಾರು 8000 ಕೋಟಿ ರೂ. ಅಂದಾಜು ವೆಚ್ಚದಲ್ಲಿ 2014ರಲ್ಲಿ ಈ ಯೋಜನೆ ಆರಂಭಿಸಲಾಗಿತ್ತು. ಹತ್ತು ವರ್ಷಗಳ ನಂತರ ಯೋಜನೆಯಲ್ಲಿ ನೀರೆತ್ತುವ ಎಂಟು ವಿಯರ್‌ಗಳ ಪೈಕಿ ಏಳು ವೀಯರ್‌ಗಳಲ್ಲಿ ನೀರೆತ್ತುವ ಕಾರ್ಯ ಆರಂಭವಾಗಲಿದೆ. ಬಾಕಿ ವೀಯರ್ ಕೆಲಸಗಳು ಶೀಘ್ರವೇ ಪೂರ್ಣಗೊಳ್ಳಲಿವೆ. ಸಕಲೇಶಪುರದ ಈ ಭಾಗದಿಂದ 260 ಕಿಲೋ ಮೀಟರ್ ದೂರದಲ್ಲಿರುವ ದೊಡ್ಡಬಳ್ಳಾಪುರದವರೆಗೆ ಈ ಯೋಜನೆಯ ನೀರು ತಲುಪಲಿದೆ.

ಈ ಸುದ್ದಿ ಓದಿ: DCM D K Shivakumar Column: ಎತ್ತಿನಹೊಳೆ: ಬತ್ತಿದ ಕನಸಿಗೆ ಜೀವಜಲದ ಧಾರೆ