ಬೆಂಗಳೂರು: ಬೆಂಗಳೂರು ನಗರದ ಜನತೆಯ ಅನುಕೂಲಕ್ಕಾಗಿ 100 ನೂತನ ಬಿಎಂಟಿಸಿ (BMTC Bus) ಬಸ್‌ಗಳನ್ನು ಇಂದು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ ಬಸ್‌ಗಳು ಬಿಎಂಟಿಸಿ ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ ಬಿಎಂಟಿಸಿ ಬಸ್‌ಗಳನ್ನು ಲೋಕಾರ್ಪಣೆ ಮಾಡಿ, ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ ಬಸ್‌ಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸುವ ಜತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಿದ್ದಲ್ಲದೆ ನೂತನವಾಗಿ ಇನ್ನಷ್ಟು ಕ್ಯಾಂಟೀನ್‌ಗಳನ್ನು ಆರಂಭಿಸುತ್ತಿದ್ದೇವೆ ಎಂದು ಹೇಳಿದರು.
ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದರು.
ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿವೆ. ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ ಎಂದು ಸಿಎಂ ತಿಳಿಸಿದರು.
ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ ಎಂದು ತಿಳಿಸಿದ ಸಿಎಂ ಅವರು, ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ ಎಂದರು.
ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4-5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್‌ಗಳನ್ನು ಖರೀದಿಸಿ ಸವಲತ್ತು ಒದಗಿಸಿದ್ದೇವೆ ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ | PSI Exam: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ!
ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಸತಿ ಸಚಿವ ಜಮೀರ್ ಅಹಮದ್, ಇಂಧನ ಸಚಿನ ಕೆ.ಜೆ. ಜಾರ್ಜ್, ಕೆಕೆಆರ್ಡಿಬಿ ಅಧ್ಯಕ್ಷ ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.