ಬೆಂಗಳೂರು: ನೆರೆಯಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಗೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತೆರಳಿದರು.
ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರವಾಹ ಪೀಡಿತ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬುಧವಾರ ವೈಮಾನಿಕ ಸಮೀಕ್ಷೆ ಕೈಗೊಳ್ಳುತ್ತಿದ್ದೇನೆ. ಗೃಹ ಸಚಿವ ಬಸವ ರಾಜ್ ಬೊಮ್ಮಾಯಿ ಹಾಗೂ ಅಧಿಕಾರಿಗಳು ಸಮೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಸಂತ್ರಸ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಸೌಕರ್ಯಗಳನ್ನು ಒದಗಿಸಲಾಗುವುದು. ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡುತ್ತೇವೆ. ವೈಮಾನಿಕ ಸಮೀಕ್ಷೆಯ ಬಳಿಕ ಸಂತ್ರಸ್ತರಿಗೆ ಇನ್ನೂ ಹೆಚ್ಚಿನ ನೆರವು ಒದಗಿಸಲು ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಹೇಳಿಕೆ ಕೊಟ್ಟಿದ್ದಾರೆ.
ಬಳ್ಳಾರಿಯ ತೋರಣಗಲ್ಲು ಜಿಂದಾಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ತೆರಳಿದ್ದಾರೆ. ಅಲ್ಲಿಂದ ಭಾರತೀಯ ವಾಯು ಸೇನೆಯ ಹೆಲಿಕ್ಯಾಪ್ಟರ್‌ನಲ್ಲಿ ಕಲಬುರಗಿ ಜಿಲ್ಲೆಗೆ ತೆರಳಿ ವೈಮಾನಿಕ ಸಮೀಕ್ಷೆ ಮಾಡಲಿದ್ದಾರೆ. ಕಲಬುರಗಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಪ್ರವಾಹ ಸ್ಥಿತಿಯ ಬಗ್ಗೆ ಚರ್ಚೆ ನಡೆಸುವ ಸಿಎಂ ಯಡಿಯೂರಪ್ಪ ಅವರು ಅಲ್ಲಿಂದ ವೈಮಾನಿಕ ಸಮೀಕ್ಷೆ ಯ ಮೂಲಕ ಆಲಮಟ್ಟಿಗೆ ತೆರಳಲಿದ್ದಾರೆ.