Monday, 7th October 2024

HD Kumaraswamy: ಚನ್ನಪಟ್ಟಣದಲ್ಲಿ ಮಗ ನಿಖಿಲ್‌ ಜೊತೆ ಕೇಂದ್ರ ಸಚಿವ ಎಚ್​​​​ಡಿ ಕುಮಾರಸ್ವಾಮಿ ಪ್ರಚಾರ ಆರಂಭ

hd kumaraswamy nikhil

ರಾಮನಗರ: ಚನ್ನಪಟ್ಟಣ ಉಪಚುನಾವಣೆಗೆ (Channapatna Bypoll) ಬಿಜಪಿ- ಜೆಡಿಎಸ್‌ ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆಯ್ಕೆ ಬಹುತೇಕ ಖಚಿತವಾಗಿದೆ. ಜೆಡಿಎಸ್ ನಾಯಕ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ (HD Kumaraswamy) ಹಾಗೂ ಯುವನಾಯಕ ನಿಖಿಲ್ ಕುಮಾರಸ್ವಾಮಿ ನಿನ್ನೆ ಕ್ಷೇತ್ರಕ್ಕೆ ಭೇಟಿ ನೀಡಿ ಬಹಿರಂಗ ಸಭೆಯಲ್ಲಿ ಭಾಗಿಯಾದರು.

ಕ್ಷೇತ್ರದ 5 ಜಿಲ್ಲಾ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಇಬ್ಬರೂ ಭಾಗವಹಿಸಿದರು. ತಾಲೂಕು ಜೆಡಿಎಸ್ ಅಧ್ಯಕ್ಷ ಎಚ್.ಸಿ.ಜಯಮುತ್ತು ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳಲ್ಲಿ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಭಾಗಿಯಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ನಿಖಿಲ್ ಕುಮಾರಸ್ವಾಮಿ ಅವರು ಕ್ಷೇತ್ರದಲ್ಲಿ ಪಕ್ಷದ ನೋಂದಣಿ ಅಭಿಯಾನವನ್ನು ನಡೆಸಿದ್ದರು. ಈಗ ಕುಮಾರಸ್ವಾಮಿ ಅವರು ನಿಖಿಲ್ ಜೊತೆಗೆ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮಕ್ಕೆ ಆಗಮಿಸಿ ಕೋಡಂಬಳ್ಳಿ ಜಿ.ಪಂ ವ್ಯಾಪ್ತಿಯ ಕಾರ್ಯಕರ್ತರು, ಮುಖಂಡರ ಸಭೆಯಲ್ಲಿ ಭಾಗಿ‌ಯಾದರು.

ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಚನ್ನಪಟ್ಟಣ ಪ್ರವಾಸದ ಬೆನ್ನಲ್ಲೇ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದು, ಚುನಾವಣೆ ದಿನಾಂಕ ಘೋಷಣೆ ಮುನ್ನವೇ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಚನ್ನಪಟ್ಟಣ ತಾಲೂಕು ಜೆಡಿಎಸ್ ಅಧ್ಯಕ್ಷ ಎಚ್.ಸಿ.ಜಯಮುತ್ತು, ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಇದು ಜೆಡಿಎಸ್ ನ ಕ್ಷೇತ್ರ, ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ಬೈಎಲೆಕ್ಷನ್ ನಡೆಯುತ್ತಿದೆ. ಹಾಗಾಗಿ ಈ ಕ್ಷೇತ್ರ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿ ಅವರನ್ನೇ ಅಭ್ಯರ್ಥಿ ಮಾಡೋಣ, ಯಾವುದೇ ಭಿನ್ನಾಭಿಪ್ರಾಯ ಇದ್ದರೂ ಅದನ್ನು ಬಿಟ್ಟು ಒಗ್ಗಟ್ಟಾಗಿ ಕೆಲಸ ಮಾಡಿ. ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಕೊಂಡು ಬರೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಆ ಬಳಿಕ ಮಾತನಾಡಿದ ಎಚ್​​​ಡಿಕೆ, ಅಭ್ಯರ್ಥಿ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ, ಜಯಮುತ್ತು ಚನ್ನಪಟ್ಟಣ ತಾಲೂಕು ಜೆಡಿಎಸ್ ಅಧ್ಯಕ್ಷರಾಗಿದ್ದಾರೆ. ನಾನು ಏನು ತೀರ್ಮಾನ ಮಾಡ್ತೇನೆ, ಅದಕ್ಕೆ ಎಲ್ಲ ಕಾರ್ಯಕರ್ತರು ಒಪ್ಪಿಗೆ ಕೊಡಬೇಕು. ನನಗೆ ನಿಮ್ಮ ಆಶೀರ್ವಾದ ಬೇಕು. ಕೈ ಜೋಡಿಸಿ ಮನವಿ ಮಾಡ್ತೇನೆ. ದೇವೇಗೌಡರು ನಾನೇ ಪ್ರತಿ ಹಳ್ಳಿಗೂ ಬರ್ತೇನೆಂದು ಹೇಳಿದ್ದಾರೆ. ನಾನು ನಿಮ್ಮ ಋಣ ತೀರಿಸಿ ಮಣ್ಣಿಗೆ ಹೋಗುವವನು. ಜನರ ಎದುರು ಮಾತನಾಡಿದ್ದನ್ನು ನೆರವೇರಿಸದೇ ನನ್ನ ಜೀವ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: HD Kumaraswamy: 50 ಕೋಟಿಗೆ ಬೇಡಿಕೆ ಆರೋಪ; ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲು