Saturday, 14th December 2024

CM Siddaramaiah: ಸವದತ್ತಿಗೆ ಬರುವ ಭಕ್ತರ ಅನುಕೂಲಕ್ಕೆ ಗುಣಮಟ್ಟದ ಮೂಲಸೌಕರ್ಯ: ಸಿಎಂ ಸಿದ್ದರಾಮಯ್ಯ

CM Siddaramaiah

ಸವದತ್ತಿ (ಬೆಳಗಾವಿ): ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವಾಸೋದ್ಯಮ ಮಂಡಳಿ ಹಾಗೂ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆ ನಡೆಸಲಾಗಿದೆ. ಈ ಕ್ಷೇತ್ರಕ್ಕೆ ಸುಮಾರು ಎರಡು ಕೋಟಿ ಭಕ್ತರು ಭೇಟಿ ನೀಡುತ್ತಿದ್ದು, ಪ್ರವಾಸಿಗರ ಅನುಕೂಲಕ್ಕಾಗಿ ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ತಂಗುದಾಣದ ವ್ಯವಸ್ಥೆ ಮಾಡಬೇಕಾಗಿದೆ.

ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಈ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ. ಕ್ಷೇತ್ರದಲ್ಲಿ 1087 ಎಕರೆ ಪ್ರದೇಶ ಲಭ್ಯವಿದ್ದು, ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸುವ ಉದ್ದೇಶಕ್ಕೆ ಈ ಪ್ರದೇಶವನ್ನು ಬಳಸಿಕೊಳ್ಳಲಾಗುವುದು. ಮನುಷ್ಯರಿಗೆ ದಾಸೋಹ ವ್ಯವಸ್ಥೆಯಿರುವಂತೆ ರಾಸುಗಳಿಗೂ ಮೇವು ಒದಗಿಸುವ ವ್ಯವಸ್ಥೆಯನ್ನು ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದರು.

ನ್ಯಾಯಯುತ ತೆರಿಗೆ ಪಾಲು ಬಂದರೆ ಅಭಿವೃದ್ಧಿ ಸಾಧ್ಯ

ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾಗಿದ್ದ ತೆರಿಗೆ ಪಾಲು ನೀಡದೇ, ಕನ್ನಡಿಗರಿಗೆ ದ್ರೋಹ ಎಸಗಲಾಗಿದೆ. ಒಕ್ಕೂಟ ವ್ಯವಸ್ಥೆ ನಂಬಿರುವ ನಮಗೆ ಅನ್ಯಾಯವಾಗಬಾರದು. ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲನ್ನು ಕೇಂದ್ರ ನೀಡಿದರೆ, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ. ತೆರಿಗೆ ವಿಚಾರದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತದ ಬಿಜೆಪಿಯವರು , ಕೇವಲ ಕೋಮುವಾದಿ ಕ್ಷುಲ್ಲಕ ವಿಚಾರಗಳಿಗೆ ಪ್ರತಿಭಟನೆ ಮಾಡುತ್ತಾರೆ ಎಂದರು.

ಈ ಸುದ್ದಿಯನ್ನೂ ಓದಿ | Gruha Lakshmi Scheme: ಗೃಹ ಲಕ್ಷ್ಮಿ ಹಣದಿಂದ ಗ್ರಂಥಾಲಯ ನಿರ್ಮಿಸಿದ ಮಹಿಳೆ

ಬೆಳಗಾವಿ ಅಧಿವೇಶನದ ವೇಳೆಗೆ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ವಿಜಯೇಂದ್ರ ಅವರ ತಂದೆ ಯಡಿಯೂರಪ್ಪನವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನಮ್ಮ ಮೇಲೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆ ಇದೆ? ಕಾಂಗ್ರೆಸ್ ಸರ್ಕಾರಕ್ಕೆ ಜನ ನೀಡುತ್ತಿರುವ ಬೆಂಬಲವನ್ನು ಸಹಿಸಲಾಗದೇ ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ವ್ಯವಸ್ಥೆ

