ಬೆಂಗಳೂರು: ಫೆಂಗಲ್ ಚಂಡಮಾರುತದ (Cyclone Fengal) ಆರ್ಭಟಕ್ಕೆ ಬೆಂಗಳೂರು (Bengaluru Rains) ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೋರಾಗಿ ಮಳೆ (karnataka rain news) ಸುರಿಯುತ್ತಿದೆ. ಹಲವೆಡೆ ಮೋಡ ಕವಿದ ವಾತಾವರಣವಿದೆ. ಮುನ್ನೆಚ್ಚರಿಕೆಯಾಗಿ ರಾಜ್ಯದ 8 ಜಿಲ್ಲೆಗಳಲ್ಲಿ ಶಾಲೆ- ಕಾಲೇಜುಗಳಿಗೆ (School holiday) ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಫೆಂಗಲ್ ಚಂಡಮಾರುತ ಉತ್ತರ ತಮಿಳುನಾಡು ಮತ್ತು ಪುದುಚೇರಿಯ ಕರಾವಳಿ ಭಾಗದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಹಾವಳಿ ಎಬ್ಬಿಸುತ್ತಿದೆ. ನವೆಂಬರ್ 30ರಿಂದಲೇ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿರುವ ಚಂಡಮಾರುತ ರಾಜ್ಯದಲ್ಲಿ ಮಳೆಗಾಲದಂಥ ವಾತಾವರಣ ಸೃಷ್ಟಿಸಿದೆ. ಬೆಂಗಳೂರು, ಕೋಲಾರ ಸೇರಿ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿರುವ ಕಾರಣ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಲಾಗಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದ 8 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ. ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಚಿಕ್ಕಮಗಳೂರು: ಮಳೆಯ ಅಬ್ಬರದ ಜೊತೆಗೆ ತೀವ್ರ ಚಳಿ ಇರುವುದರಿಂದ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರಿಗೆ ಎರಡು ದಿನಗಳ ಕಾಲ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 3,4 ರಂದು ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದಾರೆ.
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಪಿಯುಸಿ ವರೆಗಿನ ಕಾಲೇಜು ವಿದ್ಯಾರ್ಥಿಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ತಿಳಿಸಿದ್ದಾರೆ. ಡಿಗ್ರಿ ಹಾಗೂ ಪಿಜಿ ವಿದ್ಯಾರ್ಥಿಗಳಿಗೆ ತರಗತಿಗಳು ಎಂದಿನಂತೆ ಇರುತ್ತವೆ.
ಕೊಡಗು: ಮಂಗಳವಾರದಂದು ಶಾಲಾ,ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಮಂಗಳವಾರ ರಜೆ ನೀಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಪ್ರಭಾರ ಜಿಲ್ಲಾಧಿಕಾರಿ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ.
ಮೈಸೂರು: ಮೈಸೂರಿನಲ್ಲಿ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( 2nd ಪಿಯುಸಿವರೆಗೆ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರ: ಫೆಂಗಲ್ ಚಂಡಮಾರುತದ ಪರಿಣಾಮ ಮಳೆ ಮುಂದುವರೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಡಿಸೆಂಬರ್ 3 ರ ಮಂಗಳವಾರ ರಜೆ ಘೋಷಿಸಲಾಗಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ. ಪರೀಕ್ಷೆ ನಡೆಯುತ್ತಿರುವ ಪದವಿ ಕಾಲೇಜುಗಳಿಗೆ ಹೊರತುಪಡಿಸಿ ರಜೆ ಘೋಷಣೆ ಮಾಡಲಾಗಿದೆ.
ಕೋಲಾರ: ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೂ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಆದೇಶ ಹೊರಡಿಸಿದ್ದಾರೆ.