Saturday, 2nd November 2024

DA Hike: ದೀಪಾವಳಿ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌! ತುಟ್ಟಿ ಭತ್ಯೆ ಹೆಚ್ಚಳ ಸಾಧ್ಯತೆ

DA hike

ಬೆಂಗಳೂರು: ದೀಪಾವಳಿ ಹಬ್ಬದ ಸಂ‍ಭ್ರಮದಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಗುಡ್‌ನ್ಯೂಸ್‌ ಸಿಗುವ ನಿರೀಕ್ಷೆ ಇದ್ದು, ತುಟ್ಟಿ ಭತ್ಯೆ(DA Hike)ಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಇನ್ನು ಈ ಬಗ್ಗೆ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರವು ಶೀಘ್ರವೇ ಡಿಎ ಹೆಚ್ಚಳ ಮಾಡುವ ಸಾಧ್ಯತೆಯಿದೆ. ಈ ಕುರಿತು ತಿಳಿಸಿದ್ದಾರೆ.

ತುಟ್ಟಿ ಭತ್ಯೆ ಆದೇಶದ ಕಡತ ಸರ್ಕಾರದಲ್ಲಿ ಅನುಮೋದನೆಗೆ ಬಾಕಿಯಿದ್ದು, ಸೋಮವಾರ ಅಥವಾ ಮಂಗಳವಾರ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಸರ್ಕಾರ ಎಷ್ಟು ಡಿಎ ಹೆಚ್ಚಳ ಮಾಡಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಪೂರ್ವದಲ್ಲಿಯೇ ತುಟ್ಟಿಭತ್ಯೆ ಹಾಗೂ ತುಟ್ಟಿ ಪರಿಹಾರವನ್ನು ಘೋಷಿಸಲಾಗಿತ್ತು. ಇದರ ಬೆನ್ನಲ್ಲೆ ರಾಜ್ಯ ಸರ್ಕಾರಗಳು ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್ ನೀಡಿವೆ. ಕೋಟ್ಯಾಂತರ ನೌಕರರು, ಪಿಂಚಣಿದಾರಿಗೆ ಡಿಎ ಜೊತೆಗೆ ದೀಪಾವಳಿ ಬೋನಸ್‌ ಸಹ ಘೋಷಣೆ ಆಗಿದೆ. ದೀಪಾವಳಿ ಹಬ್ಬಕ್ಕೆ ಸರ್ಕಾರಿ ನೌಕರರ ಖಷಿ ಡಬಲ್ ಆಗಿದೆ.

ರಾಜ್ಯ ಸರ್ಕಾರಿ ನೌಕರರಿಗೆ 2024ರ ಜುಲೈ 1ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಿ.ಎಸ್‌.ಷಡಾಕ್ಷರಿ ಅವರು, ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ರಾಜ್ಯ ಸರ್ಕಾರವು ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಂಪ್ರದಾಯವಾಗಿದೆ.

ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ 2024ರ ಜುಲೈ 1ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಆದ್ದರಿಂದ, ಕೇಂದ್ರ ಸರ್ಕಾರದ ಆದೇಶದಂತೆ ರಾಜ್ಯದ ಸರ್ಕಾರಿ ನೌಕರರಿಗೆ ಜುಲೈ 1 ರಿಂದ ಅನ್ವಯವಾಗುವಂತೆ ಶೇ. 3ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಲು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಕೋರಿದ್ದಾರೆ.

ಕೆಲವು ದಿನಗಳ ಹಿಂದೆ ಕೇಂದ್ರ ಸರಕಾರ ತುಟ್ಟಿ ಭತ್ಯೆ ಶೇ. 3ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿತ್ತು. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಏರಿಕೆಗೆ ಅಸ್ತು ಎಂದಿತ್ತು. ಇದರೊಂದಿಗೆ ಕೇಂದ್ರ ಸರಕಾರಿ ನೌಕರರ ಒಟ್ಟಾರೆ ತುಟ್ಟಿ ಭತ್ಯೆ ಹಾಲಿ ಶೇ. 50ರಿಂದ ಶೇ. 53ಕ್ಕೆ ಏರಿದೆ. 10 ಲಕ್ಷಕ್ಕೂ ಹೆಚ್ಚು ಫಲಾನುಭವಿ ನೌಕರರು ಇದರ ಪ್ರಯೋಜನ ಪಡೆಯಲಿದ್ದಾರೆ.

ಈ ಸುದ್ದಿಯನ್ನೂ ಓದಿ: DA Hike: ದೀಪಾವಳಿ ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ತುಟ್ಟಿ ಭತ್ಯೆ 3% ಹೆಚ್ಚಳ