Saturday, 14th December 2024

ವಾಯುಭಾರ ಕುಸಿತ: ಸೆ.24ರ ತನಕ ವಿವಿಧ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿದ ಪರಿಣಾಮ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಿದೆ.

ಬೆಂಗಳೂರು ಸೇರಿದಂತೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆ.24ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆ ಬಿರುಸಾಗುವ ಸಾಧ್ಯತೆ ಇದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದ ಗಿರಿ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಮಂಗಳ ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಕೊಡಗು, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯಲಿದೆ.

ಸೆಪ್ಟೆಂಬರ್ ತಿಂಗಳ ಅಂತ್ಯದ ತನಕ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ. ವಿವಿಧ ರಾಜ್ಯಗಳಲ್ಲಿ ಇನ್ನೂ 4 ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನಿಡಿದೆ.

ರಾಜಸ್ಥಾನ, ಗುಜರಾತ್, ತಮಿಳುನಾಡು, ಪಶ್ಚಿಮ ಬಂಗಾಳ, ಒಡಿಶಾ, ಉತ್ತರಾಖಂಡ್, ಮಧ್ಯಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಸಿಕ್ಕಿಂ, ಕೇರಳ, ಮೇಘಾ ಲಯ, ಬಿಹಾರ, ಲಕ್ಷದ್ವೀಪ, ತೆಲಂಗಾಣದಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿಗೆ ಆಗಸ್ಟ್ 31ರ ತನಕ ಹರಿಸಬೇಕಾದ ನೀರಿನ ಪೈಕಿ ಸದ್ಯಕ್ಕೆ 7 ಟಿಎಂಸಿ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿತ್ತು. ಕರ್ನಾಟಕ ಆಗಸ್ಟ್ 30ರ ತನಕ 57.04 ಟಿಎಂಸಿ ಅಡಿ ನೀರನ್ನು ಮಾತ್ರ ತಮಿಳುನಾಡಿಗೆ ಹರಿಸಿದೆ.

ಸೆಪ್ಟೆಂಬರ್‌ನಲ್ಲಿ ಉತ್ತಮ ಮಳೆಯಾದರೆ ಬಾಕಿ ನೀರನ್ನು ತಮಿಳುನಾಡಿಗೆ ಹರಿಸುವುದಾಗಿ ಕರ್ನಾಟಕದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ತಿಳಿಸಿತ್ತು.