ತಾಯಿ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ. ನಿಮ್ಮ ಸಹಕಾರ ಅಗತ್ಯ. ಕ್ಷೇತ್ರದಲ್ಲಿ ಅನಧಿಕೃತವಾಗಿ ಮಳಿಗೆಗಳನ್ನು ಹಾಕಬೇಡಿ. ಅನಧಿಕೃತವಾಗಿ ಇರುವವರಿಗೆ ಬೇರೆ ವ್ಯವಸ್ಥೆ ಮಾಡೋಣ. ಆದರೆ ಅಕ್ರಮವಾಗಿ ಯಾರೂ ಮಳಿಗೆ ಹಾಕದೆ ಸಹಕರಿಸಬೇಕು. ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ (Renuka Yellamma Temple) ವ್ಯವಸ್ಥೆ ರೂಪಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ದೇವರು-ಧರ್ಮದ ಹೆಸರಲ್ಲಿ ದೇಶ-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ. ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಪ್ರಯಾಣಿಸಿದ್ದಾರೆ. ಇವರಲ್ಲಿ ಲಕ್ಷಾಂತರ ಮಂದಿ ತಾಯಿ ರೇಣುಕಾ ಯಲ್ಲಮ್ಮನ ದರ್ಶನ ಕೂಡ ಪಡೆದಿದ್ದಾರೆ. ದೇವರು-ಧರ್ಮ ತಮಗೆ ಮಾತ್ರ ಸೇರಿದ್ದು ಎಂದು ಬಿಜೆಪಿಯವರು ಭಯಾನಕ ಮಾತನಾಡ್ತಾರಲ್ಲಾ? ಆದರೆ ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂತಹ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ತಾಯಿ ಯಲ್ಲಮ್ಮ ಶಕ್ತಿ ದೇವತೆ. ಯಾವ ದೇವರೂ ಕೂಡ ಮನುಷ್ಯರನ್ನು ಧರ್ಮದ ಕಾರಣಕ್ಕೆ ದ್ವೇಷಿಸಿ ಎಂದು ಹೇಳುವುದಿಲ್ಲ. ದೇವರ ಹೆಸರಲ್ಲಿ ದ್ವೇಷ ಹೇಳುವುದು ಬಿಜೆಪಿ ಮಾತ್ರ. ತಾಯಿ ರೇಣುಕಾ ಯಲ್ಲಮ್ಮ ದೇವರು, ಧರ್ಮದ ಹೆಸರಲ್ಲಿ ಮನುಷ್ಯರನ್ನು ದ್ವೇಷಿಸಿ ಎಂದು ಎಲ್ಲೂ ಹೇಳಿಲ್ಲ ಎಂದರು.

ಗೃಹಲಕ್ಷ್ಮಿ ಯೋಜನೆ ಜಾರಿಯಾದರೆ ಅತ್ತೆ ಸೊಸೆ ಜಗಳ ಆಗ್ತದೆ ಎಂದು ಬಿಜೆಪಿಯವರು ಬೊಬ್ಬೆ ಹೊಡೆದರು. ಆದರೆ ಗೃಹಲಕ್ಷ್ಮಿ ಹಣವನ್ನು ಕೂಡಿಸಿಟ್ಟು ಅತ್ತೆಯರು ಸೊಸೆಯರಿಗೆ ಬಳೆ ಅಂಗಡಿ ಹಾಕಿಕೊಟ್ಟಿದ್ದಾರೆ, ಟೈಲರಿಂಗ್ ಮಷಿನ್ ಕೊಡಿಸಿದ್ದಾರೆ. ಇಂತಹವು ನೂರಾರು ಉದಾಹರಣೆಗಳಿವೆ ಎಂದರು.

ಈ ಸುದ್ದಿಯನ್ನೂ ಓದಿ | DK Shivakumar: ಬಿಜೆಪಿ ಕಾಲದಲ್ಲೂ ಎಷ್ಟೋ ಕೇಸ್ ವಾಪಸ್ ಪಡೆದಿದ್ರು: ಡಿಕೆಶಿ

ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ವಿಶ್ವಾಸ್ ವೈದ್ಯ ಅವರು ವಹಿಸಿದ್ದರು.