ಬೆಂಗಳೂರು: ಅಮೆರಿಕಾದಲ್ಲಿ (US President Election 2024) ಭರದಿಂದ ಸಾಗುತ್ತಿರುವ ಅಧ್ಯಕ್ಷ ಚುನಾವಣೆಗೆ ಡೆಮಾಕ್ರಾಟ್ ಪಕ್ಷದ ಅಭ್ಯರ್ಥಿಯಾಗಿರುವ ಕಮಲಾ ಹ್ಯಾರಿಸ್ (Kamala Harris) ಅವರ ಪಕ್ಷದ ವಿಶೇಷ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivkumar) ವಿಶೇಷ ಆಹ್ವಾನಿತರಾಗಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಡಿಕೆ ಶಿವಕುಮಾರ್ ಅವರಿಗೆ ಅಮೆರಿಕದ ಹಾಲಿ ಉಪಾಧ್ಯಕ್ಷೆ, ಪ್ರಸ್ತುತ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು ವಿಶೇಷ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಅವರು ತಮ್ಮ ಕುಟುಂಬ ಸಮೇತ ಇಂದು ರಾತ್ರಿ ಅಮೆರಿಕ ಫ್ಲೈಟ್ ಹತ್ತಲಿದ್ದಾರೆ. ಡಿ.ಕೆ ಶಿವಕುಮಾರ್ ಅವರು ಅಮೆರಿಕದ ನಾರ್ಥ್ ಕ್ಯಾರೋಲಿನಾದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದ್ದು, ಕಾರ್ಯಕ್ರಮ ಮುಗಿದ ನಂತರ ಸೆಪ್ಟೆಂಬರ್ 14 ರಂದು ಸ್ವದೇಶಕ್ಕೆ ವಾಪಸ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.
ಅಮೆರಿಕ ಅಧ್ಯಕ್ಷ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಭಾರತೀಯ ಮೂಲದ ಪ್ರಜೆಗಳು ಕೂಡ ಅಮೆರಿಕೆಯಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದು, ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅವರು ಡೆಮಾಕ್ರಾಟ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಇವರ ವಿರುದ್ಧ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ (Donald Trump) ಅವರು ಕಣಕ್ಕೆ ಇಳಿದಿದ್ದಾರೆ. ಎರಡು ಪಕ್ಷಗಳ ನಡುವೆ ಬಿಗ್ ಫೈಟ್ ಏರ್ಪಟ್ಟಿದ್ದು, ಎರಡೂ ಪಕ್ಷಗಳು ಭಾರತೀಯ ಮತದಾರರನ್ನು ಓಲೈಸಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ.
ಡೊನಾಲ್ಡ್ ಟ್ರಂಪ್ 2ನೇ ಬಾರಿಗೆ ಅಧ್ಯಕ್ಷರಾಗುವ ಕನಸು ಕಾಣುತ್ತಿದ್ದಾರೆ. ಇನ್ನೊಂದೆಡೆ ಕಮಲಾ ಹ್ಯಾರಿಸ್ ಅವರು ಸದ್ಯ ಅಮೆರಿಕದ ಉಪಾಧ್ಯಕ್ಷೆಯಾಗಿದ್ದು ಒಂದು ವೇಳೆ ಅವರು ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಭಾರತ ಮೂಲದ ಮಹಿಳೆ ಒಬ್ಬರು ವಿಶ್ವದ ಬಲಿಷ್ಠ ರಾಷ್ಟ್ರದ ಅಧ್ಯಕ್ಷರಾದ ಹಿರಿಮೆಗೆ ಪಾತ್ರರಾಗಲಿದ್ದಾರೆ.
ಅಮೆರಿಕಾದಿಂದ ಕಮಲಾ ಹ್ಯಾರಿಸ್ ಅವರ ಕಾರ್ಯಕ್ರಮದ ಕರೆ ಬರುತ್ತಿದ್ದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿ ಗೃಹ ಕಚೇರಿಯಲ್ಲಿ ಅವರನ್ನು ಭೇಟಿಯಾದ ಡಿಕೆ ಶಿವಕುಮಾರ್, ಇಂದು ರಾತ್ರಿ ತಮ್ಮ ಅಮೆರಿಕಾ ಪ್ರವಾಸದ ಬಗ್ಗೆ ಸಿಎಂಗೆ ಮಾಹಿತಿ ನೀಡಿದರು.
ಈ ಸುದ್ದಿ ಓದಿ: ಯುಎಇ ಗೆ ಬಂದಿಳಿದ ಕಮಲಾ ಹ್ಯಾರಿಸ್