Friday, 15th November 2024

DK Shivakumar: ‘ಶಕ್ತಿ ಯೋಜನೆ’ ಅಡಿ ಗಂಡು ಮಕ್ಕಳಿಗೂ ಉಚಿತ ಪ್ರಯಾಣ: ಡಿಸಿಎಂ ಡಿಕೆ ಶಿವಕುಮಾರ್

Dk Shivakumar

ಬೆಂಗಳೂರು : ಈಗಾಗಲೇ ಕಾಂಗ್ರೆಸ್ (Congress) ಸರ್ಕಾರ ಶಕ್ತಿ ಯೋಜನೆಯ (Shakti scheme) ಅಡಿ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಿದೆ. ಇದೀಗ ಶಕ್ತಿ ಯೋಜನೆಯಡಿ ವಯೋಮಿತಿಗೊಳಪಡಿಸಿ ಗಂಡು ಮಕ್ಕಳಿಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದೆ ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DCM DK Shivakumar) ಭರವಸೆ ನೀಡಿದ್ದಾರೆ.

ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ಬೆಂಗಳೂರು ನಗರ ವ್ಯಾಪ್ತಿಯ ಸರ್ಕಾರಿ ಶಾಲಾ ಮಕ್ಕಳೊಂದಿಗಿನ ಸಂವಾದದಲ್ಲಿ ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಉಪಮುಖ್ಯಮಂತ್ರಿಗಳು ಈ ಭರವಸೆ ನೀಡಿದರು.

ನೀಲಸಂದ್ರದ ಬಿಬಿಎಂಪಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಚರಣ್, ‘ನಿಮ್ಮ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೀರಿ. ಅದರಲ್ಲಿ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರು ಉಚಿತ ಸಂಚಾರಕ್ಕಾಗಿ ಶಕ್ತಿ ಯೋಜನೆ ಜಾರಿಗೆ ತಂದಿದ್ದೀರಿ. ಇದರಿಂದ ನಮ್ಮ ಅಮ್ಮ, ಅಕ್ಕ, ತಂಗಿಯರು, ಸ್ನೇಹಿತೆ ಯರಿಗೆ ಅನುಕೂಲ ಆಗುತ್ತಿದೆ. ಗಂಡು ಮಕ್ಕಳಿಗಾಗಿ ಯಾವುದೇ ಯೋಜನೆ ಇಲ್ಲವೇ? ಎಂದು ಕೇಳಿದರು.

ಇದಕ್ಕೆ ಉತ್ತರಿಸಿದ ಡಿ.ಕೆ.ಶಿವಕುಮಾರ್ ಅವರು, ನಿಮ್ಮ ತಾಯಿಗೆ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ಅನ್ನಭಾಗ್ಯದಡಿ 10 ಕೇಜಿ ಅಕ್ಕಿ, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್, ಎಲ್ಲ ಹೆಣ್ಣು ಮಕ್ಕಳಿಗೂ ಬಸ್‌ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗುತ್ತಿದೆ. ಈಗ ನೀನು ಕೇಳಿರುವ ಪ್ರಶ್ನೆಗೆ, ಶಕ್ತಿ ಯೋಜನೆಯಡಿ ಒಂದು ವಯೋಮಾನದ ವರೆಗಿನ ಗಂಡು ಮಕ್ಕಳಿಗೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಯೋಚಿಸಿ ಮುಂದೆ ಕ್ರಮ ವಹಿಸಲಾಗುವುದು ಎಂದರು.

ಇದನ್ನೂ ಓದಿ: CM Siddaramaiah: ಕೋವಿಡ್‌ ಹಗರಣ ತನಿಖೆಗೆ ಎಸ್‌ಐಟಿ, ಸಂಪುಟ ಸಬ್‌ ಕಮಿಟಿ: ಸಂಪುಟ ಸಭೆ ನಿರ್ಣಯ